ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ರೈತವಿದ್ಯಾನಿಧಿ ಯೋಜನೆಯ ಕುರಿತು ಹೆಚ್ಚಿನ ಜಾಗೃತಿ ಮೂಡಿಸಿ : ಸಚಿವ ಬಿ.ಸಿ.ಪಾಟೀಲ್

2 Min Read

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, (ಮಾ..06) : ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಯಾವುದೇ ತೊಂದರೆಯಾಗದಂತೆ ಸಮರ್ಪಕವಾಗಿ ಕುಡಿಯುವ  ನೀರು ಪೂರೈಸಬೇಕು. ಕುಡಿಯುವ ನೀರು ಸಮಸ್ಯೆ ಎದುರಿಸುವ ಗ್ರಾಮಗಳಲ್ಲಿ, ಬೋರ್‍ವೆಲ್ ಅವಶ್ಯಕತೆ ಇರುವ ಕಡೆ ಸಂಬಂಧಪಟ್ಟ ಇಲಾಖೆಯ ಅವರು ಪ್ರಮಾಣಿಕರಿಸಿದ ನಂತರ ತಕ್ಷಣವೇ ಬೋರ್‍ವೆಲ್ ಕೊರೆಸಿ, ಕುಡಿಯುವ ನೀರು ಸೌಲಭ್ಯ ಕಲ್ಪಿಸಬೇಕು ಎಂದು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೋರ್‍ವೆಲ್ ಕೊರೆಸುವ ಮುಂಚಿತವಾಗಿಯೇ ನೀರು ಲಭ್ಯವಿರುವ ಬಗ್ಗೆ ಕನಿಷ್ಟ ಎರಡರಿಂದ ಮೂರು ಪಾಯಿಂಟ್ ಮಾಡಬೇಕು. ಒಂದು ಬೋರ್‍ವೆಲ್ ವಿಫಲವಾದಾಗ ಮೊತ್ತೊಂದು ಪಾಯಿಂಟ್‍ನಲ್ಲಿ ಬೋರ್‍ವೆಲ್ ಕೊರೆಸಬೇಕು. ಯಾವುದೇ ರೀತಿಯಲ್ಲಿಯೂ ಜನರಿಗೆ ಕುಡಿಯುವ ನೀರಿನ ತೊಂದರೆಯಾಗಕೂಡದು ಎಂದು ಸಚಿವರು ತಾಕೀತು ಮಾಡಿದರು.

ಮುಂದಿನ ದಿನಗಳಲ್ಲಿ ಬೇಸಿಗೆ ಬರುವುದರಿಂದ ಜಿಲ್ಲೆ ಹಲವು ಕಡೆ ಕುಡಿಯುವ ನೀರಿನ ಅಭಾವ ತಲೆದೋರುವ ಸಾಧ್ಯತೆ ಇದೆ. ತುಂಗಭದ್ರಾ ಹಿನ್ನೀರಿನಿಂದ ಕುಡಿಯುವ ನೀರು ಬರುವುದು ನಾಲ್ಕೈದು ತಿಂಗಳು ತಡವಾಗಬಹುದು. ಹಾಗಾಗಿ   ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ, ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ ಗ್ರಾಮಗಳಲ್ಲಿ ಬೋರ್‍ವೆಲ್‍ಗಳ ಕೊರೆಸಿ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಗ್ರಾಮೀಣ ಕುಡಿಯುವ ನೀರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅರ್ಹರೆಲ್ಲರಿಗೂ ರೈತ ವಿದ್ಯಾನಿಧಿ:
ಜಿಲ್ಲೆಯಲ್ಲಿ ಮುಖ್ಯಮಂತ್ರಿ ರೈತವಿದ್ಯಾನಿಧಿ ಯೋಜನೆಯ ಫಲಾನುಭವಿಗಳ ಸಂಖ್ಯೆ ಕಡಿಮೆ ಇದೆ. ಅರ್ಹರೆಲ್ಲರನ್ನೂ ಈ ಯೋಜನೆಗೆ ಸೇರಿಸಬೇಕು. ಅರ್ಹ ಫಲಾನುಭವಿ ಯಾವುದೇ ಕಾರಣಕ್ಕೂ ಈ ಯೋಜನೆಯಿಂದ ವಂಚಿತರಾಗಬಾರದು. ರಾಜ್ಯ ವಿದ್ಯಾರ್ಥಿವೇತನ ಫೋರ್ಟ್‍ಲ್‍ನಲ್ಲಿ ನೋಂದಣಿ ಮಾಡಿಸುವಂತೆ ಡಿಡಿಪಿಐ ಹಾಗೂ ಡಿಡಿಪಿಯು ಅವರಿಗೆ ತಾಕೀತು ಮಾಡಿದರು.

ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 8, 9 ಮತ್ತು 10ನೇ ತರಗತಿಯ ರೈತರ ಹೆಣ್ಣು ಮಕ್ಕಳು ಕಡ್ಡಾಯವಾಗಿ ಖಾತೆ ತೆರೆದು, ಆಧಾರ್ ಲಿಂಕ್ ಮಾಡಲು ಅಗತ್ಯ ಕ್ರಮವಹಿಸಬೇಕು. ಮುಖ್ಯಮಂತ್ರಿ ರೈತವಿದ್ಯಾನಿಧಿ ಯೋಜನೆಯ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು.

ಅದೇ ರೀತಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ವೃತ್ತಿ ಪರ ಕೋರ್ಸ್‍ಗಳ ವಿದ್ಯಾರ್ಥಿಗಳಿಗೂ ಇದರ ಬಗ್ಗೆ ಅರಿವು ಮೂಡಿಸಬೇಕು, ಎಲ್ಲ ವರ್ಗದ ವಿದ್ಯಾರ್ಥಿಗಳು ಕೂಡ ಬ್ಯಾಂಕ್ ಖಾತೆ ತೆರೆದು, ಆಧಾರ್ ಜೋಡಣೆ ಮಾಡಿಕೊಳ್ಳುವಂತಾಗಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು.
ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ ಮಾತನಾಡಿ, ಜಿಲ್ಲೆಯಲ್ಲಿ 3978 ರೈತ ಮಕ್ಕಳು ಮುಖ್ಯಮಂತ್ರಿ ರೈತವಿದ್ಯಾನಿಧಿಯೋಜನೆಯ ಫಲಾನುಭವಿಗಳಾಗಿದ್ದಾರೆ. ಅರ್ಹರೆಲ್ಲರನ್ನೂ ತ್ವರಿತಗತಿಯಲ್ಲಿ ಈ ಯೋಜನೆಗೆ ಸೇರಿಸುವಂತೆ ಈಗಾಗಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಲಾಗಿದೆ ಎಂದರು.

ಸಭೆಯಲ್ಲಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಪೂರ್ಣಿಮಾ ಕೆ.ಶ್ರೀನಿವಾಸ್, ಟಿ.ರಘುಮೂರ್ತಿ, ಗೂಳಿಹಟ್ಟಿ ಡಿ.ಶೇಖರ್, ಎಂ.ಚಂದ್ರಪ್ಪ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್, ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ಚಂದ್ರಯ್ಯ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Share This Article
Leave a Comment

Leave a Reply

Your email address will not be published. Required fields are marked *