ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ತೀವ್ರಗೊಂಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ವರುಣನ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಅತ್ಯಂತ ಜಾಗರೂಕರಾಗಿರಲು ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ತೀವ್ರ ಮಳೆಯ ಮುನ್ನೆಚ್ಚರಿಕೆಯಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಈ ಆದೇಶವನ್ನು ಉಲ್ಲಂಘಿಸಿ ತರಗತಿ ನಡೆಸುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಖಡಕ್ ಎಚ್ಚರಿಕೆ ನೀಡಿದೆ.
ಕರಾವಳಿ ಮಾತ್ರವಲ್ಲದೆ ಮಲೆನಾಡಿನ ಘಟ್ಟ ಪ್ರದೇಶಗಳಲ್ಲೂ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಈ ಭಾಗಕ್ಕೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಘಟ್ಟ ರಸ್ತೆಗಳಲ್ಲಿ ಸಂಚರಿಸುವ ವಾಹನ ಸವಾರರು ಅತ್ಯಂತ ಜಾಗರೂಕರಾಗಿರಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.
ಇನ್ನು ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ದಿನವಿಡೀ ತಂಪಾದ ಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.





















