ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 14 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಸಂಯುಕ್ತಾಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಏ. 15 ಮತ್ತು 16 ರಂದು ಎರಡು ದಿನಗಳ ಕಾಲ ನಗರದ ವೀರವನಿತೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಜಿಲ್ಲೆಯ ಎಲ್ಲ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ ಮುದಜ್ಜಿ ಅವರು ಮನವಿ ಮಾಡಿಕೊಂಡಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆ ಏ. 15 ರಂದು ಬೆಳಿಗ್ಗೆ 10 ಗಂಟೆಗೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ನೆರವೇರಲಿದ್ದು, ಎಲ್ಲ ನೌಕರರು ತಪ್ಪದೆ ಸಮಯಕ್ಕೆ ಸರಿಯಾಗಿ ಕ್ರೀಡಾಂಗಣದಲ್ಲಿ ಸೇರುವಂತೆ ಈಗಾಗಲೆ ಸೂಚನೆ ನೀಡಲಾಗಿದೆ.

ವಾರ್ಷಿಕ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮಹಿಳೆಯರಿಗೆ ಮತ್ತು ಪುರುಷರಿಗೆ ವಯೋಮಾನ ಆಧಾರದಲ್ಲಿ ಪ್ರತ್ಯೇಕವಾಗಿ ಆಯೋಜಿಸಲಾಗಿದ್ದು, ವಿವಿಧ ಬಗೆಯ ಕ್ರೀಡೆಗಳು, ಕ್ರಿಕೆಟ್, ಅಥ್ಲೆಟಿಕ್ಸ್, ಈಜು ಸ್ಪರ್ಧೆ, ಕುಸ್ತಿ, ಸಂಗೀತ ಹಾಗೂ ನೃತ್ಯ ಸ್ಪರ್ಧೆಗಳು ಜರುಗಲಿವೆ. ಈ ಬಾರಿ ವಿಶೇಷವಾಗಿ ಯೋಗ ಸ್ಪರ್ಧೆಯನ್ನು ಸೇರ್ಪಡೆ ಮಾಡಲಾಗಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು, ವಿವಿಧ ವೃಂದಗಳ ಅಧ್ಯಕ್ಷರು, ಪದಾಧಿಕಾರಿಗಳು, ತಾಲ್ಲೂಕು ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಏ. 15 ಮತ್ತು 16 ರಂದು ಎರಡು ದಿನಗಳ ಕಾಲ ಜರುಗುವ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಾಲತೇಶ ಮುದಜ್ಜಿ ಮನವಿ ಮಾಡಿದ್ದಾರೆ.
ನೌಕರರಿಗೆ ಎರಡು ದಿನ ವಿಶೇಷ ಸಾಂದರ್ಭಿಕ ರಜೆ : ಏ. 15 ಮತ್ತು 16 ರಂದು ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವ ನೌಕರರಿಗೆ ಎರಡು ದಿನಗಳ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಈಗಾಗಲೆ ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದು, ಅದರಂತೆ ಆಯಾ ಕಚೇರಿ ಮುಖ್ಯಸ್ಥರು, ಕ್ರೀಡಾಕೂಟದಲ್ಲಿ ಭಾಗವಹಿಸುವ ಅಧಿಕಾರಿ, ನೌಕರರ ಹಾಜರಾತಿ ಪ್ರಮಾಣ ಪತ್ರ ಹಾಜರುಪಡಿಸಿಕೊಂಡು, ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡುವಂತೆ ಸೂಚನೆ ನೀಡಲಾಗಿರುತ್ತದೆ.
ಜಿಲ್ಲಾ ಉಸ್ತುವಾರಿ ಸಚಿವರಿಂದ ಉದ್ಘಾಟನೆ : ಕಾರ್ಯಕ್ರಮದ ಉದ್ಘಾಟನೆಯನ್ನು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ನೆರವೇರಿಸುವರು. ಸಂಸದ ಗೋವಿಂದ ಎಂ ಕಾರಜೋಳ ಘನ ಉಪಸ್ಥಿತಿ ವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಕ್ರೀಡಾಜ್ಯೋತಿ ಸ್ವೀಕಾರ ಮಾಡುವರು. ಮುಖ್ಯ ಅತಿಥಿಗಳಾಗಿ ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ. ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ. ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ. ಎಂ. ಚಂದ್ರಪ್ಪ, ವಿಧಾನಪರಿಷತ್ ಸದಸ್ಯರುಗಳಾದ ಚಿದಾನಂದ ಎಂ. ಗೌಡ, ಡಿ.ಟಿ. ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ. ಬಿ. ಯೋಗೇಶ್ ಬಾಬು, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್‌ಪೀರ್, ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಉನ್ನತ ಅಧಿಕಾರಿಗಳು ಕೂಡ ಪಾಲ್ಗೊಳ್ಳುವರು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಾಲತೇಶ ಮುದಜ್ಜಿ ಅವರು ತಿಳಿಸಿದ್ದಾರೆ.


