ಚಿತ್ರದುರ್ಗ. ಮಾರ್ಚ್ 27: ರಾಜ್ಯ ಮಾನವ ಹಕ್ಕುಗಳ ಈ ಹಿಂದಿನ ಅಧ್ಯಕ್ಷರು ಹಾಗೂ ಸದಸ್ಯರ ಅವಧಿ ಫೆಬ್ರವರಿ 2023 ಅಂತ್ಯವಾಗಿತ್ತು. ವಿಧಾನ ಸಭೆ ಸಾರ್ವತ್ರಿಕ ಚುನಾವಣೆ ಬಳಿಕ ಅಸ್ತಿತ್ವಕ್ಕೆ ಬಂದ ಹೊಸ ಸರ್ಕಾರ 2023 ನವೆಂಬರ್ ಮಾಹೆಯಲ್ಲಿ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿದ್ದು, ಅಂದಿನಿಂದ ಆಯೋಗವು ದೈನಂದಿನ ಕಾರ್ಯಗಳನ್ನು ನಿರ್ವಹಿಸುತ್ತಿದೆ. ಆಯೋಗದಲ್ಲಿ ಬಾಕಿ ಉಳಿದಿದ್ದ ಹಾಗೂ ಹೊಸದಾಗಿ ಸಲ್ಲಿಕೆಯಾದ ಪ್ರಕರಣಗಳೂ ಸೇರಿದಂತೆ ಇದುವರೆಗೂ 12,000ಕ್ಕೂ ಅಧಿಕ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಇನ್ನೂ 2900ಕ್ಕೂ ಹೆಚ್ಚು ಪ್ರಕರಣಗಳ ಇತ್ಯರ್ಥ ಬಾಕಿಯಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಅವರು ಹೇಳಿದರು.
ಗುರುವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.

ನಿವೃತ್ತ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಅವರನ್ನು ರಾಜ್ಯ ಸರ್ಕಾಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರನ್ನಾಗಿ ನೇಮಿಸಿತ್ತು. ಕೇಂದ್ರ ಸರ್ಕಾರ ಹೊಸದಾಗಿ ರಚಿಸಿದ ಲೋಕಪಾಲ್ ಸಂಸ್ಥೆಗೆ ಇವರನ್ನು ಸದಸ್ಯರನ್ನಾಗಿ ನೇಮಿಸಿದ ಕಾರಣ, ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಹುದ್ದೆಯ ಹಂಗಾಮಿ ಅಧ್ಯಕ್ಷನಾಗಿ ನಾನು ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಆಯೋಗದಲ್ಲಿ ದಾಖಲಾದ ಪ್ರಕರಣಗಳ ವಿಚಾರಣೆಗೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಬೆಂಗಳೂರಿಗೆ ಅಲೆಯುವುದನ್ನು ತಪ್ಪಿಸಲು ಆಯೋಗವೇ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದು, ಈಗಾಗಲೆ 18 ಜಿಲ್ಲೆಗಳಿಗೆ ಭೇಟಿ ನೀಡಲಾಗಿದೆ. ಜಿಲ್ಲಾ ಹಂತದಲ್ಲಿಯೇ ಪ್ರಕರಣಗಳ ವಿಚಾರಣೆ ಹಾಗೂ ವಿಲೇವಾರಿ ಕಾರ್ಯ ಮಾಡಲಾಗುತ್ತಿದೆ. ಆಯೋಗಕ್ಕೆ ಹೆಚ್ಚಿನ ಸೌಕರ್ಯ ನೀಡುವಲ್ಲಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.
ಆಯೋಗಕ್ಕೆ ಸಾರ್ವಜನಿಕರು ಸ್ವತಃ ಆಗಮಿಸಿ ದೂರುಗಳನ್ನು ಸಲ್ಲಿಸಬಹುದು. ಇಲ್ಲವಾದರೆ ಆನ್‍ಲೈನ್ ಅಥವಾ ರಿಜಿಸ್ಟರ್ ಅಂಚೆ ಮೂಲಕವೂ ದೂರು ಸಲ್ಲಿಸಬಹುದಾಗಿದೆ. ಇಂದು ಚಿತ್ರದುರ್ಗ ನಗರದ ಜಿಲ್ಲಾಸ್ಪತ್ರೆ, ವಿದ್ಯಾರ್ಥಿ ನಿಲಯ, ಬಸ್ ಸ್ಟಾಂಡ್ ಹಾಗೂ ಕಾರಗೃಹ ಸೇರಿದಂತೆ 8 ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಸಣ್ಣಪುಟ್ಟ ಲೋಪದೋಷಗಳನ್ನು ಕಂಡು ಬಂದಿದ್ದು ಇವುಗಳನ್ನು ಸರಿಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಹೇಳಿದರು.
ಜಿಲ್ಲೆಯಲ್ಲಿ 13 ಪ್ರಕರಣ ಇತ್ಯರ್ಥ ಬಾಕಿ:
ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗಕ್ಕೆ ಒಟ್ಟು 13 ಪ್ರಕರಣಗಳು ಸಲ್ಲಿಕೆಯಾಗಿವೆ. ಇವುಗಳಲ್ಲಿ 4 ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿಗಳನ್ನು ಅಧಿಕಾರಿಗಳಿಂದ ಪಡೆದುಕೊಳ್ಳಲಾಗಿದೆ. ಶೀಘ್ರವೇ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗುವುದು. ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚು ಸಿಜೇರಿಯನ್ ಹೆರಿಗೆಗಳು ಸಂಭವಿಸುತ್ತಿರುವ ಕುರಿತು ವರದಿ ಪಡೆದುಕೊಳ್ಳುವುದಾಗಿ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಹೇಳಿದರು.
ಆಯೋಗದ ನ್ಯಾಯಾಂಗದ ಸದಸ್ಯರಾದ ಎಸ್.ಕೆ.ವಂಟಿಗೋಡಿ ಅವರು ಮಾತನಾಡಿ ಆಯೋಗದಿಂದ ಮಾನವ ಹಕ್ಕುಗಳ ಉಲ್ಲಂಘನೆ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗುತ್ತಿದೆ. ನವೆಂಬರ್ 2023 ರಿಂದ ಈಚೆಗೆ ಆಯೋಗದಿಂದ ಇತ್ಯರ್ಥ ಪಡಿಸಿದ ಪ್ರಕರಣಗಳಲ್ಲಿ ಒಟ್ಟು ರೂ.2.40 ಕೋಟಿ ಪರಿಹಾರ ಧನವನ್ನು ಸರ್ಕಾರದಿಂದ ಬಾಧಿತರಿಗೆ ಕೊಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಆಯೋಗದ ಆಪ್ತ ಕಾರ್ಯದರ್ಶಿ ಅರುಣ್ ಪೂಜಾರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











