ಸುದ್ದಿಒನ್, ಚಿತ್ರದುರ್ಗ, ಜೂ. 02: ಮಾದಿಗ ಸಮುದಾಯಕ್ಕೆ ರಾಜ್ಯದಲ್ಲಿ ಇಲ್ಲಿಯವರೆಗೂ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯವೇ ದೊರೆಯುತ್ತಿಲ್ಲ. ಆದ್ದರಿಂದ ಈ ಬಾರಿ ಸಚಿವ ಸಂಪುಟದಲ್ಲಿ ಕನಿಷ್ಠ ಮೂವರನ್ನು ಮಂತ್ರಿಯನ್ನಾಗಿಸಿ, ರಾಜ್ಯಸಭೆ, ವಿಧಾನಪರಿಷತ್ ಚುನಾವಣೆಯಲ್ಲಿ ತಲಾ ಒಂದೊಂದು ಸ್ಥಾನ ನೀಡಬೇಕೆಂದು ಮಾಜಿ ಸಚಿವ ಎಚ್.ಆಂಜನೇಯ, ರಾಜ್ಯಸಭೆ ಮಾಜಿ ಸದಸ್ಯ ಡಾ.ಎಲ್.ಹನುಮಂತಪ್ಪ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ನ್ಯಾಯಮೂರ್ತಿ ಸದಾಶಿವ ಸೇರಿ ಎಲ್ಲ ಆಯೋಗಗಳ ವರದಿಗಳು ಮಾದಿಗರು ಪರಿಶಿಷ್ಟರಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿದ್ದರೂ ರಾಜಕೀಯ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವುದನ್ನು ಅಂಕಿ ಅಂಶಗಳ ಸಮೇತ ಮಂಡಿಸಿವೆ. ಈ ಸಮುದಾಯಕ್ಕೆ ಹೆಚ್ಚು ಮನ್ನಣೆ ನೀಡಿ ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕೆಂದು ತಿಳಿಸಿವೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಮಾತ್ರ ಮಾದಿಗರಿಗೆ ಅವಕಾಶ ಕಲ್ಪಿಸುವ ಪ್ರಯತ್ನ ನಡೆದಿದ್ದರೂ ಪೂರ್ಣ ಪ್ರಮಾಣದಲ್ಲಿ ಆಗಿಲ್ಲ. ಈಗ ಅಹಿಂದ ನಾಯಕ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಬಳಿಕ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ರಚನೆ ಆಗಲಿದೆ. ಈ ವೇಳೆ ಜನಸಂಖ್ಯೆಗೆ ಅನುಗುಣವಾಗಿ ಶೋಷಣೆಗೆ ಒಳಗಾಗಿರುವ ಮಾದಿಗರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕೆಂದು ಕೋರಿದ್ದಾರೆ.
ಹಿರಿಯ ನಾಯಕ ಕೆ.ಎಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್ ಅವರೊಂದಿಗೆ ಮತ್ತೊಬ್ಬ ಮಾದಿಗ ಶಾಸಕರಿಗೆ ಮಂತ್ರಿ ಸ್ಥಾನ ನೀಡಬೇಕು. ಮುಖ್ಯವಾಗಿ ಪರಿಶಿಷ್ಟ ಜಾತಿ ಜನರ ಕಲ್ಯಾಣಕ್ಕಾಗಿ ಸೇವೆ ಸಲ್ಲಿಸಲು ಅವಕಾಶ ಇರುವ ಸಮಾಜ ಕಲ್ಯಾಣ ಇಲಾಖೆಯನ್ನೇ ಮಾದಿಗ ಸಮುದಾಯದ ಶಾಸಕರಿಗೆ ನೀಡಬೇಕು. ಈ ಮೂಲಕ ಸಮುದಾಯಕ್ಕೆ ಆಗುತ್ತಿರುವ ತಾರತಮ್ಯ ಸರಿಪಡಿಸಲು ಅವಕಾಶ ಕಲ್ಪಿಸಬೇಕೆಂದು ತಿಳಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಒಂದು ಕ್ಷೇತ್ರದಲ್ಲೂ ಸ್ಪರ್ಧಿಸಲು ಮಾದಿಗರಿಗೆ ಟಿಕೆಟ್ ನೀಡಲಿಲ್ಲ. ಪರಿಣಾಮ ಬಹುಸಂಖ್ಯಾತರಾಗಿರುವ ಮಾದಿಗರಲ್ಲಿ ಐವರು ಮಾತ್ರ ಶಾಸಕರಿದ್ದಾರೆ. ಆದರೆ, ಪರಿಶಿಷ್ಟ ಸಮುದಾಯದಲ್ಲಿನ ಕೆಲ ಜಾತಿಯವರು ಕಡಿಮೆ ಸಂಖ್ಯೆಯಲ್ಲಿದ್ದರೂ ಹೆಚ್ಚಿನ ಸಂಖ್ಯೆಯಲ್ಲಿ
ಶಾಸಕರಿದ್ದಾರೆ. ಆದ್ದರಿಂದ ಈ ಸಾಮಾಜಿಕ ಏರುಪೇರು, ತಾರತಮ್ಯ ಸರಿಪಡಿಸಲು ರಾಜ್ಯಸಭೆ ಮತ್ತು ವಿಧಾನ ಪರಿಷತ್ ಸದಸ್ಯತ್ವ ಆಯ್ಕೆ ವೇಳೆ ತಲಾ ಒಂದೊಂದು ಸ್ಥಾನ ಮಾದಿಗರಿಗೆ ನೀಡಬೇಕು ಹಾಗೂ ಪರಿಶಿಷ್ಟ ಜಾತಿಗೆ ಮಂತ್ರಿ ಸ್ಥಾನ ನೀಡುವ ಸಂದರ್ಭ ಯಾವುದೇ ರೀತಿ ತಾರತಮ್ಯ ಮಾಡಬಾರದು ಎಂದು ಕೋರಿದ್ದಾರೆ.
ಮಾದಿಗರು 200 ವಿಧಾನಸಭಾ ಕ್ಷೇತ್ರದಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತೇವೆ. ಒಳಮೀಸಲಾತಿ ಜಾರಿಗೊಳಿಸುವ ಭರವಸೆ ಜೊತೆಗೆ ಪ್ರಾಣಾಳಿಕೆಯಲ್ಲಿ ಮುದ್ರಿಸಿದ್ದರಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಮುದಾಯ ಸಂಪೂರ್ಣ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದು, ಇದರ ಫಲ ೧೩೬ ಸ್ಥಾನ ಗಳಿಸಲು ಸಾಧ್ಯವಾಗಿದೆ. ಆದ್ದರಿಂದ ಪಕ್ಷದ ಹಿತದೃಷ್ಠಿ ಮತ್ತು ಸ್ಥಳೀಯ ಸಂಸ್ಥೆ ಹಾಗೂ ೨೦೨೮ರ ವಿಧಾನಸಭಾ ಚುನಾವಣೆ ದೃಷ್ಠಿಯನ್ನಿಟ್ಟುಕೊಂಡು ಮಾದಿಗರಿಗೆ ಆದ್ಯತೆ ನೀಡಬೇಕು. ರಾಜ್ಯದ ಉದ್ದಗಲಕ್ಕೂ ಹೆಚ್ಚು ಹಾಗೂ ನಿರ್ಣಾಯಕ ಸಂಖ್ಯೆಯಲ್ಲಿರುವ ಮಾದಿಗ ಸಮುದಾಯಕ್ಕೆ ಸಮ ಸಮಾಜದ ನಿರ್ಮಾಣ ಮಾಡುವ ಹೊಣೆಗಾರಿಕೆ ನೀಡಬೇಕು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್ ಗಾಂಧಿ, ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅಹಿಂದ ನಾಯಕ ಸಿದ್ದರಾಮಯ್ಯ ಈ ನಿಟ್ಟಿನಲ್ಲಿ ನ್ಯಾಯಯುತ ತೀರ್ಮಾನ ಕೈಗೊಂಡು, ಮಾದಿಗ ಸಮುದಾಯಕ್ಕೆ ರಾಜಕೀಯ ಮನ್ನಣೆ ನೀಡಬೇಕೆಂದು ಕೋರಿದ್ದಾರೆ.
ಕಡಿಮೆ ಪ್ರಾತಿನಿಧ್ಯ ನೀಡುತ್ತಲೇ ಬರುತ್ತಿರುವ ಪದ್ಧತಿಗೆ ತಿಲಾಂಜಲಿ ಹಾಡಬೇಕು. ಆಗ ಮಾತ್ರ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಸಹಕಾರಿ ಆಗಲಿದೆ ಎಂದು ಮನವಿ ಮಾಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















