ಬೆಂಗಳೂರು : ಕರ್ನಾಟಕದ ಹಲವು ಭಾಗಗಳಲ್ಲಿ ಇಂದಿನಿಂದ ಒಂದು ವಾರ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಕೊಡಗು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು,
ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಹುತೇಕ ಒಣ ಹವೆ ಮುಂದುವರಿಯಲಿದೆ. ಸೋಮವಾರ ಮತ್ತು ಮಂಗಳವಾರದಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಜೊತೆಗೆ ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು ಮತ್ತು ತುಮಕೂರಿನಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಂಭವವಿದೆ.
ಬುಧವಾರ ಮತ್ತು ಗುರುವಾರದ ವೇಳೆಗೆ ಮಳೆಯ ತೀವ್ರತೆ ಕೊಂಚ ತಗ್ಗಲಿದ್ದು, ಚಾಮರಾಜನಗರ ಹಾಗೂ ಕರಾವಳಿಯ ಕೆಲವೆಡೆ ಮಳೆಯಾಗಬಹುದು. ಬೆಂಗಳೂರು, ಮೈಸೂರು, ಹಾಸನ, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, ಬೆಳಗಾವಿ, ಧಾರವಾಡ, ಗದಗ ಕಡೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.
ವಾರಾಂತ್ಯದ ದಿನಗಳಾದ ಶುಕ್ರವಾರ ಮತ್ತು ಶನಿವಾರ ಮಲೆನಾಡು ಭಾಗದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಮತ್ತು ಕರಾವಳಿಯಲ್ಲಿ ಮಳೆ ಮತ್ತೆ ಚುರುಕಾಗುವ ಮುನ್ಸೂಚನೆ ಇದೆ. ಅದೇ ರೀತಿ ಬೆಂಗಳೂರು, ಕೋಲಾರ, ಮಂಡ್ಯ, ತುಮಕೂರು ಭಾಗಗಳಲ್ಲೂ ಸಾಧಾರಣ ಮಳೆಯಾಗಲಿದೆ.











