ಭದ್ರಾ ಮೇಲ್ದಂಡೆಗೆ ಕೇಂದ್ರದ ಅನುದಾನ ಒದಗಿಲು ಆಗ್ರಹ : ನೀರಾವರಿ ಅನುಷ್ಠಾನ ಹೋರಾಟ ಸಮಿತಿಯಿಂದ ಸಚಿವ ಎ.ನಾರಾಯಣಸ್ವಾಮಿಗೆ ಮನವಿ

2 Min Read

ಸುದ್ದಿಒನ್, ಚಿತ್ರದುರ್ಗ, ಜನವರಿ.09 : ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ  ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಅನುದಾನದ ಕೊರತೆಯಿಂದಾಗಿ ಕುಂಟುತ್ತಾ ಸಾಗಿದ್ದು ಕೇಂದ್ರ ಸರ್ಕಾರ ಕೂಡಲೇ ಘೋಷಿತ 5300 ಕೋಟಿ ರುಪಾಯಿ ಅನುದಾನ ಬಿಡುಗಡೆ ಮಾಡಬೇಕೆಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರನ್ನು ಆಗ್ರಹಿಸಿದೆ.

ಈ ಸಂಬಂಧ ಸೋಮವಾರ ಸಚಿವ ಎ.ನಾರಾಯಣಸ್ವಾಮಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಯೋಜನೆ ನಿಧಾನಗತಿಯಲ್ಲಿ ಸಾಗಿರುವುದು ರೈತಾಪಿ ಸಮುದಾಯದಲ್ಲಿ ಕಳವಳ ಮೂಡಿಸಿದೆ. ರಾಜ್ಯ ಸರ್ಕಾರದ ಉದಾಸೀನ ಮನೋಭಾವ, ಕೇಂದ್ರ ಸರ್ಕಾರ ಘೋಷಿತ ವಚನವ ಈಡೇರಿಸದೇ ಇರುವುದು ಪ್ರಮುಖ ಕಾರಣ.ಪ್ರಭುತ್ವದ ಇಚ್ಚಾಶಕ್ತಿ ಕೊರತೆಯಿಂದಾಗಿ ಜನತೆ ಪರಿತಪಿಸುವಂತಾಗಿದೆ ಎಂದು ದೂರಿದರು.

ಭದ್ರಾ ಮೇಲ್ದಂಡೆಯ  ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ ಕೇಂದ್ರದಿಂದ ಅನುದಾನ ಪಡೆಯುವ ಪ್ರಸ್ತಾಪಗಳು ಕಳೆದ ಹತ್ತು ವರ್ಷಗಳಿಂದಲೂ ಭಾರತ ಸರ್ಕಾರದ ಮುಂದಿದೆ. ಈ ಹಿಂದೆ ಯಡಿಯೂರಪ್ಪಅವರ ಸರ್ಕಾರ ಇದ್ದಾಗಲೇ ರಾಷ್ಟ್ರೀಯ ಯೋಜನೆ ಕಡತಗಳು ರಾಜ್ಯದಿಂದ ಕೇಂದ್ರ ಜಲಶಕ್ತಿ ಕಚೇರಿಗೆ ಮಂಡನೆಯಾಗಿದ್ದವು.  ಕಳೆದ ವಿಧಾನಸಭೆ ಚುನಾವಣೆ ವೇಳೆ ಚಿತ್ರದುರ್ಗಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಭದ್ರಾ ಮೇಲ್ದಂಡೆಯ ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ 5300 ಕೋಟಿ ರುಪಾಯಿ ಅನುದಾನ ಒದಗಿಸುವುದಾಗಿ  ಹೇಳಿದ್ದರು.

ಪ್ರಧಾನಿ ನರೇಂದ್ರ ಮೋದಿಯವರು ಚಿತ್ರದುರ್ಗ ನೆಲದಲ್ಲಿ ನಿಂತು ಮಾಡಿದ ಘೋಷಣೆ  ರೈತಾಪಿ ಸಮುದಾಯದಲ್ಲಿ ಸಂತಸದ ಹೊಳೆ ಹರಿಸಿತ್ತು. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಚುರುಕಿನ ವೇಗ ಸಿಕ್ಕು ಬೇಗನೆ ಪೂರ್ಣಗೊಳ್ಳುತ್ತದೆ ಎಂದು ಎಲ್ಲರೂ ನಂಬಿದ್ದರು. ಆದರೆ  ದೇಶದ ಪ್ರಭುತ್ವದ ವಾರಸುದಾರಿಕೆ ಹೊತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಅನುದಾನದ ಘೋಷಣೆ ಹುಸಿಯಾಗಿದ್ದು ಸಾಂವಿಧಾನಿಕ ಹುದ್ದೆಗಳ ಜವಾಬ್ದಾರಿಗಳು ನಿರ್ವಹಣೆಯಾಗುತ್ತಿರುವ ಬಗ್ಗೆ ಜನ ಅನುಮಾನ ಪಡುವಂತಾಗಿದೆ.

