ಸುದ್ದಿಒನ್, ಮಂಗಳೂರು, ಜುಲೈ. 26 : ಆಶೋಕ ನಗರದ ದೇವಾಂಗ ಭವನದಲ್ಲಿ ಜುಲೈ 28 ಕ್ಕೆ ದೇವಾಂಗ ಸಮಾಜದ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ನಡೆಯಲಿದೆ.
ಪ್ರಸಕ್ತ ಸಾಲಿನಲ್ಲಿ ಶೇ.95ಕ್ಕಿಂತ ಹೆಚ್ಚಿನ ಅಂಕಗಳಿಸಿದ 350 ರಾಜ್ಯದಲ್ಲಿನ ಸಮಾಜದ ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು. ಹಂಪಿ ಹೇಮಕೂಟ ದೇವಾಂಗ ಸಮಾಜದ ದಯಾನಂದಪುರಿ ಸ್ವಾಮಿಜಿ, ಕೇರಳದ ಕೊಂಡೇವೂರಿನ ಯೋಗನಂದ ಸರಸ್ವತಿ ಸ್ವಾಮೀಜಿ, ಮಂಗಳೂರಿನ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಡಾ.ಧರ್ಮಪಾಲನಾಥ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ.
ಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ರಾಜ್ಯಸಭಾ ಸದಸ್ಯ ಕೆ. ನಾರಾಯಣ ಅಧ್ಯಕ್ಷತೆವಹಿಸಲಿದ್ದಾರೆ. ಶಾಸಕ ಡಿ.ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ , ಮಾಜಿ ಸದಸ್ಯ ಎಂ.ಡಿ. ಲಕ್ಷ್ಮೀನಾರಾಯಣ, ದೇವರಾಜ ಅರಸ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೀರ್ತಿ ಗಣೇಶ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಸಂಘದ ಕಾರ್ಯದರ್ಶಿ ಎಸ್. ಸುರೇಶ್, ಚಿತ್ರದುರ್ಗ ಸಂಘದ ಗೌರವಾಧ್ಯಕ್ಷ ಹೆಚ್.ಯೋಗೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.