ಚಿತ್ರದುರ್ಗ. ಆ.12: 78ನೇ ಸ್ವಾತಂತ್ರ್ಯಮಹೋತ್ಸವ ಹಿನ್ನಲೆಯಲ್ಲಿ ಆ.13 ರಿಂದ 15 ವರೆಗೆ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಮೂರು ದಿನಗಳ ಕಾಲ ಜಿಲ್ಲೆಯ ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ರಾಷ್ಟ್ರಪ್ರೇಮ ಮೆರೆಯಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಹರ್ ಘರ್ ತಿರಂಗಾ ಅಬಿಯಾನ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾರತದ ತ್ರಿವರ್ಣ ಧ್ವಜ ನಮ್ಮೆಲ್ಲರ ಅಸ್ಮಿತೆಯ ಪ್ರತೀಕ. ಇದಕ್ಕೆ ಚ್ಯುತಿ ಬಾರದ ಹಾಗೆ ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಿ, ಅದರ ಸೆಲ್ಫೀ ಫೋಟೋವನ್ನು ವೆಬ್‍ಸೈಟ್ hargartiranga.com ನಲ್ಲಿ ಅಪ್‍ಲೋಡ್ ಮಾಡುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.
ಆಗಸ್ಟ್ 13 ರಿಂದ 15 ರವರೆಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ, ಅಂಗನವಾಡಿ ಕೇಂದ್ರ, ಶಾಲಾ-ಕಾಲೇಜು, ಸರ್ಕಾರಿ ಕಚೇರಿ, ನ್ಯಾಯಬೆಲೆ ಅಂಗಡಿ, ಸಂಘ-ಸಂಸ್ಥೆಗಳು, ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು. ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ಬಾವುಟಕ್ಕೆ ಅಗೌರವ ತೋರಬಾರದು. ಕಡ್ಡಾಯವಾಗಿ ಧ್ವಜ ಸಂಹಿತೆಯನ್ನು ಪಾಲಿಸಬೇಕು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ಸ್ಮರಿಸಬೇಕು. ಧ್ಜಜ ಸಂಹಿತೆಯಂತೆ ಪ್ರತಿದಿನ ಸಂಜೆ ಸೂರ್ಯಾಸ್ತದ ಮೊದಲು ಧ್ವಜವನ್ನು ಇಳಿಸಬೇಕು. ಈ ಮೂಲಕ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಬೈಕ್ ರ್ಯಾಲಿ ಹಾಗೂ ದೇಶಭಕ್ತಿ ಗೀತೆಗಳ ಗಾಯನ:
ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಸ್ಥಳೀಯ ಸಂಸ್ಥೆಗಳು, ನಗರಸಭೆ, ಕ್ರೀಡಾ ಇಲಾಖೆ ಹಾಗೂ ಶಿಕ್ಷಣ ಇಲಾಖೆಗಳು ಸಹಯೋಗದೊಂದಿಗೆ ಆಗಸ್ಟ್ 13 ರಂದು ಬೈಕ್ ರ್ಯಾಲಿ ಆಯೋಜಿಸಬೇಕು. ಆಗಸ್ಟ್ 14 ರಂದು ಬೆಳಿಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಿರಂಗಾ ಯಾತ್ರೆ ಕೈಗೊಳ್ಳಬೇಕು. ಶಾಲಾ ಕಾಲೇಜುಗಳಲ್ಲಿ ಸ್ವಾತಂತ್ರ್ಯ ಹೋರಾಟದ ಮಹತ್ವ ಸಾರಲು ಚಿತ್ರಕಲೆ, ದೇಶ ಭಕ್ತಿ ಗೀತೆ, ಆಶುಭಾಷಣ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಬೇಕು. ಆಗಸ್ಟ್ 14 ರಂದು ಸಂಜೆ 5:30ಕ್ಕೆ ನಗರದ ಒನಕೆ ಓಬವ್ವ ವೃತ್ತದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರ ಸಭೆ ವತಿಯಿಂದ ದೇಶಭಕ್ತಿ ಗೀತೆಗಳ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ಕಚೇರಿಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ತಪ್ಪದೇ ಪಾಲ್ಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ನಿರ್ದೇಶನ ನೀಡಿದರು.
ನಗರದ ತ.ರಾ.ಸು. ರಂಗಮಂದಿರ ಆವರಣದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯಲ್ಲಿ 5000 ರಾಷ್ಟ್ರಧ್ವಜಗಳು ಲಭ್ಯವಿದ್ದು, ಪ್ರತಿ ರಾಷ್ಟ್ರಧ್ವಜಕ್ಕೆ ರೂ.26 ದರ ನಿಗದಿಪಡಿಸಲಾಗಿದೆ. ಧ್ವಜ ಬೇಕಾದವರು ಖರೀದಿಸಬಹುದು. ಎಲ್ಲರಿಗೂ ಸುಲಭವಾಗಿ ಲಭ್ಯವಾಗುವ ರೀತಿಯ ಪ್ರತಿ ಅಂಚೆ ಕಚೇರಿ ಹಾಗೂ ರೈಲ್ವೇ ನಿಲ್ದಾಣಗಳಲ್ಲಿಯೂ ರಾಷ್ಟ್ರಧ್ವಜ ಮಾರಾಟ ಮಾಡಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಮಾಹಿತಿ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಜಿ.ಪಂ. ಉಪಕಾರ್ಯದರ್ಶಿ ತಿಮ್ಮಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಸುಬ್ರಾನಾಯ್ಕ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.