ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ, (ಮಾ.06): ಅಡುಗೆ ಅನಿಲ ಬೆಲೆಯನ್ನು ಕೇಂದ್ರ ಸರ್ಕಾರ ಏರಿಸಿ ಜನಸಾಮಾನ್ಯರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್‍ನಿಂದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಕಟ್ಟಿಗೆಯಿಂದ ಒಲೆ ಉರಿಸಿ ಟೀ ಮಾಡುವ ಮೂಲಕ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿದ ಕಾಂಗ್ರೆಸ್ ಕಾರ್ಯಕರ್ತರು ಮತ್ತೆ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಐವತ್ತು ರೂ.ಗಳಿಗೆ ಹೆಚ್ಚಿಸಿದ್ದು, ಇದರಿಂದ ಬಡವರು, ಮಧ್ಯಮ ವರ್ಗದವರು, ಕೂಲಿ ಕಾರ್ಮಿಕರು ತತ್ತರಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೂಡಲೆ ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯಬೇಕು.
ರಾಜ್ಯದಲ್ಲಿ ನಲವತ್ತು ಪರ್ಸೆಂಟ್ ಭ್ರಷ್ಟಾಚಾರ ಮುಂದುವರೆಯುತ್ತಿರುವುದರ ಬೆನ್ನ ಹಿಂದೆಯೇ ಚನ್ನಗಿರಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಪುತ್ರ ನಲವತ್ತು ಲಕ್ಷ ರೂ.ಗಳ ಲಂಚ ಪಡೆಯುತ್ತಿರುವಾಗಲೆ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಿರುವುದನ್ನು ನೋಡಿದರೆ ಭ್ರಷ್ಠಾಚಾರಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಪ್ರತಿಭಟನಾಕಾರರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿದರು.
ಹಳೆ ಗ್ಯಾಸ್ ಸಿಲಿಂಡರ್‍ಗಳನ್ನು ತಳ್ಳುಗಾಡಿಯಲ್ಲಿಟ್ಟುಕೊಂಡು ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರುಗಳು ತಲೆಮರೆಸಿಕೊಂಡಿರುವ ಶಾಸಕ ಮಾಡಾಳು ವಿರುಪಾಕ್ಷಪ್ಪನನ್ನು ಕೂಡಲೆ ಬಂಧಿಸಿ ಅವರ ಕುಟುಂಬದ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್‍ಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಆರ್.ಕೃಷ್ಣಮೂರ್ತಿ, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಎಸ್.ಜಯಣ್ಣ, ಪರಿಶಿಷ್ಠ ಪಂಗಡ ವಿಭಾಗದ ಜಿಲ್ಲಾಧ್ಯಕ್ಷ ಹೆಚ್.ಅಂಜಿನಪ್ಪ, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ಲಾ, ಸೈಯದ್ ಖುದ್ದೂಸ್, ಡಿ.ಕುಮಾರ್ ಪಿಳ್ಳೆಕೆರನಹಳ್ಳಿ, ಅನಿಲ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗೀತ ನಂದಿನಿಗೌಡ, ಮುದಸಿರ್ ನವಾಜ್, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮೋಕ್ಷರುದ್ರಸ್ವಾಮಿ, ಮುನಿರಾ ಎ.ಮಕಾಂದಾರ್, ನಗರಸಭೆ ಸದಸ್ಯೆ ಪಿ.ಕೆ.ಮೀನಾಕ್ಷಿ, ಜಮೀರ್, ಸೈಯದ್ ಸಾಧಿಕ್‍ವುಲ್ಲಾ, ಅಶೋಕ್‍ನಾಯ್ಡು ಸೇರಿದಂತೆ ಪಕ್ಷದ ಅನೇಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.