*ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹ: ಎನ್ ಆರ್ ರಮೇಶ್*
ಬೆಂಗಳೂರು: ಒಂದೇ ಕುಟುಂಬದ 21 ಮಂದಿ ಗುತ್ತಿಗೆದಾರರು ಸೇರಿದಂತೆ ಒಟ್ಟು 41 ಗುತ್ತಿಗೆದಾರರು ಸೇರಿ 232 ಕೋಟಿ ರೂ.ಗಳನ್ನು ಬಿಬಿಎಂಪಿಗೆ ವಂಚಿಸಿರುವ ಪ್ರಕರಣವನ್ನು ಸಿಐಡಿಗೆ ವಹಿಸಬೇಕೆಂದು ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರು ನೀಡಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಹಗರಣಗಳ 1350 ಪುಟಗಳ ದಾಖಲೆಗಳನ್ನು ಬಿಡುಗಡೆ ಮಾಡಿದ ಅವರು, ಬೃಹತ್ ವಂಚನೆ ಪ್ರಕರಣಕ್ಕೆ ಸಂಬಂಸಿದಂತೆ ಎಸಿಬಿ, ಬಿಎಂಟಿಎಫ್‍ನಲ್ಲೂ ದೂರು ದಾಖಲಿಸಿದ್ದು, ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಕಳೆದ 24 ವರ್ಷಗಳಿಂದ ನಿರಂತರವಾಗಿ ಪಾಲಿಕೆಯ ಅರ್ಥ ವ್ಯವಸ್ಥೆಯನ್ನೇ ಬುಡಮೇಲು ಮಾಡಿರುವ ಗೋಪಿನಾಥ್‍ರೆಡ್ಡಿ ನೇತೃತ್ವದ 41 ಮಂದಿ ಗುತ್ತಿಗೆದಾರರು ಸುಮಾರು 232 ಕೋಟಿ ರೂ.ಗಳನ್ನು ವಂಚಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಇದಕ್ಕೆ ಸಂಬಂಸಿದ ದಾಖಲೆಗಳನ್ನು ನೀಡಿ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿದಾಗ ಮುಖ್ಯಮಂತ್ರಿಯವರು ಇದಕ್ಕೆ ಸಮ್ಮತಿ ವ್ಯಕ್ತಪಡಿಸಿದ್ದಾರೆ ಎಂದರು.