75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 75 ದಿನಗಳ ಕಾಲ ಉಚಿತ ಲಸಿಕೆ: ಜಿಲ್ಲಾ ಪಂಚಾಯಿತಿ ಸಿ.ಇ.ಒ ಡಾ.ನಂದಿನಿ ದೇವಿ

suddionenews
2 Min Read

 

ಚಿತ್ರದುರ್ಗ,(ಜುಲೈ 20) : 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 75 ದಿನಗಳ ಕಾಲ ಉಚಿತವಾಗಿ 18ರಿಂದ 59ವರ್ಷದೊಳಗಿನ ಎಲ್ಲರಿಗೂ ಉಚಿತ ಮುನ್ನೆಚ್ಚರಿಕಾ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದೆ.  ಜುಲೈ 15 ರಿಂದ ಸೆಪ್ಟೆಂಬರ್ 30ರವರೆಗೆ ಕೋವಿಡ್ ಲಸಿಕಾಕರಣ ಅಮೃತ ಮಹೋತ್ಸವ ಅಡಿಯಲ್ಲಿ ಎಲ್ಲರಿಗೂ ಲಸಿಕೆ ಹಾಕಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿದೇವಿ ತಿಳಿಸಿದರು.

ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಯೋಗದೊಂದಿಗೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ 18 ರಿಂದ 59 ವರ್ಷದೊಳಗಿನವರಿಗೆ ಉಚಿತ ಬೂಸ್ಟರ್ ಲಸಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

16 ವರ್ಷ ಮೇಲ್ಪಟ್ಟವರಿಗೆ ಶೇ.75ರಷ್ಟು ಲಸಿಕೆ ನೀಡಿದ್ದು, ಸೆಪ್ಟಂಬರ್ ಅಂತ್ಯದೊಳಗೆ ಶೇ.100ರಷ್ಟು ಗುರಿ ತಲುಪಲಾಗುತ್ತದೆ. 12 ರಿಂದ 14 ವರ್ಷದವರಿಗೆ ಮೊದಲ ಡೋಸ್ ಶೇ.100 ಪ್ರಗತಿ ಸಾಧಿಸಲಾಗಿದೆ. ಶೇ.95 ಎರಡನೇ ಲಸಿಕೆ ಪೂರ್ಣಗೊಂಡಿದೆ. 15 ರಿಂದ 17 ವರ್ಷದವರಿಗೆ ಮೊದಲ ಲಸಿಕೆ ಶೇ.88, ಎರಡನೇ ಲಸಿಕೆ ಶೇ.85 ಆಗಿದೆ. 18 ರಿಂದ 59 ವರ್ಷದೊಳಗಿನ ಎಲ್ಲರಿಗೂ ಶೇ.100 ಬೂಸ್ಟರ್ ಡೋಸ್ ಸಂಪೂರ್ಣವಾಗಿ ಪ್ರಗತಿ ಸಾಧಿಸಬೇಕಿದೆ. ಲಸಿಕೆ ಹಾಕಿಸಿಕೊಳ್ಳಲು ಸಾರ್ವಜನಿಕರು ತಾವಾಗಿಯೇ ಮುಂದೆ ಬರುತ್ತಿದ್ದಾರೆ. ಸಾರ್ವಜನಿಕರಿಗಾಗಿ ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆ ಹಾಕಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಂಗನಾಥ್ ಮಾತನಾಡಿ, ಜಿಲ್ಲೆಯಲ್ಲಿ 18 ರಿಂದ 59 ವರ್ಷದೊಳಗಿನ 6,72,000ಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದರು.

ಬೇರೆ ಬೇರೆ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ನಮ್ಮ ಜಿಲ್ಲೆಯಲ್ಲಿ ಇದನ್ನು ಉದಾಸೀನ ಮಾಡದಂತೆ  ಎಲ್ಲರೂ ಮುನ್ನಚ್ಚರಿಕಾ ಕ್ರಮವಾಗಿ ಲಸಿಕೆ ಹಾಕಿಸಿಕೊಳ್ಳಿ ಎಂದು ತಿಳಿಸಿದರು.
1 ಜಿಲ್ಲಾಸ್ಪತ್ರೆ, 5 ಸಾರ್ವಜನಿಕ ಆಸ್ಪತ್ರೆ, 11 ಸಮುದಾಯ ಆರೋಗ್ಯ ಕೇಂದ್ರಗಳು, 81 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 5 ನಗರ ಆರೋಗ್ಯ ಕೇಂದ್ರಗಳು, 343 ಉಪಕೇಂದ್ರಗಳಲ್ಲಿ ಉಚಿತವಾಗಿ ಕೋವಿಡ್ ಬೂಸ್ಟರ್ ಲಸಿಕೆಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ  ಜಿಲ್ಲಾ ಶಸ್ತ್ರ ಚಿಕಿತ್ಸಕ ಹೆಚ್.ಜೆ. ಬಸವರಾಜ್, ನಿವಾಸಿ ವೈದ್ಯಾಧಿಕಾರಿ ಆನಂದ್ ಪ್ರಕಾಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯ್ಕ್, ಜಿಲ್ಲಾ ಉಪ ಆರೋಗ್ಯ ಶಿಕ್ಷಣ ಅಧಿಕಾರಿ ಗೌರಮ್ಮ, ತಾಲ್ಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಮಂಜುನಾಥ್, ಕಾರ್ಯಕ್ರಮ ಅನುಷ್ಠಾನಾಧಿಕಾರಿ ಪಿ.ಸಿ.ಕುಮಾರಸ್ವಾಮಿ, ಆಶಾಕಾರ್ಯಕರ್ತರು, ಆರೋಗ್ಯ ಇಲಾಖೆ ಸಿಬ್ಬಂದಿ, ಸಾರ್ವಜನಿಕರು ಇದ್ದರು.

Share This Article
Leave a Comment

Leave a Reply

Your email address will not be published. Required fields are marked *