ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರಿಂದ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಚೇತನ್ ಗೌಡ ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಪ್ರಕರಣದಲ್ಲಿ ರಾಜೇಶ್ ಎಂಬ ಮತ್ತೊಬ್ಬರ ಹೆಸರನ್ನೂ ಉಲ್ಲೇಖಿಸಲಾಗಿದೆ. ಸ್ವಾಮೀಜಿಗಳ ವಿರುದ್ಧ ಅಶ್ಲೀಲ ಹಾಗೂ ಅವಮಾನಕಾರಿ ಪದಗಳನ್ನು ಬಳಸಿಕೊಂಡು ತೇಜೋವಧೆ ಮಾಡುವ ಉದ್ದೇಶದಿಂದ ಪೋಸ್ಟ್ ಮಾಡಲಾಗಿದೆ ಎಂಬ ದೂರಿನ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ದೂರುದಾರರ ಪ್ರಕಾರ, ವಿದೇಶ ಪ್ರವಾಸದ ವೇಳೆ ತೆಗೆದಿದ್ದ ಫೋಟೋವನ್ನು ದುರುಪಯೋಗಪಡಿಸಿಕೊಂಡು, ಅದಕ್ಕೆ ಅವಹೇಳನಕಾರಿ ಬರಹಗಳನ್ನು ಸೇರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಲಾಗಿದೆ. ಈ ಪೋಸ್ಟ್‌ಗೆ ಪ್ರತಿಕ್ರಿಯೆಯಾಗಿ ರಾಜೇಶ್ ಎಂಬಾತ ಕೂಡ ಅಸಭ್ಯ ಕಾಮೆಂಟ್‌ಗಳನ್ನು ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.ಘಟನೆಯು ಭಕ್ತರ ಭಾವನೆಗೆ ಧಕ್ಕೆ ಉಂಟುಮಾಡಿದ್ದು, ಸಾಮಾಜಿಕ ಶಾಂತಿಗೆ ವ್ಯತಿರಿಕ್ತವಾಗಿ ನಡೆದುಕೊಂಡಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ. ಪೊಲೀಸರು ಸಂಬಂಧಿತ ಐಟಿ ಕಾಯ್ದೆ ಮತ್ತು ಇತರ ವಿಧಿಗಳಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿಗಳು, ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಂಡು ವ್ಯಕ್ತಿಗಳ ಗೌರವಕ್ಕೆ ಧಕ್ಕೆ ತರುವಂತಹ ಪೋಸ್ಟ್‌ಗಳನ್ನು ಹಂಚಿದರೆ ಕಾನೂನು ಕ್ರಮ ತಪ್ಪದು ಎಂದು ಎಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ಹೆಚ್ಚಿನ ನಿಗಾವಹಿಸಲಾಗುವುದು ಎಂದು ತಿಳಿಸಿದ್ದಾರೆ.


