ನಂತರ ನಡೆದ ವಿದ್ಯಮಾನಗಳಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಭದ್ರಾ ಮೇಲ್ದಂಡೆಯ ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲು ಸಾಧ್ಯವಿಲ್ಲ. ಬದಲಿ ಪ್ರಸ್ತಾವನೆ ಸಲ್ಲಿಸಿದರೆ ಕೇಂದ್ರ ಸರ್ಕಾರ ಪರಿಗಣಿಸುತ್ತದೆ ಎಂಬ ಜಲಶಕ್ತಿ ಸಚಿವಾಲಯದ ನಿರ್ದೇಶನವನ್ನು ರಾಜ್ಯ ಸರ್ಕಾರ ಪಾಲಿಸಿದೆ. ಪ್ರಧಾನ ಮಂತ್ರಿ ಕೃಷಿ ಸಂಚಾಯಿನಿ ಯೋಜನೆ ಆಗ್ಜಿಲರೇಟೆಡ್  ಇರಿಗೇಷನ್ ಬೆನಿಪಿಟ್  ಪ್ರೋಗ್ರಾಮ್ (PMKSY-AIBP) ಅಡಿ ಅನುದಾನ ಒದಗಿಸುವ ಪ್ರಸ್ತಾವನೆಯನ್ನು ಕೇಂದ್ರದ ಮುಂದೆ ಮಂಡಿಸಲಾಗಿದೆ. ಈ ಸಂಬಂಧ ತಾವುಗಳೂ  3-7-3023 ರಂದು ಕೇಂದ್ರ ಜಲಶಕ್ತಿ ಸಚಿವ ಶೆಖಾವತ್ ಅವರಿಗೆ ಪತ್ರ ಬರೆದು ಪಿಎಂಕೆಎಸ್ ವೈ-ಎಐಬಿಪಿ ಯೋಜನೆಯಡಿ ಭದ್ರಾ ಮೇಲ್ದಂಡೆಗೆ ಅನುದಾನ ಒದಗಿಸುಂತೆ  ಮನವಿ ಮಾಡಿಕೊಂಡಿದ್ದು ಅದೂ ಕೂಡಾ ಈಡೇರಿಲ್ಲ.

ಭದ್ರಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದಲ್ಲಿಇಬ್ಬರು ಸಚಿವರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹಾಕಿ ಮಂದಿನ ಕೇಂದ್ರ ಸಂಪುಟದಲ್ಲಿ ಒಪ್ಪಿಗೆ ಪಡೆದು ಅನುದಾನ ಬಿಡುಗಡೆ ಮಾಡಬೇಕು. ಈ ಬಗ್ಗೆ ಮಧ್ಯ ಕರ್ನಾಟಕದ ರೈತಾಪಿ ಸಮುದಾಯದ ತಾಳ್ಮೆಯನ್ನು  ಪರೀಕ್ಷಿಸುವುದು ತರವಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಇದೇ ಉದಾಸೀನ ಮನೋಭಾವ ತಳೆದಲ್ಲಿ ಹೋರಾಟವನ್ನು ಉಗ್ರ ರೂಪಕ್ಕೆ ಒಯ್ಯುವುದು ಅನಿವಾರ್ಯವಾಗುತ್ತದೆ ಎಂದು ಮನವಿಯಲ್ಲಿ  ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಎಚ್ಚರಿಸಿದೆ.
ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ್, ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ, ಜಿಲ್ಲಾ ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಮಲ್ಲಾಪುರ ತಿಪ್ಪೇಸ್ವಾಮಿ, ಮುದ್ದಾಪುರ ನಾಗರಾಜ್, ಹಿರಿಯೂರು ತಾಲೂಕು ಅಧ್ಯಕ್ಷ ಶಿವಕುಮಾರ್ ಬ್ಯಾಡರಹಳ್ಳಿ, ಚಿತ್ರದುರ್ಗ ತಾಲೂಕು ಅಧ್ಯಕ್ಷ  ಹಂಪಯ್ಯನಮಾಳಿಗೆ ಧನಂಜಯ, ಸಮಿತಿ ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ ಈ ವೇಳೆ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *