ಸುದ್ದಿಒನ್, ಬೆಂಗಳೂರು, ಅಕ್ಟೋಬರ್.08 : ಮಾಜಿ ಶಾಸಕಿ ಪೂರ್ಣಿಮಾ ಅವರು ಇಂದು (ಭಾನುವಾರ) ಸಂಜೆ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ತೀವ್ರ ಕುತೂಹಲ ಮೂಡಿಸಿದ್ದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಕಾಂಗ್ರೆಸ್ ಸೇರ್ಪಡೆ ವಿಚಾರ ಇದೀಗ ಕೊನೆಯ ಹಂತಕ್ಕೆ ತಲುಪಿದ್ದು, ಅಕ್ಟೋಬರ್ 20 ಕ್ಕೆ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಚರಣೆ ನೆಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಚರ್ಚಿಸಿದ್ದರು.
ಕಾಂಗ್ರೆಸ್ ನಲ್ಲಿ ಪ್ರಭಾವಿ ನಾಯಕರಾಗಿ ಗುರ್ತಿಸಿಕೊಂಡಿದ್ದ ಎ. ಕೃಷ್ಣಪ್ಪನವರು 2014 ರಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಜೆಡಿಎಸ್ ಸೇರ್ಪಡೆಯಾಗಿ ಕೂದಲೆಳೆಯ ಅಂತರದಲ್ಲಿ ಪರಾಭವಗೊಂಡಿದ್ದರು. ನಂತರ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಫಲಿತಾಂಶ ಬರುವ ಮೊದಲೇ ಅಕಾಲಿಕ ಮರಣ ಹೊಂದಿದರು.ಹಿರಿಯೂರು ಕ್ಷೇತ್ರದ ಹಿಡಿತ ಹೊಂದಿದ್ದ ಪೂರ್ಣಿಮಾ ಶ್ರೀನಿವಾಸ್ ಅವರು ಬಿಜೆಪಿ ಸೇರ್ಪಡೆಯಾಗಿ 2018 ರ ವಿಧಾನ ಸಭಾ ಚುನಾವಣೆಯಲ್ಲಿ ಜಯಗಳಿಸಿದ್ದರು. ಇತ್ತೀಚೆಗೆ ನಡೆದ 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾರಣಾಂತರದಿಂದ ಪರಾಭವಗೊಂಡರು.
ಮಾಜಿ ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್ ಅವರ ಪತಿ ಡಿ.ಟಿ. ಶ್ರೀನಿವಾಸ್ ಅವರು ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದು, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ಹಿಂದೆ ಪದವೀಧರ ಕ್ಷೇತ್ರದಿಂದ ಬಿಜೆಪಿಗೆ ಸೆಡ್ಡು ಹೊಡೆದು ಪಕ್ಷೇತರರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಇದೀಗ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಲು ಕಾತುರರಾಗಿದ್ದಾರೆ. ಈ ಕಾರಣದಿಂದ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ.
ಜಿಲ್ಲೆಯಲ್ಲಿ 2023 ಚುನಾವಣಾ ಸಮಯದಿಂದಲೂ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆಂಬ ವದಂತಿ ಜೋರಾಗಿತ್ತು. ಕೊನೆಗೆ ಕಾಂಗ್ರೆಸ್ ಸೇರ್ಪಡೆ ದಿನಾಂಕ ನಿಗಧಿಯಾಗಿದ್ದು ಇದೇ ಅಕ್ಟೋಬರ್ 20 ರಂದು ಅಧಿಕೃತವಾಗಿ ಕಾಂಗ್ರೆಸ್ ಸೇರಲು ಮುಹೂರ್ತ ಫಿಕ್ಸ್ ಆಗಿದೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶತಾಯ-ಗತಾಯ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಳ್ಳುವ ಉಮೇದಿನಲ್ಲಿರುವ ಕಾಂಗ್ರೆಸ್ ಪಕ್ಷವು ಬೇರೆಬೇರೆ ಪಕ್ಷಗಳ ಮುಖಂಡರನ್ನು ಸೇರಿಸಿಕೊಳ್ಳುತ್ತಿದೆ.
ಈ ಭೇಟಿ ಸಂದರ್ಭದಲ್ಲಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.