Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ದ ಎಫ್.ಐ.ಆರ್ ದಾಖಲು : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ

---Advertisement---

 

 

ಚಿತ್ರದುರ್ಗ. ಸೆ.12: ತ್ಯಾಜ್ಯ, ನೀರು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ದ ಬೇಜವಾಬ್ದಾರಿತನ ಹಾಗೂ ಸಾರ್ವಜನಿಕರಿಗೆ ತೊಂದರೆ ನೀಡಿದ ಕಾರಣಕ್ಕಾಗಿ ಎಫ್.ಐ.ಆರ್ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.

ಕೇಂದ್ರ ಹಾಗೂ ರಾಜ್ಯ ಪುರಸ್ಕೃತ ಯೋಜನೆಗಳಡಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸುತ್ತಿರುವ ಕುಡಿಯುವ ನೀರು ಸರಬರಾಜು ಮತ್ತು ಒಳ ಚರಂಡಿ ಕಾಮಗಾರಿಗಳ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ಮಟ್ಟದ ಸಲಹಾ ಮತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಚಿತ್ರದುರ್ಗ ನಗರದ ಒಳ ಚರಂಡಿ ಜಾಲದ ಮಾರ್ಗಗಳ ನಕ್ಷೆಯನ್ನು ಸಿದ್ದಪಡಿಸಬೇಕು. ವೆಟ್‍ವಲ್(ತೇವ ಬಾವಿ)ಗಳ ಸಾಮಥ್ರ್ಯಕ್ಕೆ ತಕ್ಕಂತೆ ನಗರದಲ್ಲಿನ ಕಲುಷಿತ ನೀರು ವೆಟ್‍ವೆಲ್ ಸೇರುತ್ತಿಲ್ಲ. ಇದರ ಬದಲಾಗಿ ನಗರದ ರಸ್ತೆಗಳ ಮೇಲೆಯ ಚರಂಡಿ ನೀರು ಹರಿದಾಡುವ ಪ್ರಸಂಗ ಎದುರಾಗಿದೆ. ಇದು ಸಾರ್ವಜನಿಕ ಸ್ವಾಸ್ಥ್ಯಕ್ಕೆ ಕಂಟಕವಾಗುತ್ತದೆ. ವೆಟ್‍ವೆಲ್ ನಿರ್ಮಿಸುವ ವೇಳೆಯಲ್ಲಿಯೇ ತ್ಯಾಜ್ಯ ನೀರು ವೆಟ್‍ವೆಲ್ ಸೇರುವಂತೆ ಕೊಳಚೆ ನೀರು ಸಂಪರ್ಕ ಜಾಲವನ್ನು ಅಭಿವೃದ್ಧಿ ಪಡಿಸಬೇಕಿತ್ತು. ಆದರೆ ನಗರ ಸಭೆ ಹಾಗೂ ಒಳಚರಂಡಿ ಮಂಡಳಿಯ ಸಮನ್ವಯತೆ ಕೊರತೆಯಿಂದ ವೆಟ್‍ವೆಲ್ ಹಾಗೂ ತ್ಯಾಜ್ಯ ನೀರು ಶುದ್ಧೀಕರಣ ಘಟಕಗಳಿಗೆ ಕೊಳಚೆ ನೀರು ಸೇರುತ್ತಿಲ್ಲ. ವಾರ್ಡ್‍ಗಳ ತ್ಯಾಜ್ಯ ನೀರು ರಸ್ತೆ ಹಾಗೂ ಮನೆಗಳಿಗೆ ನುಗ್ಗುತ್ತಿರುವ ಬಗ್ಗೆ ನಗರಸಭೆ ಸದಸ್ಯರು ಹಾಗೂ ಸಾರ್ವಜನಿಕರು ದೂರು ನೀಡುತ್ತಾರೆ. ನಗರಸಭೆ ಅಧಿಕಾರಿಗಳು ತಾತ್ಕಾಲಿಕ ಪರಿಹಾರ ನೀಡಿ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಾರೆ. ಈ ರೀತಿಯ ವರ್ತನೆಯಿಂದ ಸಮಸ್ಯೆ ಬಗೆ ಹರಿಯುವುದಿಲ್ಲ. ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.

ರಾಜ ಕಾಲುವೆ ಸೇರಿದಂತೆ ಇತರೆ ಕಾಲುವೆ ಪ್ರದೇಶಗಳಲ್ಲಿ ನಗರಸಭೆಯಿಂದ ಸಮೀಕ್ಷೆ ನಡೆಸಿ ನಿಯಮಾನುಸಾರ ಬಫರ್ ಜೋನ್‍ಗಳನ್ನು ಗುರುತಿಸಬೇಕು. ಜಲಮೂಲಗಳ ಬಫರ್ ಜೋನ್‍ಗಳಲ್ಲಿ ಯಾವುದೇ ಕಟ್ಟಡ ನಿರ್ಮಾಣಗಳಿಗೆ ಅನುಮತಿ ನೀಡಬಾರದು. ಒಂದು ವೇಳೆ ಅನುಮತಿ ನೀಡಿದರೆ ಅಂತಹ ಅಧಿಕಾರಿಗಳ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

 

ಅಮೃತ್ ಯೋಜನೆಯಡಿ, ಮೊಳಕಾಲ್ಮೂರು, ನಾಯಕನಹಟ್ಟಿ, ಹೊಳಲ್ಕೆರೆ ಪಟ್ಟಣದಲ್ಲಿ ಮೇಲ್ಮಟ್ಟದ ಜಲಸಂಗ್ರಹಾಗಾರಗಳನ್ನು ನಿರ್ಮಿಸಲು ಅವಶ್ಯಕತೆ ಇರುವ ಸ್ಥಳವನ್ನು ಮುಖ್ಯಾಧಿಕಾರಿಗಳು ಗುರುತಿಸಿ ಹಸ್ತಾತರಿಸುವ ಕೆಲಸ ಮಾಡಬೇಕು. ಈಗಾಗಲೇ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಪೂರ್ಣಗೊಂಡು ಪಾಲನೆ ಮತ್ತು ನಿರ್ವಹಣೆಯ ಅವಧಿ ಮುಗಿದ ಕಾಮಗಾರಿಗಳನ್ನು ಸಂಬಂಧಪಟ್ಟ ನಗರಸಭೆ ಹಾಗೂ ಪಟ್ಟಣ ಪಂಚಾಯಿತಿಗಳು ಹಸ್ತಾಂತರ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಮಲ್ಲಾಪುರ ಕೆರೆ ದಂಡೆ ಮರು ಸಮೀಕ್ಷೆ :
ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿನ ಚಿತ್ರದುರ್ಗ ನಗರಕ್ಕೆ ಹೊಂದಿಕೊಂಡಿರುವ ಮಲ್ಲಾಪುರ ಕೆರೆ ದಂಡೆ ಮರು ಸಮೀಕ್ಷೆ ಕಾರ್ಯ ಕೈಗೊಳ್ಳುವಂತೆ  ಭೂಮಾಪನ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶನ ನೀಡಿದರು.

ಮಲ್ಲಾಪುರ ಕೆರೆ ಏರಿಯನ್ನು ಎತ್ತರಿಸಲಾಗಿದೆ. ಇದರಿಂದ ಕೆರೆಯಲ್ಲಿ ನೀರಿನ ಸಂಗ್ರಹ ಪ್ರಮಾಣ ಹೆಚ್ಚಾಗಿ ಜನವಸತಿ ಪ್ರದೇಶಗಳಿಗೆ ತೊಂದರೆಯಾಗಿದೆ. ತಾತ್ಕಾಲಿಕವಾಗಿ ಕೆರೆಯಿಂದ 2 ಅಡಿ ನೀರು ಹೊರ ಹರಿಸಲು ಸಭೆಯಲ್ಲಿ ಅನುಮತಿಸಲಾಯಿತು.

ಸಿರಿಗೆರೆ, ಭರಮಸಾಗರ ನೀರು ಸರಬರಾಜು ನಿರ್ವಹಣೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಸ್ತಾಂತರಿಸಿಕೊಳ್ಳುವಂತೆ ಹಾಗೂ ಬಾಕಿ ಉಳಿಸಿಕೊಂಡಿರುವ ನಿರ್ವಹಣೆ ವೆಚ್ಚವನ್ನು ಪಾವತಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಕುಡಿಯುವ ನೀರು ಸರಬಾರಾಜು ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿ ನೀಡುವ ಕುರಿತು ಪ್ರತ್ಯೇಕವಾಗಿ  ರಾಷ್ಟ್ರೀಯ ಹೆದ್ದಾರಿ ಹಾಗೂ ರೈಲ್ವೇ ಇಲಾಖೆ ಅಧಿಕಾರಿಗಳ ಸಭೆಯನ್ನು ಶುಕ್ರವಾರ ಕರೆಯುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶಿಸಿದರು.

ಸಭೆಯಲ್ಲಿ ಚಿತ್ರದುರ್ಗ ನಗರಸಭೆ ಅಧ್ಯಕ್ಷೆ ಸುಮಿತಾ ರಘು, ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಟಿ.ಮಂಜುಳ ಶ್ರೀಕಾಂತ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಪಾಲಕ ಇಂಜಿನಿಯರ್ ಅನಿಲ್ ಕುಮಾರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹೇಮಂತ ಕುಮಾರ್, ಚಿತ್ರದುರ್ಗ ನಗರ ಸಭೆ ಆಯುಕ್ತೆ ರೇಣುಕಾ.ಎಂ ಸೇರಿದಂತೆ ಇತರೆ ನಗರಸಭೆಗಳ ಪೌರಾಯುಕ್ತರು ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment