Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಳಕಾಲ್ಮುರು ಜನತೆಗೆ ಗುಡ್ ನ್ಯೂಸ್: ನೂತನ KSRTC ಬಸ್ ನಿಲ್ದಾಣಕ್ಕೆ ಸಚಿವ ಟಿ.ರಘುಮೂರ್ತಿ ಚಾಲನೆ

---Advertisement---

ಚಿತ್ರದುರ್ಗ. ಆ.23: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ ಮೊಳಕಾಲ್ಮುರು ಪಟ್ಟಣದಲ್ಲಿ ನಿರ್ಮಿಸಲಾಗಿರುವ ನೂತನ ಬಸ್ ನಿಲ್ದಾಣದಲ್ಲಿ ಭಾನುವಾರ ಪೂಜಾ ಕಾರ್ಯಕ್ರಮ ನೆರವೇರಿಸಿದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ.ರಘುಮೂರ್ತಿ ಅವರು ಸಾಂಕೇತಿಕವಾಗಿ ಬಸ್‍ಗಳ ಕಾರ್ಯಾಚರಣೆಗೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಸಚಿವ ಟಿ.ರಘುಮೂರ್ತಿ ಅವರು, ಇದು ಬಸ್ ನಿಲ್ದಾಣದ ಅಧಿಕೃತ ಉದ್ಘಾಟನಾ ಸಮಾರಂಭವಲ್ಲ. ಮೊಳಕಾಲ್ಮುರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಹಾಗೂ ಡಿಪೋ ಕಾಮಗಾರಿಗಳು ಇನ್ನೂ ಪ್ರಗತಿಯಲ್ಲಿವೆ. ಆದರೆ, ಸಾರ್ವಜನಿಕರ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಸಾಂಕೇತಿಕವಾಗಿ ಬಸ್‍ಗಳ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಹೇಳಿದರು.

ಮೊಳಕಾಲ್ಮುರು ಪಟ್ಟಣದ ನೂತನ ಬಸ್ ನಿಲ್ದಾಣ ಅಂದಾಜು ರೂ. 5.45 ಕೋಟಿ ವೆಚ್ಚದಲ್ಲಿ ಈ ಬಸ್ ನಿಲ್ದಾಣ ನಿರ್ಮಾಣಗೊಂಡಿದೆ. 2018 ರಿಂದ 2023 ರ ಅವಧಿಯ ಸರ್ಕಾರದಲ್ಲಿ ಮಂಜೂರಾಗಿದ್ದ ಈ ಯೋಜನೆಯ ಕಾಮಗಾರಿ ಪ್ರಸ್ತುತ ಪೂರ್ಣಗೊಳ್ಳುವ ಹಂತಕ್ಕೆ ಬಂದಿವೆ. ಮುಂದಿನ ದಿನಗಳಲ್ಲಿ ಶಿಷ್ಟಾಚಾರದ ಪ್ರಕಾರ ಜನಪ್ರತಿನಿಧಿಗಳು ಹಾಗೂ ಎಲ್ಲಾ ಪಕ್ಷದ ನಾಯಕರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳನ್ನು ಆಹ್ವಾನಿಸಿ ಅತ್ಯಂತ ವಿಜೃಂಭಣೆಯಿಂದ ಉದ್ಘಾಟನಾ ಸಮಾರಂಭ ಆಯೋಜಿಸಲಾಗುವುದು ಎಂದು ತಿಳಿಸಿದರು.

ಮೊಳಕಾಲ್ಮುರು ಶಾಸಕ ಎನ್. ವೈ. ಗೋಪಾಲಕೃಷ್ಣ ಮಾತನಾಡಿ, ಸಾರ್ವಜನಿಕರ ಒತ್ತಾಯ ಹಾಗೂ ಅನುಕೂಲಕ್ಕಾಗಿ ಇಂದಿನಿಂದ ಸಾಂಕೇತಿಕವಾಗಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಬಸ್ ನಿಲ್ದಾಣವನ್ನು ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗಿದೆ ಎಂದು ತಿಳಿಸಿದ ಅವರು, ಮುಂದಿನ ದಿನಗಳಲ್ಲಿ ಬಸ್ ನಿಲ್ದಾಣ ಹಾಗೂ ಬಸ್ ಡಿಪೋಗೆ ಶ್ರಮಿಸಿದ ಮತ್ತು ಅನುದಾನ ನೀಡಿದ ಹಿಂದಿನ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಅಹ್ವಾನಿಸಿ ಶಿಷ್ಟಾಚಾರದ ಪ್ರಕಾರ ಅಧಿಕೃತವಾಗಿ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಾಗುವುದು ಎಂದು ಶಾಸಕರು ತಿಳಿಸಿದರು.

