ಬೆಂಗಳೂರು.ಜುಲೈ.06: ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಮುಂದಿನ ಐದು ದಿನಗಳ ಕಾಲ ಅಂದರೆ ಜುಲೈ 10ರವರೆಗೆ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಭಾರಿ ಮಳೆಯಾಗಲಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಜುಲೈ 6 ರಿಂದ 8 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಪರಿಸ್ಥಿತಿಯ ತೀವ್ರತೆಗೆ ಅನುಗುಣವಾಗಿ ಆಯಾ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ ಸೇರಿದಂತೆ ಉತ್ತರ ಒಳನಾಡಿನ ಹಲವು ಭಾಗಗಳಲ್ಲೂ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.ಅರಬ್ಬಿ ಸಮುದ್ರದಲ್ಲಿ ವಾತಾವರಣ ಪ್ರಕ್ಷುಬ್ಧಗೊಂಡಿದ್ದು, ತೀವ್ರ ಗಾಳಿ ಬೀಸುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

















