ಇವಿಎಂ, ವಿವಿ ಪ್ಯಾಟ್ ಬಳಕೆ ಕುರಿತು ಪ್ರಾತ್ಯಕ್ಷಿಕೆ : ಮತದಾರರ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಚಾಲನೆ

2 Min Read

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ (ಫೆ.06): ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬಳಕೆ ಹಾಗೂ  ಮತದಾನ ಖಾತ್ರಿ ಯಂತ್ರ (ವಿ.ವಿ. ಪ್ಯಾಟ್) ಕಾರ್ಯವೈಖರಿ ಕುರಿತಂತೆ ಮತದಾರರ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಚಾಲನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಂಕೀರ್ಣದಲ್ಲಿ ಸೋಮವಾರ ವಿದ್ಯುನ್ಮಾನ ಮತಯಂತ್ರ ತರಬೇತಿ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರು, ಮಾಧ್ಯಮ ಪ್ರತಿನಿಧಿಗಳಿಗೆ ಹಾಗೂ ಸಾರ್ವಜನಿಕರಿಗೆ ಮತ ಚಲಾಯಿಸುವ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಾಯಿತು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿದ್ಯುನ್ಮಾನ ಮತಯಂತ್ರ ಬಳಕೆ ಹಾಗೂ ಮತದಾನ ಖಾತ್ರಿ ಕುರಿತಂತೆ ವಿವಿ ಪ್ಯಾಟ್ ಬಳಕೆ ಬಗ್ಗೆ ಪ್ರಾತ್ಯಕ್ಷತೆ ಮೂಲಕ ಮತದಾರರಲ್ಲಿ ಚುನಾವಣಾ ಪ್ರಕ್ರಿಯೆ ವಿಷಯದಲ್ಲಿ ವಿಶ್ವಾಸ ಮೂಡಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಒಂದು ತಿಂಗಳ ಕಾಲ ಜಿಲ್ಲೆಯಾದ್ಯಂತ 1206 ಸ್ಥಳಗಳಲ್ಲಿ  ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್ ಯಂತ್ರದ ಕಾರ್ಯ ವೈಖರಿ ಕುರಿತು ಪ್ರಾತ್ಯಕ್ಷಿಕೆ ನಡೆಸಲಾಗುವುದು. ಈ ಪ್ರಾತ್ಯಕ್ಷಿಯಲ್ಲಿ ಮತದಾರರು ಪಾಲ್ಗೊಂಡು ಅಣಕು ಮತದಾನ ಮಾಡಿ, ಇವಿಎಂ ಯಂತ್ರದಲ್ಲಿ ಮತ ಚಲಾಯಿಸುವ ಹಾಗೂ ಮತದಾನ ಖಾತ್ರಿ ಮಾಡಿಕೊಳ್ಳುವ ಬಗ್ಗೆ ಖುದ್ದು ಮನವರಿಕೆ ಮಾಡಿಕೊಳ್ಳಬಹುದಾಗಿದ್ದು, ಈ ಪ್ರಾತ್ಯಕ್ಷತೆ ಯುವ ಮತದಾರರಿಗೆ ಹಾಗೂ ಮೊದಲ ಬಾರಿಗೆ ಮತದಾನ ಮಾಡುವಂತಹವರಿಗೂ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಇಂತಹ ಜಾಗೃತಿ ಅಭಿಯಾನ ಏಕಕಾಲಕ್ಕೆ ಪ್ರಾರಂಭಿಸಲಾಗಿದ್ದು, ಇದಕ್ಕಾಗಿ ಒಟ್ಟು 75 ವಾಹನಗಳ ವ್ಯವಸ್ಥೆ ಮಾಡಲಾಗಿದೆ. 152 ಸೆಕ್ಟರ್ ಅಧಿಕಾರಿಗಳು ಹಾಗೂ 07 ಜನ ಹೆಚ್ಚುವರಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಚಿತ್ರದುರ್ಗ ಕ್ಷೇತ್ರದಲ್ಲಿ 175, ಮೊಳಕಾಲ್ಮೂರು ಕ್ಷೇತ್ರದಲ್ಲಿ 207, ಚಳ್ಳಕೆರೆ ಕ್ಷೇತ್ರದಲ್ಲಿ 180, ಹಿರಿಯೂರು ಕ್ಷೇತ್ರದಲ್ಲಿ 203, ಹೊಸದುರ್ಗ ಕ್ಷೇತ್ರದಲ್ಲಿ 195, ಹೊಳಲ್ಕೆರೆ ಕ್ಷೇತ್ರದಲ್ಲಿ 246 ಅಣಕು ಮತದಾನದ ಪ್ರದರ್ಶನ ನೆಡಸಲಾಗುವುದು. ಇದರ ಜೊತೆಗೆ ಜಿಲ್ಲೆಯಲ್ಲಿ ಈ ಒಂದು ತಿಂಗಳಲ್ಲಿ ನಡೆಯುವ ಪ್ರಮುಖ ಜಾತ್ರೆ, ಸಂತೆಗಳಲ್ಲಿಯೂ ಕೂಡ ಇವಿಎಂ ಹಾಗೂ ವಿವಿ ಪ್ಯಾಟ್ ಯಂತ್ರಗಳ ಕುರಿತಂತೆ ಪ್ರಾತ್ಯಕ್ಷಿತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಚಿತ್ರದುರ್ಗ ತಹಶೀಲ್ದಾರ್ ನಾಗವೇಣಿ, ಚುನಾವಣಾ ತಹಶೀಲ್ದಾರ್ ಎಂ.ಸಂತೋಷ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Share This Article
Leave a Comment

Leave a Reply

Your email address will not be published. Required fields are marked *