ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಆ.20) : ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸದ್ಭಾವನಾ ದಿನದ ಅಂಗವಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
‘ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಭೇದಭಾವವಿಲ್ಲದೇ ಭಾರತದ ಎಲ್ಲ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯನಿರ್ವಹಿಸುತ್ತೇನೆಂದು ನಾನು ಪ್ರತಿಜ್ಞೆ ಮಾಡುತ್ತೇನೆ. ಅಲ್ಲದೇ, ವೈಯಕ್ತಿಕವಾಗಿಯಾಗಲಿ ಅಥವಾ ಸಾಮೂಹಿಕವಾಗಿಯಾಗಲಿ ನಮ್ಮಲ್ಲಿರುವ ಎಲ್ಲ ಭೇದಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇವೆಂದು ಸಹ ಪ್ರತಿಜ್ಞೆ ಮಾಡುತ್ತೇನೆ’ ಎಂಬ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ ಮಾತನಾಡಿ, ಎಲ್ಲಾ ಧರ್ಮ, ಭಾಷೆ ಹಾಗೂ ರಾಜ್ಯಗಳ ಜನರಲ್ಲಿ ಸೌಹಾರ್ದತೆಯನ್ನು ಉತ್ತೇಜಿಸಿ ಎಲ್ಲರಲ್ಲೂ ಸದ್ಭಾವನೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡಲು ಕೇಂದ್ರ ಸರ್ಕಾರದ ಆದೇಶದಂತೆ, ಪ್ರತಿ ವರ್ಷ ಆಗಸ್ಟ್ 20ರಂದು “ಸದ್ಭಾವನಾ ದಿನ”ವನ್ನಾಗಿ ರಾಜ್ಯಾದ್ಯಂತ ಆಚರಿಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿ ವರ್ಗ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಉಪವಿಭಾಗಾಧಿಕಾರಿಗಳ ಕಚೇರಿ, ಸಣ್ಣ ಉಳಿತಾಯ ಇಲಾಖೆ, ಭೂದಾಖಲೆಗಳ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಸಿಬ್ಬಂದಿ ವರ್ಗದವರು ಇದ್ದರು.