ಬೆಂಗಳೂರು : ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದಲ್ಲಿ ಮಳೆಯ ಅಬ್ಬರ ಪುನಃ ಚುರುಕುಗೊಳ್ಳಲಿದೆ. ನೈಋತ್ಯ ಮುಂಗಾರು ದುರ್ಬಲಗೊಳ್ಳುತ್ತಿದ್ದರೂ, ಈ ಹವಾಮಾನ ವೈಪರೀತ್ಯದಿಂದಾಗಿ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಅಕ್ಟೋಬರ್ 9ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ.
ಅಕ್ಟೋಬರ್ 10ರವರೆಗೆ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಗುಡುಗು-ಮಿಂಚಿನ ಅಬ್ಬರ ಇರಲಿದ್ದು, ತುಮಕೂರು, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗಲಿದೆ. ಆದರೆ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದರೆ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ. ಬೆಳಗಾವಿ, ಧಾರವಾಡ, ವಿಜಯಪುರ, ಕಲಬುರಗಿ, ಬಾಗಲಕೋಟೆ, ರಾಯಚೂರು ಸೇರಿದಂತೆ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಿಲ್ಲದೆ ಸಂಪೂರ್ಣ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.










