ದಾವಣಗೆರೆ : ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಹಂಚಿಕೆ ಗೊಂದಲಕ್ಕೆ ತೆರೆ ಬಿದ್ದಿದ್ದರೂ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಪಕ್ಷವು ಶಾಮನೂರು ಕುಟುಂಬದ ಸಮರ್ಥ್ ಅವರಿಗೆ ಅಭ್ಯರ್ಥಿತ್ವ ನೀಡಿದ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ವಿಚಾರವಾಗಿ ಶಾಮನೂರು ಕುಟುಂಬ ಮತ್ತು ಅಲ್ಪಸಂಖ್ಯಾತ ನಾಯಕರು ನಡುವೆ ತೀವ್ರ ಪೈಪೋಟಿ ನಡೆದಿತ್ತು. ಕೊನೆಗೂ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಶಾಮನೂರಿಗೆ ಕಾಂಗ್ರೆಸ್ ಹೈಕಮಾಂಡ್ ಬಿ-ಫಾರಂ ನೀಡಿದೆ. ಈ ನಿರ್ಧಾರ ಹೊರಬಿದ್ದ ತಕ್ಷಣವೇ ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದವರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದಾರೆ.
ನಗರದ ಅಖ್ತರ್ ರಝಾ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ‘ಜಸ್ಟಿಸ್ ಫಾರ್ ಮೈನಾರಿಟೀಸ್’ ಹಾಗೂ ‘ಜಸ್ಟಿಸ್ ಫಾರ್ ಅಹಿಂದ’ ಎಂಬ ಘೋಷಣೆಗಳನ್ನು ಕೂಗುತ್ತ, ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ರಾಜ್ಯ ಉಸ್ತುವಾರಿ Randeep Singh Surjewala ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ, ಟಿಕೆಟ್ ನಿರೀಕ್ಷಿಸಿದ್ದ ಮುಸ್ಲಿಂ ಮುಖಂಡ ಸಾದಿಕ್ ಪೈಲ್ವಾನ್ ಅವರಿಗೆ ಅವಕಾಶ ಸಿಗದ ಹಿನ್ನೆಲೆ ಅವರು ಸ್ವತಂತ್ರವಾಗಿ ಸ್ಪರ್ಧಿಸಲು ಸನ್ನದ್ಧರಾಗಿರುವುದಾಗಿ ಘೋಷಿಸಿದ್ದಾರೆ. ಹಲವು ವರ್ಷಗಳಿಂದ ಕಾಂಗ್ರೆಸ್‌ಗೆ ಸೇವೆ ಸಲ್ಲಿಸಿದ್ದರೂ ಅನ್ಯಾಯವಾಗಿದೆ ಎಂದು ಅವರು ಆರೋಪಿಸಿ, ಈ ಬಾರಿ ಪಕ್ಷಕ್ಕೆ ಪಾಠ ಕಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಬಳಿಕ ಉಂಟಾದ ಅಸಮಾಧಾನ ಉಪಚುನಾವಣೆಯ ರಾಜಕೀಯ ಸಮೀಕರಣಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.






