ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 14 : ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯಗಳಿಗಿದೆ ಎಂದು ಸುಪ್ರೀಂಕೋರ್ಟ್ ಮಹತ್ತರ ತೀರ್ಪು ನೀಡಿದ್ದರೂ ರಾಜ್ಯ ಸರ್ಕಾರ ಮೀನಾಮೇಷ ಎಣಿಸುತ್ತಿರುವುದನ್ನು ವಿರೋಧಿಸಿ ದಲಿತ ಸಂಘಟನೆಗಳ ವತಿಯಿಂದ ಅ.16 ರಂದು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದೆಂದು ಎಂ.ಶಿವಮೂರ್ತಿ ಚಳ್ಳಕೆರೆ ಇವರು ತಿಳಿಸಿದರು.
ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಲಾಗುವುದು. ವಿವಿಧ ದಲಿತ ಸಂಘಟನೆಗಳ ಮುಖಂಡರು, ಚಿಂತಕರು, ಸಾಹಿತಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ
ಎಂ.ಶಿವಮೂರ್ತಿ ಮನವಿ ಮಾಡಿದರು.
ಕೆ.ಟಿ.ಶಿವಕುಮಾರ್ ಮಾತನಾಡುತ್ತ ಒಳ ಮೀಸಲಾತಿ ನಮ್ಮ ಹಕ್ಕು. ತಡ ಮಾಡದೆ ಜಾರಿಗೊಳಿಸಬೇಕು. ಇಲ್ಲವಾದಲ್ಲಿ ಬೀದಿಗಿಳಿದು ಉಗ್ರ ಹೋರಾಟ ನಡೆಸಬೇಕಾಗುತ್ತದೆ. ಮಾದಿಗರ ಪರವಾಗಿರುವುದಾಗಿ ಹೇಳಿಕೊಳ್ಳುತ್ತಿರುವ ಅಹಿಂದಾ ವರ್ಗದ ನಾಯಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳ ಮೀಸಲಾತಿ ಜಾರಿಗೆ ತಂದು ಜಿಲ್ಲೆಗೆ ಕಾಲಿಡಬೇಕು. ಇಲ್ಲವಾದಲ್ಲಿ ವಿದ್ಯಾವಂತನಿಂದ ಹಿಡಿದು ಅನಕ್ಷರಸ್ಥರು ಎಲ್ಲಿ ಯಾವಾಗ ಘೇರಾವ್ ಹಾಕುತ್ತಾರೋ ಗೊತ್ತಿಲ್ಲ ಎಂದು ಸರ್ಕಾರವನ್ನು ಎಚ್ಚರಿಸಿದರು.
ಕೆ.ರಾಜಣ್ಣ ಮಾತನಾಡಿ ಕಳೆದ ಮೂವತ್ತು ವರ್ಷಗಳಿಂದಲೂ ಒಳ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಪರಿಶಿಷ್ಟ ಜಾತಿಯಲ್ಲಿನ 101 ಉಪಜಾತಿಗಳಿಗೆ ಅನ್ಯಾಯವಾಗಬಾರದೆಂದು. ಪ್ರತಿ ಹಳ್ಳಿ ಹಳ್ಳಿಗೆ ಹೋಗಿ ಒಳ ಮೀಸಲಾತಿ ಕುರಿತು ದಲಿತರಲ್ಲಿ ಜಾಗೃತಿ ಮೂಡಿಸಲಾಗುವುದೆಂದರು. ಕುಂಚಿಗನಹಾಳ್ ಮಹಾಲಿಂಗಪ್ಪ, ಚಿಕ್ಕಗೊಂಡನಹಳ್ಳಿ ಮಲ್ಲಿಕಾರ್ಜುನ್, ಎಂ.ಆರ್.ಶಿವರಾಜ್, ಬಸಮ್ಮ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.