ಒಂದು ತಿಂಗಳೊಗೆ ಡಿಪೋ ಕಾಮಗಾರಿ ಪೂರ್ಣ: ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾದಿಂದ ಸರ್ವಿಸ್ ರಸ್ತೆ ಹಾಗೂ ಲಿಂಕ್ ರಸ್ತೆ ಅಪ್ರೋಚ್‍ಗೆ ಅನುಮತಿ ಸಿಗುವುದು ಸ್ವಲ್ಪ ತಡವಾಗಿತ್ತು. ಈ ಕುರಿತು ಅಧಿಕಾರಿಗಳೊಂದಿಗೆ ಸತತ ಮಾತುಕತೆ ನಡೆಸಿ ಅನುಮತಿ ಪಡೆಯಲಾಗಿದೆ. ಇನ್ನು ಒಂದು ತಿಂಗಳ ಒಳಗಾಗಿ ಪೂರ್ಣ ಪ್ರಮಾಣದಲ್ಲಿ ಬಸ್ ಡಿಪೆÇೀ ಕಾಮಗಾರಿಯೂ ಪೂರ್ಣಗೊಳ್ಳಲಿದೆ ಶಾಸಕ ಎನ್.ವೈ.ಗೋಪಾಲಕೃಷ್ಣ ತಿಳಿಸಿದರು.

ಕೆಎಸ್‍ಆರ್‍ಟಿಸಿ ಚಿತ್ರದುರ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ ಮಾತನಾಡಿ, ಮೊಳಕಾಲ್ಮರು ನೂತನ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅಗತ್ಯವಿರುವ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸಲಾಗಿದೆ. ಕುಡಿಯುವ ನೀರು, ಆಸನಗಳ ವ್ಯವಸ್ಥೆ, ಪುರುಷರು, ಮಹಿಳೆಯರು ಹಾಗೂ ವಿಕಲಚೇತನರಿಗೆ ಪ್ರತ್ಯೇಕ ಶೌಚಾಲಯ, ಮಹಿಳೆಯರಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಮತ್ತು ತಾಯಂದಿರಿಗೆ ಮಗುವಿಗೆ ಹಾಲುಣಿಸುವ ‘ಫೀಡಿಂಗ್ ರೂಮ್’ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಕ್ಯಾಂಟೀನ್ ವ್ಯವಸ್ಥೆ ಹಾಗೂ 6 ಸ್ಟಾಲ್‍ಗಳನ್ನು ನಿರ್ಮಿಸಲಾಗಿದೆ ಎಂದು ಮಾಹಿತಿ ನೀಡಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾದುಹೋಗುವ ಬಸ್‍ಗಳಿಗೂ ಈ ನಿಲ್ದಾಣದೊಂದಿಗೆ ಸಂಪರ್ಕ ಕಲ್ಪಿಸಲಾಗುತ್ತಿದ್ದು, ಸದ್ಯಕ್ಕೆ 53ಕ್ಕೂ ಹೆಚ್ಚು ಬಸ್‍ಗಳು ಇಲ್ಲಿಗೆ ಬಂದು ಹೋಗುವ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಸಾಂಕೇತಿಕವಾಗಿ ಬಸ್ ಸಂಚಾರ ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ತಹಶೀಲ್ದಾರ್ ಡಾ.ನಾಗವೇಣಿ, ಕೆಎಸ್‍ಆರ್‍ಟಿಸಿ ಚೀಫ್ ಟ್ರಾಫಿಕ್ ಮ್ಯಾನೇಜರ್ ಜಿ.ಟಿ.ಪ್ರಭಾಕರ ರೆಡ್ಡಿ ಸೇರಿದಂತೆ ಮತ್ತಿತರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now