ಎಂ.ಬಿ.ಪಾಟೀಲರು ಆರೋಪ ಸಾಬೀತು ಪಡಿಸಲು ಇಲ್ಲವೇ ಬಹಿರಂಗ ಕ್ಷಮೆ ಯಾಚಿಸಲಿ: ಗೋವಿಂದ ಕಾರಜೋಳ ಆಗ್ರಹ

suddionenews
2 Min Read

 

ಬೆಂಗಳೂರು: ಗಾಂಧಿ ನಡಿಗೆ ಕೃಷ್ಣೆಯ ಕಡೆಗೆ ಎಂಬ ಕಾಂಗ್ರೆಸ್ ನವರ ಪಾದಯಾತ್ರೆ ಹಾನಗಲ್ ಮತ್ತು ಸಿಂಧಗಿ ಮತಕ್ಷೇತ್ರಗಳ ಉಪಚುನಾವಣೆಗಳ ಹಿನ್ನೆಲೆಯಲ್ಲಿ ಒಂದು ಚುನಾವಣಾ ಗಿಮಿಕ್, ಇಂತಹ ಚುನಾವಣಾ ಗಿಮಿಕ್ ಗಳಿಗೆ ಜನ ಮೋಸ ಹೋಗುವುದಿಲ್ಲ. ತಂತ್ರಗಾರಿಕೆಗಳಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ಯಾವಾಗಲೂ ಕೃಷ್ಣೆಯ ನಡಿಗೆ ಸತ್ಯದ ಕಡೆಗೆ ಎಂಬುದನ್ನು ಪರಿಪಾಲಿಸುತ್ತಾ ಬಂದಿದ್ದು ಉಪಚುನಾವಣೆ ಇರಲಿಲ್ಲ ಎಂದಿದ್ದರೆ ಕಾಂಗ್ರೆಸ್ ನವರ ‘ಗಾಂಧಿ ನಡಿಗೆ ಕೃಷ್ಣೆಯ ಕಡೆಗೆ’ ಇರುತ್ತಿರಲಿಲ್ಲ. ಅದು ನಿರ್ಲಕ್ಷ್ಯದ ಕಡೆಗೆ ಇರುತ್ತಿತ್ತು ಎಂದರು. ಮಾಜಿ ನೀರಾವರಿ ಸಚಿವ ಶ್ರೀ ಎಂ.ಬಿ. ಪಾಟೀಲರವರು ನಾನು ಕೃಷ್ಣೆ ಕಾಂಗ್ರೆಸ್ ನವರ ಪಾಪದ ಕೂಸು ಎಂದು ಹೇಳಿದ್ದೇನೆಂದು ಸುಳ್ಳು ಹೇಳಿದ್ದಾರೆ. ನಾನು ಯಾವತ್ತೂ ಹೇಳಿಲ್ಲ ಮತ್ತು ಹೇಳುವವನೂ ಅಲ್ಲ. ನಾನು ಈ ರೀತಿ ಹೇಳಿದ್ದೇನೆಂದು ಎಂ.ಬಿ.ಪಾಟೀಲರು ಸಾಬೀತು ಪಡಿಸಬೇಕು. ಇಲ್ಲದಿದ್ದರೆ ಅವರು ಬಹಿರಂಗವಾಗಿ ಕ್ಷಮೆ ಯಾಚಿಸಬೇಕೆಂದು ಸಚಿವರು ಒತ್ತಾಯಿಸಿದರು.

ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯಾನಂತರ ಕಾಂಗ್ರೆಸ್ ನವರು ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಯಾವುದೇ ರೀತಿಯ ಸಮರ್ಪಕ ಹಣಕಾಸು ಒದಗಿಸಲಿಲ್ಲ. ಆದ್ದರಿಂದಾಗಿ ಈ ಯೋಜನೆಗಳು ಕುಂಟುಂತ್ತಾ ತೆವಳುತ್ತಾ ಜನರಿಗೆ ಯಾವುದೇ ರೀತಿಯ ಸಹಾಯವಾಗದ ರೀತಿಯಲ್ಲಿ ಮುನ್ನಡೆದವು. 2008 ರಿಂದ 2013ರ ವರೆಗೆ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಸರ್ಕಾರ ಇದ್ದಾಗ ಇಂದಿನ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿಯವರು ಜಲ ಸಂಪನ್ಮೂಲ ಸಚಿವರಾಗಿದ್ದ ಸಂದರ್ಭದಲ್ಲಿ ಸಿಂಧಗಿ ಮತಕ್ಷೇತ್ರಕ್ಕೆ ಅನುಕೂಲವಾಗುವ ಇಂಡಿ ಶಾಖಾ ಕಾಲುವೆ ಮತ್ತು ಗುತ್ತಿ ಬಸವಣ್ಣ ಏತ ನೀರಾವರಿ ಕಾಮಗಾರಿಗಳನ್ನು ಪೂರ್ಣಗೊಳಿಸಿದರು. ಈ ಎರಡೂ ಯೋಜನೆಗಳಿಗೆ 1000 ಕೋಟಿ ರೂಪಾಯಿಗಳು ಖರ್ಚಾಗಿದ್ದು 80 ಸಾವಿರ ಹೆಕ್ಟೇರ್ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಿ ರೈತರ ಬಾಳನ್ನು ಹಸನು ಮಾಡಲಾಗಿದೆ ಎಂದು ಸಚಿವರು ವಿವರಿಸಿದರು. ಸಿಂಧಗಿ ಮತಕ್ಷೇತ್ರದ ಜನತೆಗೆ ಭಾರತೀಯ ಜನತಾ ಪಕ್ಷ ಮಾಡಿದ ಅಭಿವೃದ್ಧಿಯ ಬಗ್ಗೆ ಸೂಕ್ತವಾದ ಕಲ್ಪನೆ ಇದ್ದು, ಕಾಂಗ್ರೆಸ್ ನವರ ಪಾದಯಾತ್ರೆಯಂತಹ ಹೊಸ ನಾಟಕದಿಂದ ಮೋಸ ಹೋಗುವುದಿಲ್ಲ. ಭಾರತೀಯ ಜನತಾ ಪಕ್ಷದ ಗೆಲುವು ನಿಶ್ಚಿತ ಎಂದು ಹೇಳಿದರು.

ಪ್ರತಿಯೊಂದು ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ನವರು ಗಿಮಿಕ್ ಗಳನ್ನು ಮಾಡುತ್ತಾರೆ. ಈಗ ಸಿಂಧಗಿ ಹಾಗೂ ಹಾನಗಲ್ ಉಪಚುನಾವಣೆ ಮತ್ತು ಡಿಸೆಂಬರ್ ಹೊತ್ತಿಗೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿನ ಚುನಾವಣೆ ಬರುವುದರಿಂದ ಈ ಹೊಸ ನಾಟಕ ಪ್ರಾರಂಭಿಸಿದ್ದಾರೆ. ಗಾಂಧೀಜಿಯವರ ಹೆಸರನ್ನು ಯಾಕೆ ದುರುಪಯೋಗ ಮಾಡಿಕೊಳ್ಳುತ್ತಾರೆಂಬುದು ಗೊತ್ತಿಲ್ಲ ಕಾಂಗ್ರೆಸ್ ನವರಿಗೆ ಗಾಂಧೀಜಿಯವರ ಹೆಸರನ್ನು ಹೇಳುವಂತಹ ನೈತಿಕತೆಯೇ ಇಲ್ಲ ಎಂದು ಸಚಿವರು ಟೀಕಿಸಿದರು. ಕಾಂಗ್ರೆಸ್ ನವರು ಜನರಿಗೆ ಮೋಸವಾಡಿರುವಂತಹದ್ದು ಇತಿಹಾಸ ಎಂದು ಸಚಿವರು ಹೇಳಿದರು. ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಮತ್ತು ಭೂಸ್ವಾಧೀನ ಕಾಮಗಾರಿಗಳಿಗೆ ಹಣ ನೀಡದೇ 20 ಹಳ್ಳಿಗಳನ್ನು ಸ್ಥಳಾಂತರ ಮಾಡದೇ ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲಿಲ್ಲ. ಇದರಿಂದಾಗಿ ನಮ್ಮ ಕೃಷ್ಣೆ ಕಣ್ಣೀರು ಸುರಿಸುವಂತಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *