ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಮಾರ್ಚ್.29) : ಕೇಂದ್ರ ಚುನಾವಣಾ ಆಯೋಗ ರಾಜ್ಯದ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಗೆ ದಿನಾಂಕ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದ್ದು, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಚುನಾವಣೆಗೆ ಜಿಲ್ಲೆಯಲ್ಲಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು .ಜೆ.ಆರ್.ಜೆ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ವಿಧಾನ ಸಭಾ ಚುನಾವಣೆ ಘೋಷಣೆ ಹಾಗೂ ಮಾದರಿ ನೀತಿ ಸಂಹಿತೆ ಜಾರಿ ಕುರಿತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಚುನಾವಣೆ ಮಾದರಿ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಯಾಗಿದ್ದು, ಏಪ್ರಿಲ್ 13 ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುವುದು. ಏಪ್ರಿಲ್ 20 ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ.
ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ನಾಮಪತ್ರಗಳನ್ನು ಹಿಂಪಡೆಯಲು ಕಡೆಯ ದಿನವಾಗಿದೆ. ಮೇ 10 ರಂದು ಮತದಾನ ನಡೆಯಲಿದೆ. ಮೇ 13 ಮತ ಎಣಿಕೆ ಕಾರ್ಯ ನಡೆದು, ಚುನಾವಣೆ ಫಲಿತಾಂಶ ಹೊರ ಬೀಳಲಿದೆ. ಮೇ 15 ರ ಒಳಗೆ ಚುನಾವಣೆ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ ಎಂದರು.