Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

‘ಚುನಾವಣೆಯಲ್ಲಿ ಸೋತರೂ ಸೈದ್ಧಾಂತಿಕವಾಗಿ ಸೋಲಬಾರದು’ : ಡಿ.ಕೆ.ಶಿವಕುಮಾರ್ ಗೆ ಸಿದ್ದರಾಮಯ್ಯ ಭಾವುಕ ಪತ್ರ

---Advertisement---

ಸುದ್ದಿಒನ್,ಬೆಂಗಳೂರು,ಮೇ.31: ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನಾಯಕರಾಗಿ ನೂತನವಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ಅವರಿಗೆ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಹಾಗೂ ಭಾವನಾತ್ಮಕ ಪೋಸ್ಟ್‌ ಒಂದನ್ನು ಹಂಚಿಕೊಂಡಿರುವ ಅವರು, ರಾಜ್ಯದ ಅಭಿವೃದ್ಧಿ ಮತ್ತು ಪಕ್ಷದ ಸಿದ್ಧಾಂತವನ್ನು ಮುನ್ನಡೆಸುವ ದೊಡ್ಡ ಜವಾಬ್ದಾರಿ ಈಗ ಡಿ.ಕೆ.ಶಿ ಹೆಗಲ ಮೇಲಿದೆ ಎಂದು ಆಶಿಸಿದ್ದಾರೆ.

ಸಂಘಟನಾ ಚಾತುರ್ಯಕ್ಕೆ ಶ್ಲಾಘನೆ
“ಪ್ರಿಯ ಶಿವಕುಮಾರ್, ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಾಯತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ,” ಎಂದು ಸಿದ್ದರಾಮಯ್ಯ ಹಾರೈಸಿದ್ದಾರೆ. ತಾವೂ ಸೇರಿದಂತೆ ಒಟ್ಟು ಎಂಟು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಕನ್ನಡಿಗರ ಸೇವೆ ಮಾಡಿದ್ದನ್ನು ಸ್ಮರಿಸಿದ ಅವರು, ಕರ್ನಾಟಕವನ್ನು ಸಮೃದ್ಧ, ಸ್ವಾವಲಂಬಿ ರಾಜ್ಯವನ್ನಾಗಿ ಬೆಳೆಸಿದ ಹೆಮ್ಮೆ ನನ್ನದಾಗಿದೆ. ಈಗ ಈ ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯುವ ಬದ್ಧತೆ ಹಾಗೂ ಸಾಮರ್ಥ್ಯ ನಿಮ್ಮಲ್ಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಚುನಾವಣೆಯಲ್ಲಿ ಸೋತರೂ ಸೈದ್ಧಾಂತಿಕವಾಗಿ ಸೋಲಬಾರದು’
ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎದುರಾಗಿರುವ ರಾಜಕೀಯ ಹಿನ್ನಡೆಯನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ, ಪಕ್ಷದ ಸಿದ್ಧಾಂತದ ಬಗೆಗಿನ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. “ನಾವು ಚುನಾವಣೆಯಲ್ಲಿ ಸೋಲಬಹುದು ಅಥವಾ ಗೆಲ್ಲಬಹುದು, ಆದರೆ ಸೈದ್ಧಾಂತಿಕವಾಗಿ ಎಂದೂ ಸೋಲಬಾರದು. ಒಂದು ರಾಜಕೀಯ ಪಕ್ಷ ಸೈದ್ಧಾಂತಿಕವಾಗಿ ಸೋತರೆ, ಆ ಪಕ್ಷ ಚುನಾವಣೆಯನ್ನು ಗೆಲ್ಲಲಾಗದೆ ನಾಶವಾಗುತ್ತದೆ. ಹೀಗಾಗಿ, ತಳಮಟ್ಟದಿಂದಲೇ ಪಕ್ಷದ ಸಿದ್ಧಾಂತವನ್ನು ಗಟ್ಟಿಗೊಳಿಸುವುದು ದೇಶವನ್ನು ಉಳಿಸಲು ಇರುವ ಏಕೈಕ ದಾರಿ,” ಎಂದು ಅವರು ಕಿವಿಮಾತು ಹೇಳಿದ್ದಾರೆ.

ಎರಡನೇ ಸ್ವಾತಂತ್ರ್ಯ ಹೋರಾಟದ ಕಾಲಘಟ್ಟ
ದೇಶದ ಪ್ರಸ್ತುತ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಪ್ರಭುತ್ವವನ್ನು ಪ್ರಶ್ನಿಸುವವರ ದಮನ ಮಾಡಲಾಗುತ್ತಿದೆ ಮತ್ತು ಸಂವಿಧಾನವನ್ನೇ ಪ್ರಶ್ನಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಗಾಂಧೀಜಿಯವರನ್ನು ಕೊಂದವರು ಇಂದು ಗೋಡ್ಸೆಯನ್ನು ಮೆರೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ದೇಶದ ಏಕತೆ, ಸಮಗ್ರತೆ ಮತ್ತು ಸಂವಿಧಾನದ ಗೌರವ ಕಾಪಾಡಲು ನಾವಿಂದು ‘ಎರಡನೇ ಸ್ವಾತಂತ್ರ್ಯ ಹೋರಾಟ’ ನಡೆಸಬೇಕಾದ ಕಾಲಘಟ್ಟದಲ್ಲಿದ್ದೇವೆ ಎಂದಿದ್ದಾರೆ.

ಕೊನೆಯದಾಗಿ, ದೇಶ ಹಾಗೂ ರಾಜ್ಯವನ್ನು ಆರ್ಥಿಕ ಆತಂಕದಿಂದ ಹೊರತಂದು, ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಈ ಹೋರಾಟದಲ್ಲಿ ಇಡೀ ಶಾಸಕಾಂಗ ಪಕ್ಷ ಮಾತ್ರವಲ್ಲದೆ, ರಾಜ್ಯದ ಏಳು ಕೋಟಿ ಜನತೆಯೂ ಡಿ.ಕೆ.ಶಿವಕುಮಾರ್ ಅವರ ಜೊತೆಗಿರಲಿದೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

Join WhatsApp

Join Now

Join Telegram

Join Now