Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

‘ಮುಂದಿನ ಚುನಾವಣೆಯಲ್ಲಿ ಮಧು ಬಂಗಾರಪ್ಪ ವಿರುದ್ಧ ನಾನೇ ಸ್ಪರ್ಧೆ’: ಪ್ರಣವಾನಂದ ಸ್ವಾಮೀಜಿ ಘೋಷಣೆ

---Advertisement---

ಸಚಿವ ಮಧು ಬಂಗಾರಪ್ಪ ವಿರುದ್ಧ ಪ್ರಣವಾನಂದ ಸ್ವಾಮೀಜಿ ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಿಂದ ತಮ್ಮ ಹೆಸರನ್ನು ತೆಗೆದುಹಾಕಲಾಗಿದೆ ಎಂದು ಆರೋಪಿಸಿರುವ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸೊರಬ ಕ್ಷೇತ್ರದಿಂದ ಮಧು ಬಂಗಾರಪ್ಪ ವಿರುದ್ಧ ತಾವೇ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಪ್ರಣವಾನಂದ ಸ್ವಾಮೀಜಿ, ಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿರುವ ಸರ್ಕಾರಿ ಕಾರ್ಯಕ್ರಮದ ಮೊದಲ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಇತ್ತು. ಆದರೆ ಬಳಿಕ ತಮ್ಮ ಹೆಸರನ್ನು ತೆಗೆದುಹಾಕಲಾಗಿದೆ ಎಂದು ಆರೋಪಿಸಿದರು.

ತಮ್ಮ ಹೆಸರನ್ನು ಆಹ್ವಾನ ಪತ್ರಿಕೆಯಿಂದ ತೆಗೆಸಲು ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಮೇಲೆ ಒತ್ತಡ ಹೇರಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ ಕಾಂಗ್ರೆಸ್ ಹೈಕಮಾಂಡ್‌ಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಸ್ವಾಮೀಜಿ ದೂರಿದರು.“ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬ ವಿಚಾರದಲ್ಲಿ ನಾವು 32 ಸ್ವಾಮೀಜಿಗಳು ಸಿದ್ದರಾಮಯ್ಯ ಅವರ ವಿರುದ್ಧ ನಿಂತು ಹೋರಾಟ ಮಾಡಿದ್ದೇವೆ. ಮಧು ಬಂಗಾರಪ್ಪ ನಿಮ್ಮ ಸಚಿವ ಸಂಪುಟದಲ್ಲಿದ್ದರೆ ನಿಮಗೆ ಕೆಟ್ಟ ಹೆಸರು ಬರುತ್ತದೆ. ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು” ಎಂದು ಅವರು ಒತ್ತಾಯಿಸಿದರು.

ಆಹ್ವಾನ ಪತ್ರಿಕೆಯಿಂದ ತಮ್ಮ ಹೆಸರನ್ನು ತೆಗೆದುಹಾಕಬಹುದು. ಆದರೆ ಈಡಿಗ ಸಮುದಾಯದ ಜನರ ಹೃದಯದಿಂದ ತಮ್ಮನ್ನು ತೆಗೆದುಹಾಕಲು ಸಾಧ್ಯವಿಲ್ಲ ಎಂದು ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ. “ಅಧಿಕಾರದ ಅಮಲಿನಿಂದ ಮಧು ಬಂಗಾರಪ್ಪ ಈ ರೀತಿ ವರ್ತಿಸುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅವರು ಗೆಲ್ಲುವುದಿಲ್ಲ. ಸೊರಬ ಕ್ಷೇತ್ರದಿಂದ ಅವರ ವಿರುದ್ಧ ನಾನೇ ಸ್ಪರ್ಧಿಸುತ್ತೇನೆ” ಎಂದು ಘೋಷಿಸಿದರು.ಇದೇ ವೇಳೆ, ಮಧು ಬಂಗಾರಪ್ಪ ಮತ್ತೊಮ್ಮೆ ವಿಧಾನಸೌಧ ಪ್ರವೇಶಿಸುವುದಿಲ್ಲ ಎಂದು ಸವಾಲು ಹಾಕಿದ ಸ್ವಾಮೀಜಿ, ಮುಂದಿನ ಚುನಾವಣೆಯಲ್ಲಿ ಅವರು ಗೆಲ್ಲುವುದಿಲ್ಲ ಎಂದರು. ಮಾಜಿ ಸಚಿವ ಬಂಗಾರಪ್ಪ ಅವರು ಬಂಗಾರದಂತಿದ್ದರು. ಆದರೆ ಮಧು ಬಂಗಾರಪ್ಪ ಅವರಲ್ಲಿ ವಿಷದ ಗುಣವಿದೆ ಎಂದು ಕಟುವಾಗಿ ಟೀಕಿಸಿದರು.

ನಾರಾಯಣ ಗುರು ಜಯಂತಿ ದಿನ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುವುದಾಗಿ ಪ್ರಣವಾನಂದ ಸ್ವಾಮೀಜಿ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ದೆಹಲಿಯ ಜಂತರ್ ಮಂಥರ್‌ನಲ್ಲೂ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.ಇದೇ ವೇಳೆ, ಮಧು ಬಂಗಾರಪ್ಪ ಅವರ ಅನುಯಾಯಿಗಳು ತಮಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸ್ವಾಮೀಜಿ ಆರೋಪಿಸಿದ್ದಾರೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಮಧು ಬಂಗಾರಪ್ಪ ಅವರಿಂದ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now