ಬೆಂಗಳೂರು.ಜುಲೈ.08: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ತೀವ್ರಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಿಶೇಷವಾಗಿ ಮಲೆನಾಡು, ಕರಾವಳಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ವರುಣನ ರೌದ್ರನರ್ತನ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 8ರ ಬುಧವಾರದಂದು ರಾಜ್ಯದ 5 ಪ್ರಮುಖ ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ನದಿಗಳಲ್ಲಿ ನೀರಿನ ಒಳಹರಿವು ಅಪಾಯದ ಮಟ್ಟ ತಲುಪುತ್ತಿರುವುದರಿಂದ ಮುನ್ನೆಚ್ಚರಿಕೆಯಾಗಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಎಲ್ಲಾ ತಾಲೂಕುಗಳ ವಿದ್ಯಾಸಂಸ್ಥೆಗಳಿಗೆ ಸಂಪೂರ್ಣ ರಜೆ ನೀಡಲಾಗಿದ್ದರೆ, ಶಿವಮೊಗ್ಗ ಜಿಲ್ಲೆಯ ಸೊರಬ, ಸಾಗರ, ಹೊಸನಗರ ಹಾಗೂ ತೀರ್ಥಹಳ್ಳಿಯಲ್ಲಿ ರಜೆ ಘೋಷಿಸಲಾಗಿದೆ.
ಅದೇ ರೀತಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಎನ್.ಆರ್. ಪುರ, ಮೂಡಿಗೆರೆ ಮತ್ತು ಬೆಳಗಾವಿ ಜಿಲ್ಲೆಯ ಬೆಳಗಾವಿ, ಖಾನಾಪುರ, ನಿಪ್ಪಾಣಿ ತಾಲೂಕುಗಳ ಶಾಲೆಗಳಿಗೆ ರಜೆ ಕಲ್ಪಿಸಲಾಗಿದೆ.
ಹವಾಮಾನ ಇಲಾಖೆಯು ಕರಾವಳಿ ಮತ್ತು ಮಲೆನಾಡಿನ ಭಾಗಗಳಿಗೆ ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಿರುವುದರಿಂದ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ.









