ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, (ಜು.23) : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಚಿತ್ರದುರ್ಗ ಯೋಜನಾ ಕಚೇರಿಯಿಂದ ಕೋಟೆ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಕೆ.ಆರ್.ಮಂಜುನಾಥ್ ಮಾತನಾಡಿ ಮಳೆಗಾಲದಲ್ಲಿ ಗಿಡಗಳನ್ನು ನೆಟ್ಟಾಗ ಸಮೃದ್ದವಾಗಿ ಬೆಳೆಯುತ್ತದೆ. ಮಾನವನ ದುರಾಸೆಯಿಂದ ದಿನದಿಂದ ದಿನಕ್ಕೆ ಪರಿಸರ ನಾಶವಾಗುತ್ತಿರುವುದರಿಂದ ಪ್ರತಿಯೊಬ್ಬರು ಒಂದೊಂದು ಗಿಡ ನೆಟ್ಟು ಪರಿಸರಕ್ಕೆ ಕೊಡುಗೆ ನೀಡಬೇಕಲ್ಲದೆ ಮುಂದಿನ ಪೀಳಿಗೆಗೆ ಪರಿಸರವನ್ನು ಉಳಿಸಿ ಬೆಳೆಸಬೇಕಿದೆ ಎಂದು ಹೇಳಿದರು.
ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯೆ ಶ್ರೀಮತಿ ರೂಪ ಜನಾರ್ಧನ್ ಮಾತನಾಡಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹತ್ತಾರು ಉಪಯುಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ನಿಜಕ್ಕೂ ಸಂತೋಷದ ಸಂಗತಿ. ಮನುಷ್ಯನಿಗೆ ಉಸಿರಾಟಕ್ಕೆ ಶುದ್ದವಾದ ಗಾಳಿ ಸಿಗಬೇಕಾಗಿರುವುದರಿಂದ ಹೆಚ್ಚು ಹೆಚ್ಚು ಗಿಡಗಳನ್ನು ನೆಡುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ ಎಂದು ತಿಳಿಸಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ತಾಲ್ಲೂಕು ಯೋಜನಾಧಿಕಾರಿ ಬಿ.ಅಶೋಕ್ ಮಾತನಾಡಿ ಸ್ವ-ಸಹಾಯಕ ಸಂಘಗಳ ಮೂಲಕ ಮಹಿಳೆಯರನ್ನು ಸ್ವಾವಲಂಭಿಗಳನ್ನಾಗಿ ಮಾಡುತ್ತಿರುವುದಲ್ಲದೆ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿದೆ. ಐತಿಹಾಸಿಕ ಚಿತ್ರದುರ್ಗದ ಕೋಟೆ ಆವರಣದಲ್ಲಿ ಸಸಿ ನೆಡಲು ಸಾಕಷ್ಟು ಸ್ಥಳಾವಕಾಶವಿದ್ದು, ಎಲ್ಲೆಲ್ಲಿ ಜಾಗವಿದೆಯೋ ಅಲ್ಲೆಲ್ಲಾ ಗಿಡಗಳನ್ನು ನೆಟ್ಟು ಪೋಷಿಸುವ ಜಾಗೃತಿ ಪ್ರತಿಯೊಬ್ಬರಲ್ಲಿಯೂ ಮೂಡಬೇಕು ಎಂದು ಮನವಿ ಮಾಡಿದರು.
ಪುರಾತತ್ವ ಇಲಾಖೆಯ ಶ್ರೀಮತಿ ರಾಣಿ, ಮಹಾರಾಣಿ ಮತ್ತು ಭೀಮಪ್ಪ ನಾಯಕ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಮಕ್ಕಳು, ವಲಯ ಮೇಲ್ವಿಚಾರಕ ಸಂದೀಪ್, ಕೃಷಿ ಮೇಲ್ವಿಚಾರಕ ಸುರೇಶ್, ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ಸ್ವಸಹಾಯ ಸಂಘದ ಸದಸ್ಯರುಗಳು ಗಿಡ ನೆಡುವ ಕಾರ್ಯಕ್ರಮದಲ್ಲಿ ಹಾಜರಿದ್ದರು.