ಬೆಂಗಳೂರು: ರಾಜ್ಯದ ವಿದ್ಯಾರ್ಥಿ ಸಮೂಹಕ್ಕೆ ಕರ್ನಾಟಕ ಸರ್ಕಾರವು ಭರ್ಜರಿ ಕೊಡುಗೆಯೊಂದನ್ನು ನೀಡಿದೆ. ರಾಜ್ಯದ ಶಾಲಾ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರವು ಹೊರಡಿಸಿದ ಆದೇಶದ ಪ್ರಕಾರ, ರಾಜ್ಯದ ಪ್ರಮುಖ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (KKRTC) ಬಸ್ಗಳಲ್ಲಿ ಪ್ರಯಾಣಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಉಚಿತ ಬಸ್ ಪಾಸ್ ವಿತರಿಸಲು ಅನುಮೋದನೆ ನೀಡಲಾಗಿದೆ.
ಈ ಮೊದಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ವೆಚ್ಚವನ್ನು ಸರ್ಕಾರ, ಶೇ.25 ರಷ್ಟು ಸಾರಿಗೆ ನಿಗಮಗಳು ಮತ್ತು ಉಳಿದ ಶೇ.25 ರಷ್ಟನ್ನು ವಿದ್ಯಾರ್ಥಿಗಳು ಭರಿಸುತ್ತಿದ್ದರು. ಆದರೆ ಇನ್ಮುಂದೆ ಸಂಪೂರ್ಣ ಉಚಿತವಾಗಿ ಪಾಸ್ ನೀಡಲು ನಿರ್ಧರಿಸಲಾಗಿದೆ. ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ಅಂದಾಜು 286.08 ಕೋಟಿ ರೂ.ಗಳ ವೆಚ್ಚ ತಗಲಲಿದ್ದು, ಇದರೊಂದಿಗೆ ಪ್ರತಿ ಬಸ್ ಪಾಸ್ನ ಸಂಸ್ಕರಣಾ ಶುಲ್ಕ ಮತ್ತು ಅಪಘಾತ ಪರಿಹಾರ ನಿಧಿ ಸೇರಿದಂತೆ ಒಟ್ಟು 15.00 ಕೋಟಿ ರೂ.ಗಳನ್ನು ಸರ್ಕಾರವೇ ಸಾರಿಗೆ ನಿಗಮಗಳಿಗೆ ಭರಿಸಲಿದೆ.
ಸರ್ಕಾರದ ಆದೇಶದ ಪ್ರಕಾರ ಉಚಿತ ಬಸ್ ಪಾಸ್ ಪಡೆಯಲು ಪ್ರಮುಖ ಷರತ್ತುಗಳನ್ನು ವಿಧಿಸಲಾಗಿದೆ. ಉಚಿತ ಬಸ್ ಪಾಸ್ ವಿತರಣೆಯಲ್ಲಿ ಸದ್ಯ ಚಾಲ್ತಿಯಲ್ಲಿರುವ ನಿಯಮಾವಳಿಗಳಾದ ವಿದ್ಯಾರ್ಥಿಯ ಶೈಕ್ಷಣಿಕ ಅರ್ಹತೆ, ದೂರದ ಮಿತಿ ಹಾಗೂ ಪಾಸಿನ ಕಾಲಾವಧಿಯನ್ನು ಯಥಾವತ್ತಾಗಿ ಅನುಸರಿಸಲಾಗುತ್ತದೆ.
ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ‘ಸೇವಾ ಸಿಂಧು’ ಪೋರ್ಟಲ್ನಲ್ಲಿ ಶಾಲಾ-ಕಾಲೇಜು ಸೇರಿದಂತೆ ಎಲ್ಲಿಂದಲಾದರೂ ಆನ್ಲೈನ್ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
2026-27ನೇ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ಹಣ ಪಾವತಿಸಿ ರಿಯಾಯಿತಿ ದರದಲ್ಲಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ ಅವರು ಪಾವತಿಸಿರುವ ಸಂಪೂರ್ಣ ಮೊತ್ತವನ್ನು ಮುಂದಿನ 15 ದಿನಗಳ ಒಳಗಾಗಿ ಮರುಪಾವತಿಸಲು (ರಿಫಂಡ್) ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















