ಹೊಸದಿಲ್ಲಿ : ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರನ್ನು ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಗೆ ಇಎಸ್‌ಐ ಆಸ್ಪತ್ರೆ ಮಂಜೂರು ಮಾಡಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಕಾರ್ಮಿಕ ಸಚಿವಾಲಯದಲ್ಲಿ ನಡೆದ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರದ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದ್ರ ಸಿಂಗ್ ಯಾದವ್ ಅವರು, ಚಿಕ್ಕಬಳ್ಳಾಪುರ ಜಿಲ್ಲೆಗೆ ಇಎಸ್‌ಐ ಆಸ್ಪತ್ರೆ ಮಂಜೂರು ಮಾಡುವ ಪ್ರಕ್ರಿಯೆಗೆ ತಕ್ಷಣವೇ ಚಾಲನೆ ನೀಡುವಂತೆ ಶುಕ್ರವಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಉನ್ನತ ಮಟ್ಟದ ಸಭೆಗೂ ಮುನ್ನ ಸಚಿವ ಯಾದವ್ ಅವರನ್ನು ಭೇಟಿ ಮಾಡಿದ್ದ ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಆಸ್ಪತ್ರೆ ಆರಂಭಿಸುವಂತೆ ಮನವಿ ಸಲ್ಲಿಸಿದರು.
ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಂತಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಹು ದೊಡ್ಡ ಸಂಖ್ಯೆಯಲ್ಲಿ ಕಾರ್ಮಿಕರು ಮತ್ತು ಅವರ ಅವಲಂಬಿತರಿದ್ದಾರೆ. ಅವರಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರಕಿಸುವ ನಿಟ್ಟಿನಲ್ಲಿ ಇಎಸ್‌ಐ ಆಸ್ಪತ್ರೆ ಅಗತ್ಯವಿದೆ. ಹೀಗಾಗಿ ತಕ್ಷಣವೇ ಆಸ್ಪತ್ರೆಗೆ ಮಂಜೂರಾತಿ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಸಚಿವ ಸುಧಾಕರ್ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಯಾದವ್ ಕೂಡಲೇ ತಮ್ಮ ಸಚಿವಾಲಯದ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.
ಹಿರಿಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ಸಚಿವ ಸುಧಾಕರ್ ಅವರು, ಜಿಲ್ಲೆಯಲ್ಲಿ ಆರೋಗ್ಯ ಸೇವೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವನಾಗಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೊಸ ಮೆಡಿಕಲ್ ಕಾಲೇಜು ಸ್ಥಾಪನೆ, ಜಿಲ್ಲಾ ಮತ್ತು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿ, ಹೊಸ ತಾಯಿ-ಮಗುವಿನ ಆಸ್ಪತ್ರೆ ನಿರ್ಮಾಣಕ್ಕೂ ಚಾಲನೆ ನೀಡಲಾಗಿದೆ. ಮೂರು ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಂಜೂರು ಮಾಡಿಸಲಾಗಿದೆ. ಇಷ್ಟಾದರೂ ದೊಡ್ಡ ಸಂಖ್ಯೆಯಲ್ಲಿ ಇರುವ ಸಂಘಟಿತ ಮತ್ತು ಅಸಂಘಟಿತ ವಲಯಗಳ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಉತ್ತಮ, ಗುಣಮಟ್ಟದ ಆರೋಗ್ಯ ಸೇವೆ ಸಿಗುತ್ತಿಲ್ಲ. ಸದ್ಯ ಇರುವ ವ್ಯವಸ್ಥೆಗಳ ಮೇಲೆ ಹೆಚ್ಚಿನ ಒತ್ತಡವಿದೆ. ಹೀಗಾಗಿ ಜಿಲ್ಲೆಗೆ ಇಎಸ್‌ಐ ಆಸ್ಪತ್ರೆ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ಜಿಲ್ಲೆಯು ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವುದರಿಂದ ದೊಡ್ಡ ಸಂಖ್ಯೆಯಲ್ಲಿ ಕಾರ್ಮಿಕರು ಪ್ರತಿನಿತ್ಯ ಸಂಚರಿಸುತ್ತಾರೆ. ಜತೆಗೆ ದೊಡ್ಡ ಸಂಖ್ಯೆಯ ಅಸಂಘಟಿತ ವಲಯದ ಕಾರ್ಮಿಕರು ಜಿಲ್ಲೆಯಲ್ಲಿ ದುಡಿಯುತ್ತಿದ್ದಾರೆ. ಹಾಗೆಯೇ ಜಿಲ್ಲೆ ಮತ್ತುತಾಲ್ಲೂಕು ಕೇಂದ್ರ ಕೈಗಾರಿಕೆಗಳಿವೆ ಮತ್ತು ಹೊಸದಾಗಿ ಅನೇಕ ಕೈಗಾರಿಕೆಗಳು ತಲೆ ಎತ್ತುತ್ತಿವೆ. ಇಂತಹ ಸ್ಥಿತಿಯಲ್ಲಿ ಕಾರ್ಮಿಕರು ಮತ್ತು ಅವರನ್ನು ಅವಲಂಬಿಸಿರುವ ಕುಟುಂಬಗಳ ಸದಸ್ಯರು ಬೆಂಗಳೂರಿಗೆ ತೆರಳಿ ಇಎಸ್‌ಐ ಆಸ್ಪತ್ರೆ ಸೌಲಭ್ಯ ಪಡೆಯುವುದು ಕಷ್ಟವಾಗುತ್ತಿದೆ ಎಂದು ವಿವರಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಗೆ ಆಸ್ಪತ್ರೆ ಮಂಜೂರು ಮಾಡುವುದರಿಂದ ಕೇವಲ ಚಿಕ್ಕಬಳ್ಳಾಪುರ ಮಾತ್ರವಲ್ಲ, ನೆರೆಯ ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕಾರ್ಮಿಕರಲ್ಲದೆ, ನೆರೆಯ ಆಂಧ್ರದ ಗಡಿ ಭಾಗದ ಜಿಲ್ಲೆಗಳ ಕಾರ್ಮಿಕರಿಗೂ ಸಮರ್ಪಕ ವೈದ್ಯಕೀಯ ಸೌಲಭ್ಯ ದೊರಕಲಿದೆ ಎಂದರು.
ಇದಲ್ಲದೆ, ಪ್ರತಿ ಜಿಲ್ಲೆಗೂ ಇಎಸ್‌ಐ ಆಸ್ಪತ್ರೆ ಆರಂಭಿಸಬೇಕು ಎಂಬುದು ರಾಜ್ಯ ಸರ್ಕಾರದ ಚಿಂತನೆ ಆಗಿದ್ದು, ಈ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗಿದೆ. ಒಟ್ಟು 69 ಆಸ್ಪತ್ರೆಗಳ ಆರಂಭಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ಪೈಕಿ 19ಕ್ಕೆ ಮಾತ್ರ ಅನುಮತಿ ಸಿಕ್ಕಿದೆ, ಉಳಿದ ಪ್ರಸ್ತಾವನೆಗಳಿಗೂ ಅನುಮತಿ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಸಚಿವ ಸುಧಾಕರ್ ಅವರು ಆಗ್ರಹಿಸಿದರು.
ಸಚಿವ ಸುಧಾಕರ್ ಅವರ ಮನವಿಗೆ ಸಭೆಯಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಯಾದವ್ ಅವರು, ರಾಜ್ಯದ ಪ್ರಸ್ತಾವನೆಯನ್ನು ಪರಿಗಣಿಸಲಾಗಿದೆ. ಆದ್ಯತೆ ಮೇರೆಗೆ ಅನುಮತಿ ನೀಡಲಾಗುವುದು. ಚಿಕ್ಕಬಳ್ಳಾಪುರಕ್ಕೆ ಇಎಸ್‌ಐ ಆಸ್ಪತ್ರೆಯ ಅಗತ್ಯತೆ ತಮಗೂ ಮನರಿಕೆ ಆಗಿದ್ದ, ತಕ್ಷಣವೇ ಆ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು.