ಕಾಜಿರಂಗ : ಅಸ್ಸಾಂನ ಕಾಜಿರಂಗ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕನಿಷ್ಠ 23 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ. ಕಾಜಿರಂಗದ ರೊಂಗಾಜನ್ ಪ್ರದೇಶದಲ್ಲಿ ಪ್ರಯಾಣಿಕರಿಂದ ತುಂಬಿದ್ದ ಟ್ರಾವೆಲರ್ ವಾಹನ ಹಾಗೂ ಕಂಟೇನರ್ ಟ್ರಕ್ ನಡುವೆ ಈ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಅಪಘಾತದ ತೀವ್ರತೆ ಎಷ್ಟಿತ್ತೆಂದರೆ, ಡಿಕ್ಕಿಯ ರಭಸಕ್ಕೆ ಟ್ರಾವೆಲರ್ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಘಟನಾ ಸ್ಥಳದಲ್ಲಿ ಪ್ರಯಾಣಿಕರ ಆಕ್ರಂದನ ಮುಗಿಲುಮುಟ್ಟಿತ್ತು. ಪ್ರಾಥಮಿಕ ವರದಿಗಳ ಪ್ರಕಾರ, ಈ ಘೋರ ದುರಂತದಲ್ಲಿ 23 ಜನರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ ಹಲವರು ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ನಡೆದ ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗುತ್ತಿದೆ. ಇದುವರೆಗೆ ಮೃತರ ಗುರುತು ಪತ್ತೆಯಾಗಿಲ್ಲ. ಅಪಘಾತಕ್ಕೆ ನಿಖರ ಕಾರಣವೇನು ಎಂಬ ಕುರಿತು ಪೊಲೀಸ್ ತನಿಖೆ ನಡೆಯುತ್ತಿದ್ದು, ಪೊಲೀಸರು ಹಾಗೂ ಅಧಿಕಾರಿಗಳಿಂದ ಇನ್ನಷ್ಟೇ ಹೆಚ್ಚಿನ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.











