ಬೆಂಗಳೂರು.ಆಗಸ್ಟ್ 7: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ನೀಡಿದ್ದ ಮಳೆರಾಯ ಮತ್ತೆ ಅಬ್ಬರಿಸಲು ಸಜ್ಜಾಗಿದ್ದಾನೆ.ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಕರಾವಳಿ ಹಾಗೂ ಮಲೆನಾಡಿನ ವ್ಯಾಪ್ತಿಯಲ್ಲಿ ವರುಣನ ಅಬ್ಬರ ಹೆಚ್ಚಾಗಲಿದ್ದು, ಈ ಭಾಗದ ಪ್ರಮುಖ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯಾಗಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂಬರುವ ದಿನಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 30ರಿಂದ 40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ವ್ಯಾಪ್ತಿಯಲ್ಲಿ ಗಂಟೆಗೆ 40ರಿಂದ 50 ಕಿಮೀ ವೇಗದ ಬಿರುಗಾಳಿಯೊಂದಿಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಈ ಮಳೆಯ ವಾತಾವರಣವು ಆಗಸ್ಟ್ 8ರಂದೂ ಸಹ ಮುಂದುವರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಧಾರವಾಡ, ಹಾವೇರಿ ಮತ್ತು ಯಾದಗಿರಿ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇನ್ನು ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.











