ಚಿತ್ರದುರ್ಗ ಡಿ. 02 : ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಗೂಡಂಗಡಿಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ಪ್ಲಾಜಾ, ಹೆದ್ದಾರಿಗಳ ಇಕ್ಕೆಲಗಳು, ಬೈಪಾಸ್ ರಸ್ತೆಗಳು ಸೇರುವ ಸ್ಥಳ ಹಾಗೂ ನಗರ ಮತ್ತು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ರಸ್ತೆಗಳ ಅಕ್ಕಪಕ್ಕದಲ್ಲಿ ಅನಧಿಕೃತವಾಗಿ ಗೂಡಂಗಡಿಗಳನ್ನು ಹಾಕಿಕೊಂಡಿರುವುದರಿಂದ, ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿದೆ, ಅಲ್ಲದೆ ಅಪಘಾತಗಳಿಗೂ ಕಾರಣವಾಗುತ್ತಿವೆ. ಹಿರಿಯೂರು ನಗರದಲ್ಲಿ ಬೈಪಾಸ್ ರಸ್ತೆಯ ಅಕ್ಕಪಕ್ಕದಲ್ಲಿ ಹೆಚ್ಚಿನ ಗೂಡಂಗಡಿಗಳು ಇದ್ದು, ಇಲ್ಲಿ ಸಾಲು ಸಾಲಾಗಿ ವಾಹನಗಳನ್ನು ನಿಲ್ಲಿಸಲಾಗುತ್ತಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ. ಅಲ್ಲದೆ ಟೋಲ್ ಸಂಗ್ರಹಿಸುವ ಕಡೆಗಳಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಗೂಡಂಗಡಿಗಳ ಬಗ್ಗೆ ಮಾಹಿತಿ ಪಡೆದು, ಈ ಅಂಗಡಿಗಳು ನಿರ್ಮಿಸಿರುವ ಸ್ಥಳ ಯಾರಿಗೆ ಸೇರಿದ್ದು, ಕೃಷಿಯೇತರ ಭೂಮಿಯಾಗಿ ಪರಿವರ್ತಿಸಲಾಗಿದೆಯೇ, ಇಲ್ಲವೇ ಎಂಬುದನ್ನು ಪರಿಶೀಲಿಸಬೇಕು. ಅನಧಿಕೃತ ಗೂಡಂಗಡಿಗಳಿಗೆ ವಿದ್ಯುತ್ ಸಂಪರ್ಕ ನೀಡಿದ್ದಲ್ಲಿ, ಬೆಸ್ಕಾಂ ಅವರ ವಿರುದ್ಧ ಎಫ್‍ಐಆರ್ ದಾಖಲಿಸಬೇಕು. ಇಂತಹ ಕ್ರಮಗಳಿಗೆ ಅವಕಾಶ ನೀಡದೆ, ಬೆಸ್ಕಾಂ ಇಲಾಖೆ ಅಧಿಕಾರಿಗಳು ಅನಧಿಕೃತ ಗೂಡಂಗಡಿಗಳಿಗೆ ಒದಗಿಸಿರುವ ವಿದ್ಯುತ್ ಸಂಪರ್ಕವನ್ನು ತ್ವರಿತವಾಗಿ ಕಡಿತಗೊಳಿಸಬೇಕು. ವಿರೋಧ ಕಂಡುಬಂದಲ್ಲಿ, ಪೊಲೀಸ್ ಬಂದೋಬಸ್ತ್ ಪಡೆದು ಕೂಡಲೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ನಾಗರಾಜ್, ಡಿವೈಎಸ್‍ಪಿ ಗಳಾದ ದಿನಕರ್, ಶಿವಕುಮಾರ್, ಸತ್ಯನಾರಾಯಣ ರಾವ್ ನಗರಸಭೆ ಪೌರಾಯುಕ್ತೆ ಲಕ್ಷ್ಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
