ಸುದ್ದಿಒನ್, ಬೆಂಗಳೂರು, ಅಕ್ಟೋಬರ್. 05 : ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹವಾಮಾನದಲ್ಲಿ ದಿಢೀರ್ ಬದಲಾವಣೆಯಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಮಳೆಯಾಗುತ್ತಿದೆ.
ರಾಜ್ಯದ ಹಲವು ಕಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಕ್ಟೋಬರ್ 5ರ ಮುಂಜಾನೆ ಈ ಮುನ್ಸೂಚನೆ ಹೊರಬಿದ್ದಿದ್ದು, ಹಲವೆಡೆ ಗುಡುಗು ಮತ್ತು ಮಿಂಚಿನ ಅಬ್ಬರ ಕಂಡುಬರಲಿದೆ.
ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಜೊತೆಗೆ ಮಲೆನಾಡು ವ್ಯಾಪ್ತಿಯ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಸಾಧಾರಣದಿಂದ ಕೂಡಿದ ಮಳೆಯಾಗಲಿದೆ. ಮಳೆಯೊಂದಿಗೆ ಗುಡುಗು-ಮಿಂಚಿನ ಅಬ್ಬರವೂ ಇರಲಿದ್ದು, ಜನತೆ ಜಾಗರೂಕರಾಗಿರಲು ಸೂಚಿಸಲಾಗಿದೆ.
ಕೇವಲ ಮಲೆನಾಡು ಮಾತ್ರವಲ್ಲದೆ, ದಕ್ಷಿಣ ಒಳನಾಡಿನ ಚಿತ್ರದುರ್ಗ, ತುಮಕೂರು, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಪ್ರತ್ಯೇಕ ಭಾಗಗಳಲ್ಲೂ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಭಾಗಗಳಲ್ಲಿ ಮುಂದಿನ ಕೆಲ ಗಂಟೆಗಳ ಕಾಲ ಮೋಡಕವಿದ ವಾತಾವರಣ ಮುಂದುವರಿಯಲಿದೆ. ಮಳೆಯ ಸಂದರ್ಭದಲ್ಲಿ ಗಂಟೆಗೆ ಸುಮಾರು 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ರೈತರು ಮರಗಳ ಕೆಳಗೆ ನಿಲ್ಲದೆ, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳು ಮತ್ತು ವಿದ್ಯುತ್ ಕಂಬಗಳಿಂದ ದೂರವಿದ್ದು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಎಚ್ಚರಿಕೆ ವಹಿಸಲು ಕೋರಲಾಗಿದೆ.











