2027-28ನೇ ಶೈಕ್ಷಣಿಕ ಸಾಲಿನಲ್ಲಿ ದೇಶದ ಸೈನಿಕ ಶಾಲೆಗಳಲ್ಲಿ 6 ಮತ್ತು 9ನೇ ತರಗತಿಗಳಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ. ಅರ್ಹ ವಿದ್ಯಾರ್ಥಿಗಳಿಂದ ಅಖಿಲ ಭಾರತ ಸೈನಿಕ ಶಾಲೆಗಳ ಪ್ರವೇಶ ಪರೀಕ್ಷೆ (AISSEE) ಬರೆಯಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಡಿಸೆಂಬರ್ 2ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಸೈನಿಕ ಶಾಲೆಗಳಲ್ಲಿ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳು ನಿಗದಿತ ಸಮಯದೊಳಗೆ ಅರ್ಜಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಡಿಸೆಂಬರ್ 3ರಿಂದ ಡಿಸೆಂಬರ್ 6ರವರೆಗೆ ಪರೀಕ್ಷಾ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳ ವಿವರಗಳನ್ನು 2027ರ ಜನವರಿ 11ರಂದು ಪ್ರಕಟಿಸಲಾಗುತ್ತದೆ.ಪ್ರವೇಶ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು 2027ರ ಜನವರಿ 25ರಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ನಿಗದಿತ ವೇಳಾಪಟ್ಟಿಯಂತೆ 2027ರ ಜನವರಿ 31ರಂದು ದೇಶಾದ್ಯಂತ ಸೈನಿಕ ಶಾಲೆಗಳ ಪ್ರವೇಶ ಪರೀಕ್ಷೆ ನಡೆಯಲಿದೆ. ಪರೀಕ್ಷೆಯು ಬಹು ಆಯ್ಕೆ ಪ್ರಶ್ನೆಗಳನ್ನು (MCQ) ಒಳಗೊಂಡಿರಲಿದೆ. 6 ಮತ್ತು 9ನೇ ತರಗತಿಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಭಾಗವಹಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ, ಪರೀಕ್ಷಾ ಮಾದರಿ ಹಾಗೂ ಇತರ ಸಂಪೂರ್ಣ ಮಾಹಿತಿಗಾಗಿ ಅಭ್ಯರ್ಥಿಗಳು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗಳಾದ https://exams.nta.nic.in/sainik-school-society/ ಅಥವಾ https://nta.ac.in ಗೆ ಭೇಟಿ ನೀಡಬಹುದು.









