ಹೊಸದುರ್ಗದಲ್ಲಿ “ ನಮ್ಮ ಕ್ಲಿನಿಕ್” ಉದ್ಘಾಟನೆ, 12 ಉಚಿತ ಆರೋಗ್ಯ ಸೇವೆ ಲಭ್ಯ : ಡಾ.ಆರ್.ರಂಗನಾಥ್

2 Min Read

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, (ಡಿ.14): ಹೊಸದುರ್ಗ ಪಟ್ಟಣದ ಕೊಬ್ಬರಿಪೇಟೆ ಕನಕ ಮಠದ ಹತ್ತಿರ ಬುಧವಾರ “ನಮ್ಮ ಕ್ಲಿನಿಕ್” ಅನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಇದು  ಪ್ರಾಥಮಿಕ ಆರೋಗ್ಯ ಸೇವೆ ಒದಗಿಸುವ ಹೊಸ ಯೋಜನೆಯಾಗಿದೆ. ನಗರದ ಕೊಳಗೇರಿ ನಿವಾಸಿಗಳು, ದಿನಗೂಲಿ ಕಾರ್ಮಿಕರು ಮತ್ತು ಸಮಾಜದಲ್ಲಿರುವ ಇತರ ದುರ್ಬಲ ವರ್ಗಗಳಿಗೆ ಸುಲಭವಾಗಿ ವೈದ್ಯಕೀಯ ಸೇವೆ ದೊರಕಿಸಬೇಕು ಎನ್ನುವ ದೃಷ್ಟಿಯಿಂದ. ಸರ್ಕಾರ  ನಮ್ಮ ಕ್ಲಿನಿಕ್‍ಗಳು ಎಂದು ಹೊಸ ಯೋಜನೆ ಪ್ರಾರಂಭಿಸಿ, 12 ಉಚಿತ ಆರೋಗ್ಯ ಸೇವೆಯನ್ನು ಸಾರ್ವಜನಿಕರಿಗೆ ಸಿಗುವಂತೆ ಮಾಡುತ್ತಿದೆ ಎಂದು ಹೇಳಿದರು.

ನಮ್ಮ ಕ್ಲಿನಿಕ್‍ಗಳಲ್ಲಿ 12 ರೀತಿಯ ವೈದ್ಯಕೀಯ ಸೇವೆಗಳು ಲಭ್ಯವಿದೆ. ಪ್ರತಿ ನಮ್ಮ ಕ್ಲಿನಿಕ್‍ನಲ್ಲಿಯೂ ವೈದ್ಯಕೀಯ ಅಧಿಕಾರಿ, ನರ್ಸ್, ಲ್ಯಾಬ್ ಟೆಕ್ನೀಷಿಯನ್ ಮತ್ತು ಗ್ರೂಪ್ ಡಿ ನೌಕರ ಇರುತ್ತಾರೆ. ಇಲ್ಲಿ ಲಭ್ಯವಿರುವ 12 ಸೇವೆಗಳಲ್ಲಿ ಗರ್ಭಿಣಿಯರ ತಪಾಸಣೆ ಮತ್ತು ಆರೈಕೆ, ನವಜಾತ ಶಿಶುಗಳ ಆರೈಕೆ, ಶಿಶುಗಳಿಗೆ ಚಿಕಿತ್ಸೆ, ಮಕ್ಕಳು ಮತ್ತು ಹದಿಹರೆಯದವರ ಆರೋಗ್ಯ ಕಾಳಜಿ, ಲಸಿಕೆ ಸೇವೆ, ಕುಟುಂಬ ನಿಯಂತ್ರಣ, ಸೋಂಕು ರೋಗಗಳ ನಿರ್ವಹಣೆ, ಸಕ್ಕರೆ ಕಾಯಿಲೆ, ರಕ್ತದೊತ್ತಡ ನಿರ್ವಹಣೆ, ಸಣ್ಣಪುಟ್ಟ ಗಾಯಗಳಿಗೆ ಆರೈಕೆ, ಮರುಕಳಿಸುವ ಕಾಯಿಲೆಗಳು ಸೇರಿವೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಸಮಸ್ಯೆಗಳಿಗೆ ಸಂಬಂಧಿಸಿದ ಆಸ್ಪತ್ರೆಗಳಿಗೆ ರೆಫರಲ್ ಸೇವೆಗಳನ್ನೂ ಉಚಿತವಾಗಿ ಒದಗಿಸಲಾಗುವುದು ಎಂದರು.
ವಯೋವೃದ್ಧರ ಆರೈಕೆ, ತುರ್ತು ವೈದ್ಯಕೀಯ ಸೇವೆಗಳು, ಅರೋಗ್ಯ ತಪಾಸಣೆ ಮತ್ತು ಔಷಧಿಗಳನ್ನು ಸಂಪೂರ್ಣ ಉಚಿತವಾಗಿ ಒದಗಿಸಲಾಗುವುದು.

14 ಬಗೆಯ ಲ್ಯಾಬ್ ಟೆಸ್ಟ್‍ಗಳು, ಟೆಲಿ ಕನ್ಸಲ್‍ಟೇಶನ್ ಸೌಲಭ್ಯ, ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಲು ಸಲಹೆಗಳು ಉಚಿತವಾಗಿ ದೊರೆಯುತ್ತವೆ. ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 9 ರಿಂದ ಸಂಜೆ 4.30ರವರೆಗೆ ನಮ್ಮ ಕ್ಲಿನಿಕ್‍ಗಳು ಕಾರ್ಯನಿರ್ವಹಿಸುತ್ತವೆ. ಜನವಸತಿಗಳಿಗೆ ಹತ್ತಿರದಲ್ಲಿ ಕ್ಲಿನಿಕ್‍ಗಳನ್ನು ಆರಂಭಿಸುವುದರಿಂದ ಜನರಿಗೆ ಆರೋಗ್ಯ ಸೇವೆಗಳು ಸುಲಭವಾಗಿ ಸಿಗಲು ಸಾಧ್ಯವಾಗುತ್ತದೆ. ಅಷ್ಟೇ ಅಲ್ಲ, ಸರ್ಕಾರಿ ಆಸ್ಪತ್ರೆಗಳ ಮೇಲಿರುವ ಒತ್ತಡವೂ ಕಡಿಮೆಯಾಗುತ್ತದೆ. ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್.ಅಧಿಕಾರಿ ಡಾ.ರೇಣುಪ್ರಸಾದ್, ಹೊಸದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಘವೇಂದ್ರ ಪ್ರಸಾದ್, ಹೊಸದುರ್ಗ ಪುರಸಭಾ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಅಶ್ರಾಫ್ ಉಲ್ಲಾ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ್, ತಹಶೀಲ್ದಾರ್  ಮಲ್ಲಿಕಾರ್ಜುನ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ವಿರೇಂದ್ರ ಪಾಟೀಲ್ ