ಸುದ್ದಿಒನ್, ಹಿರಿಯೂರು, ಅಕ್ಟೋಬರ್. 06 : ತಾಲೂಕಿನ ಕೆ ಆರ್ ಹಳ್ಳಿ ಗೇಟ್ ಬಳಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಮಾರ್ಗ ಮಧ್ಯೆ ಅಸುನೀಗಿದ ಘಟನೆ ಮಂಗಳವಾರ ಸಂಜೆ ನಡೆದಿದೆ.
ಮೃತರನ್ನು ಕುಷ್ಟಗಿ ತಾಲೂಕಿನ ನೀಡಕೇಶಿ ಮೂಲದ ಶಶಿಧರ್ (22) ಮಂಜುನಾಥ್ (22), ಬಸವರಾಜ (21) ಎಂದು ಗುರುತಿಸಲಾಗಿದೆ. ಇಬ್ಬರು ಗಾಯಗೊಂಡಿದ್ದು, ಹಿರಿಯೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರು ಕಡೆಯಿಂದ ಕುಷ್ಟಗಿ ಕಡೆ ಐದು ಮಂದಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಮುಂದೆ ಚಲಿಸುತ್ತಿದ್ದ ಕಂಟೇನೈರ್ ಲಾರಿಯ ಚಾಲಕ ಯಾವುದೇ ಮುನ್ಸೂಚನೆ ನೀಡದೆ ಎಡಕ್ಕೆ ತಿರುಗಿಸುತ್ತಿದ್ದಾಗ ಹಿಂದಿನಿಂದ ಕಾರು ಡಿಕ್ಕಿಯಾಗಿ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.
ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.










