Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಮೇಲ್ಮನವಿಗೆ ತೀರ್ಮಾನ : ಸಿಎಂ ಡಿ.ಕೆ ಶಿವಕುಮಾರ್

---Advertisement---

ದೆಹಲಿ.ಜುಲೈ.30: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ದೆಹಲಿಯ ಕರ್ನಾಟಕ ಭವನದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್ ಅವರು, ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಈ ಬಾರಿ ವರುಣನ ಕೃಪೆ ಇಲ್ಲದಿರುವುದರಿಂದ, ಈ ಆದೇಶವನ್ನು ಪ್ರಶ್ನಿಸುವ ಕುರಿತು ಸಚಿವ ರಾಮಲಿಂಗಾರೆಡ್ಡಿ, ಅಡ್ವೊಕೇಟ್ ಜನರಲ್, ಕಾನೂನು ತಜ್ಞರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ನಡೆಸಿ ಮೇಲ್ಮನವಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿಂದೆ ಸಮಿತಿಯು ತಮಿಳುನಾಡಿನ ಮನವಿಯನ್ನು ಎರಡು ಬಾರಿ ತಿರಸ್ಕರಿಸಿತ್ತು ಎಂಬುದನ್ನು ಇಲ್ಲಿ ಗಮನಿಸಬೇಕಾಗಿದೆ ಎಂದರು.

ಬೆಂಗಳೂರಿಗೆ ಮರಳಿದ ನಂತರ ವಿರೋಧ ಪಕ್ಷದ ನಾಯಕರ ಜೊತೆಯೂ ಈ ಬಗ್ಗೆ ಚರ್ಚಿಸಲಾಗುವುದು. ಈ ಮಧ್ಯೆ ತಮಿಳುನಾಡು ಸಿಎಂ ವಿಜಯ್‌ ಅವರು ನನ್ನ ಜೊತೆ ಚರ್ಚಿಸಲು ಇಂಗಿತ ವ್ಯಕ್ತಪಡಿಸಿ ಮುಖ್ಯಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ನನ್ನ ಜೊತೆ ದೂರವಾಣಿ ಮೂಲಕವೂ ಮಾತನಾಡಿದ್ದಾರೆ. ನಾವು ಅವರಿಗೆ ನೀಡಬೇಕಾದ ಗೌರವ ನೀಡಿ, ಸಭೆಗೆ ಬನ್ನಿ ಎಂದು ಹೇಳಿದ್ದೇನೆ. ನಮ್ಮ ರಾಜ್ಯಕ್ಕೆ ಬರುವ ಅತಿಥಿಗಳನ್ನು ಗೌರವದಿಂದ ಸ್ವೀಕರಿಸುವುದು ನಮ್ಮ ಕರ್ತವ್ಯ. ಹೀಗಾಗಿ ಆಹ್ವಾನಿಸಿದ್ದು, ಅದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ನಮ್ಮ ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿಯನ್ನು ಬಂದು ನೋಡಿ ಎಂದು ತಮಿಳುನಾಡು ಸಿಎಂ ವಿಜಯ್ ಅವರಿಗೆ ನಾವು ಮನವಿ ಮಾಡಿದ್ದೇವೆ. ಅದಕ್ಕೆ ಅಗತ್ಯವಿರುವ ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಲಾಗುವುದು ಎಂದೂ ಹೇಳಿದ್ದೇನೆ. ಅವರಿಗೂ ವಾಸ್ತವ ಪರಿಸ್ಥಿತಿಯ ಅನುಭವ ಆಗಬೇಕು ಎಂದರು.

ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪೊಲೀಸರ ದಾಳಿಗೆ ಗೃಹ ಸಚಿವ ಅಮಿತ್ ಶಾ ಅವರೇ ಹೊಣೆ ಎಂದು ಹೇಳಿರುವುದು ಕೇವಲ ರಾಹುಲ್ ಗಾಂಧಿ ಅವರ ಹೇಳಿಕೆ ಮಾತ್ರವಲ್ಲ, ಇದು ದೇಶದ ಪ್ರಶ್ನೆ. ಇದು ದೊಡ್ಡ ವಿಚಾರವಾದರೂ, ರಾಹುಲ್ ಗಾಂಧಿ ಅವರು ಕೇಳಿರುವುದು ಸರಳ ಪ್ರಶ್ನೆ ಅಷ್ಟೇ. ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಪ್ರಯೋಗಕ್ಕೆ ಅನುಮತಿ ಕೊಟ್ಟವರು ಯಾರು? ದೆಹಲಿ ಪೊಲೀಸರು ಕೇಂದ್ರ ಸರ್ಕಾರದ ಅಧೀನದಲ್ಲಿರುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಮೂಲಭೂತ ಪ್ರಶ್ನೆ ಕೇಳುವುದು ವಿರೋಧ ಪಕ್ಷದ ನಾಯಕರು ಹಾಗೂ ಪ್ರತಿಯೊಬ್ಬರ ಕರ್ತವ್ಯವಾಗಿದೆ. ನನ್ನ ರಾಜಕೀಯ ಇತಿಹಾಸದಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಪ್ರಯೋಗಿಸಿರುವುದನ್ನು ನೋಡುತ್ತಿರುವುದು ಇದೇ ಮೊದಲು. ಈ ಬಗ್ಗೆ ವಿವರಣೆ ನೀಡುವುದು ಗೃಹ ಸಚಿವರ ಕರ್ತವ್ಯವಾಗಿದೆ ಎಂದು ತಿಳಿಸಿದ್ದಾರೆ.

Join WhatsApp

Join Now

Join Telegram

Join Now