ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 10 : ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಮತ್ತು ಕಟೌಟ್ಗಳನ್ನು ಅಳವಡಿಸುವುದಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಬಿಗಿಯಾದ ಮಾರ್ಗಸೂಚಿಗಳನ್ನು ಹೊರಡಿಸುವ ಅಗತ್ಯವಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿಕುಮಾರಸ್ವಾಮಿ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಬುಧವಾರ ಆಯೋಜಿಸಲಾಗಿದ್ದ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬ್ಯಾನರ್ ಹಾಗೂ ಫ್ಲೆಕ್ಸ್ ಅಳವಡಿಕೆಗೆ ಅನುಮತಿ ನೀಡುವಾಗ ‘ಎಲ್ಲಿ ಅಳವಡಿಸಬೇಕು, ಎಷ್ಟು ಪ್ರಮಾಣದಲ್ಲಿರಬೇಕು ಹಾಗೂ ಎಷ್ಟು ದಿನಗಳ ಕಾಲ ಇರಬೇಕು’ ಎಂಬುದರ ಕುರಿತು ಸ್ಪಷ್ಟ ಮತ್ತು ಕಟ್ಟುನಿಟ್ಟಾದ ಆದೇಶ ಹೊರಡಿಸಬೇಕು.
ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳು, ಸರ್ಕಾರಿ ಕಚೇರಿಗಳ ಆವರಣ ಹಾಗೂ ಗೊಂದಲಗಳಿಗೆ ಕಾರಣವಾಗುವ ಸ್ಥಳಗಳಲ್ಲಿ ಫ್ಲೆಕ್ಸ್ ಅಳವಡಿಸುವುದನ್ನು ನಿಯಂತ್ರಿಸಬೇಕು. ಫ್ಲೆಕ್ಸ್ ಹಾಗೂ ಬ್ಯಾನರ್ ಮುದ್ರಣ ಮಾಡುವವರ (ಪ್ರಿಂಟಿಂಗ್ ಪ್ರೆಸ್) ಮಾಹಿತಿ ಹಾಗೂ ಅನುಮತಿ ಸಂಖ್ಯೆಯನ್ನು ಫ್ಲೆಕ್ಸ್ ಮೇಲೆ ಕಡ್ಡಾಯವಾಗಿ ಪ್ರದರ್ಶಿಸುವಂತೆ ಸೂಚಿಸಬೇಕು. ನಿಗದಿತ ಸಮಯ ಮುಗಿದ ತಕ್ಷಣ ಸಂಬಂಧಪಟ್ಟವರೇ ಅದನ್ನು ತೆರವುಗೊಳಿಸಬೇಕು, ಇಲ್ಲವೇ ನಗರಾಡಳಿತ ಕ್ರಮ ಕೈಗೊಳ್ಳಬೇಕು. ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಹಿರಿಯೂರು ನಗರದಲ್ಲಿ ಅನೇಕ ಆಕಾಂಕ್ಷಿಗಳು ಹಾಗೂ ಬೆಂಬಲಿಗರು ಮನಬಂದಂತೆ ಬ್ಯಾನರ್ ಹಾಕುತ್ತಾರೆ. ಇದು ಸ್ಥಳೀಯವಾಗಿ ಅನಗತ್ಯ ಗೊಂದಲ ಹಾಗೂ ಕಾನೂನು ಸುವ್ಯವಸ್ಥೆ ಸಮಸ್ಯೆಗೆ ದಾರಿಯಾಗುತ್ತದೆ. ಸ್ಥಳೀಯ ನಗರಾಡಳಿತ ಸಂಸ್ಥೆಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಉಪವಿಭಾಗಾಧಿಕಾರಿ ಡಾ.ಕಾಂತರಾಜ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮ ಹಾನಗಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಂ.ಸಿ.ಸುನೀಲ್ ಕುಮಾರ್, ನಗರಸಭೆ ಆಯುಕ್ತೆ ಲಕ್ಷ್ಮಿ, ಪರಿಸರಾಧಿಕಾರಿ ಪಲ್ಲವಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.












