ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಚುನಾವಣಾ ಅಧಿಕಾರಿಗಳು ವಿಶೇಷ ಕ್ರಮಗಳನ್ನು ಕೈಗೊಂಡಿದ್ದು, ಒಟ್ಟು 10 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯಾನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠಲರಾವ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಮತದಾರರನ್ನು ಉತ್ತೇಜಿಸಲು 5 ‘ಸಖಿ’ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಇಲ್ಲಿ ಮಹಿಳಾ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ ಎಂದು ಹೇಳಿದರು. ಇದರೊಂದಿಗೆ ಯುವ ಮತದಾರರನ್ನು ಪ್ರೋತ್ಸಾಹಿಸಲು 2 ಯುವ ಮತಗಟ್ಟೆಗಳು ಸ್ಥಾಪನೆಯಾಗುತ್ತಿದ್ದು, 18 ರಿಂದ 21 ವರ್ಷದೊಳಗಿನ ಸಿಬ್ಬಂದಿ ಇಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
ಹಾಗೇ, ಸ್ಥಳೀಯ ಸಂಸ್ಕೃತಿ ಮತ್ತು ಕಲೆಗಳನ್ನು ಪ್ರತಿಬಿಂಬಿಸುವ ಉದ್ದೇಶದಿಂದ 2 ಥೀಮ್ಯಾಟಿಕ್ (ಸಾಂಸ್ಕೃತಿಕ) ಮತಗಟ್ಟೆಗಳನ್ನು ನಿರ್ಮಿಸಲಾಗುತ್ತಿದೆ. ವಿಶೇಷ ಅಗತ್ಯವಿರುವ ಮತದಾರರ ಅನುಕೂಲಕ್ಕಾಗಿ 1 ವಿಕಲಚೇತನ ಸ್ನೇಹಿ ಮತಗಟ್ಟೆಯನ್ನೂ ಸಿದ್ಧಪಡಿಸಲಾಗುತ್ತಿದೆ, ಇಲ್ಲಿ ವಿಕಲಚೇತನ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ‘ಸಿ-ವಿಜಿಲ್’ (C-Vigil) ಮೊಬೈಲ್ ಆಪ್ ಬಳಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಈ ಆಪ್ ಮೂಲಕ ಫೋಟೋ ಅಥವಾ ವಿಡಿಯೋಗಳನ್ನು ಅಪ್‌ಲೋಡ್ ಮಾಡಿದರೆ 24 ಗಂಟೆಗಳೊಳಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಮತದಾರ ಸ್ನೇಹಿ ವ್ಯವಸ್ಥೆ ರೂಪಿಸುವ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯುವಂತೆ ಚುನಾವಣಾ ಆಯೋಗ ಪ್ರಯತ್ನಿಸುತ್ತಿದೆ.














