Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗಂಗಾ ಕಲ್ಯಾಣ: 13 ಫಲಾನುಭವಿಗಳಿಗೆ ಮೋಟಾರ್ ಪಂಪ್ ವಿತರಿಸಿದ ಸಚಿವ ಟಿ.ರಘುಮೂರ್ತಿ

---Advertisement---

ಚಿತ್ರದುರ್ಗ. ಸೆ.19: ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಶಾಸಕರ ಹಾಗೂ ಸಾಂಸ್ಥಿಕ ಕೋಟಾದಡಿ ಆಯ್ಕೆಯಾದ ಹಿರಿಯೂರು ಮತ್ತು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಒಟ್ಟು 13 ಫಲಾನುಭವಿಗಳಿಗೆ ಮೋಟಾರ್ ಪಂಪ್ ಹಾಗೂ ಬಿಡಿಭಾಗಗಳನ್ನು ಶನಿವಾರ ವಿತರಿಸಲಾಯಿತು.

ನಗರದ ಚಳ್ಳಕೆರೆ ರಸ್ತೆಯ ಶ್ರೀರಾಮ ಕಲ್ಯಾಣ ಮಂಟಪದ ಆವರಣದಲ್ಲಿ ಫಲಾನುಭವಿಗಳಿಗೆ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ, ಗಂಗಾ ಕಲ್ಯಾಣ ಯೋಜನೆಯಡಿ ಹಿರಿಯೂರು ತಾಲ್ಲೂಕಿನ 8 ಹಾಗೂ ಚಳ್ಳಕೆರೆ ತಾಲ್ಲೂಕಿನ 5 ಫಲಾನುಭವಿಗಳಿಗೆ ಈಗಾಗಲೇ ಕೊಳವೆಬಾವಿ ಕೊರೆಸಲಾಗಿದ್ದು, ನೀರು ಲಭ್ಯವಾಗಿರುವುದು ಖಚಿತವಾಗಿದೆ. ವಿದ್ಯುತ್ ಸಂಪರ್ಕವೂ ದೊರೆತಿದ್ದು, ರೈತರು ಕೃಷಿ ಚಟುವಟಿಕೆಗೆ ತಕ್ಷಣವೇ ನೀರು ಬಳಸಿಕೊಳ್ಳಲು ಅನುಕೂಲವಾಗುವಂತೆ ಸಾಂಕೇತಿಕವಾಗಿ ಮೋಟಾರ್ ಪಂಪ್ ಮತ್ತು ಬಿಡಿಭಾಗಗಳನ್ನು ವಿತರಿಸಲಾಗುತ್ತಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಆದಿ ಜಾಂಬವ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಒಟ್ಟು 122 (ಶಾಸಕರ ಕೋಟಾ 36, ಸಾಂಸ್ಥಿಕ ಕೋಟಾ 34 ಹಾಗೂ ನಿಗಮದ ಅಧ್ಯಕ್ಷರು ಮತ್ತು ನಿರ್ದೇಶಕರ ಕೋಟಾ 52 ಸೇರಿ) ಫಲಾನುಭವಿಗಳಿಗೆ ಸೌಲಭ್ಯ ನೀಡುವ ಗುರಿ ಹೊಂದಲಾಗಿದೆ. ಇದರ ಜೊತೆಗೆ ನೇರ ಸಾಲ ಯೋಜನೆಯಡಿ 434 ಜನರಿಗೆ, ಉದ್ಯಮಶೀಲತೆ ಅಭಿವೃದ್ಧಿ ಯೋಜನೆಯಡಿ 41 ಜನರಿಗೆ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಡಿ 111 ಜನರಿಗೆ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್ ಅವರ ನೇತೃತ್ವದಲ್ಲಿ ಚಿತ್ರದುರ್ಗ ಜಿಲ್ಲೆಯ ಆರೂ ತಾಲ್ಲೂಕುಗಳಿಗೆ ನಿಗಮದ ಯೋಜನೆಗಳು ಹೆಚ್ಚಿನ ಪ್ರಮಾಣದಲ್ಲಿ ತಲುಪುತ್ತಿವೆ. ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ, ನಿಗಮದ ಜಿಲ್ಲಾ ವ್ಯವಸ್ಥಾಪಕ ರವಿಕುಮಾರ್ ಸೇರಿದಂತೆ ಫಲಾನುಭವಿಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now