ಸುದ್ದಿಒನ್, ಬೆಂಗಳೂರು (ಡಿ.27): ಮಾಜಿ ಪ್ರಧಾನಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮನಮೋಹನ್ ಸಿಂಗ್ (92 ವರ್ಷ) ಅವರು ಗುರುವಾರ ರಾತ್ರಿ ನಿಧನರಾದರು. ಈ ಹಿನ್ನಲೆಯಲ್ಲಿ ಸರ್ಕಾರ ಇಂದು (ಡಿಸೆಂಬರ್ 27 ರಂದು) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
ಶಾಲಾ-ಕಾಲೇಜುಗಳು, ಬ್ಯಾಂಕ್‌ಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಸರ್ಕಾರಿ ರಜೆ ಮತ್ತು ಏಳು ದಿನಗಳ ಶೋಕಾಚರಣೆ
ಘೋಷಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ಅವರನ್ನು ಗುರುವಾರ ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲು ಮಾಡಲಾಗಿತ್ತು. ರಾತ್ರಿಯ ವೇಳೆಗೆ ಅವರು ಚಿಕಿತ್ಸೆಗೆ ಸ್ಪಂದಿಸದೆ ವಿಧಿವಶರಾಗಿದ್ದಾರೆ. ರಾತ್ರಿ 8.06 ನಿಮಿಷಕ್ಕೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ರಾತ್ರಿ 9.51ಕ್ಕೆ ಅವರು ಅಸುನೀಗಿದ್ದಾರೆ ಎಂದು ದೆಹಲಿ ಏಮ್ಸ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಮನಮೋಹನ್ ಸಿಂಗ್ ಅವರು ದೇಶದ ಹಣಕಾಸು ಸಚಿವರಾಗಿ ಗಮನಾರ್ಹ ಸಾಧನೆ ಮಾಡಿದ್ದಾರೆ. 1991ರಲ್ಲಿ ಪಿ.ವಿ ನರಸಿಂಹ ರಾವ್ ಅವರ ಸರ್ಕಾರದಲ್ಲಿ ಮೊದಲ ಬಾರಿಗೆ ವಿತ್ತ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದರು. 2004 ರಿಂದ 2014ರವರೆಗೂ ಭಾರತದ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಕಳೆದ ಏಪ್ರಿಲ್ ತಿಂಗಳಲ್ಲಿ ಮನಮೋಹನ್ ಸಿಂಗ್ ಅವರು ರಾಜ್ಯಸಭಾ ಸದಸ್ಯ ಸ್ಥಾನದಿಂದ ನಿವೃತ್ತಿ ಪಡೆದುಕೊಂಡಿದ್ದರು.
ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.
ಇನ್ನು ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆ ಇಂದು ಬೆಳಗಾವಿಯಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಅಧಿವೇಶನ ರದ್ದಾಗಿದೆ. ಈಗಾಗಲೇ ಸೋನಿಯಾ ಗಾಂಧಿ, ಪ್ರಿಯಾಂಕ ವಾದ್ರಾ ಅಂತಿಮ ದರ್ಶನಕ್ಕೆ ತೆರಳಿದ್ದಾರೆ. ಇದೀಗ ರಾಜ್ಯ ಕಾಂಗ್ರೆಸ್ ನಾಯಕರು ಸಹ ಅಂತಿಮ ದರ್ಶನಕ್ಕಾಗಿ ದೆಹಲಿಯತ್ತ ಪಯಣ ಬೆಳೆಸಿದ್ದಾರೆ. ನಾಳೆ ಕಾರ್ಯಕ್ರಮದ ನಿಮಿತ್ತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಕೂಡ ಬೆಳಗಾವಿಗೆ ಆಗಮಿಸಿದ್ದರು. ವಿಷಯ ತಿಳಿಯುತ್ತಿದ್ದಂತೆ ದೆಹಲಿಗೆ ಫ್ಲೈಟ್ ಹತ್ತಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ವೇಣುಗೋಪಾಲ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನ ನಾಯಕರು ದೆಹಲಿಗೆ ಹೊರಟಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತಿಮ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.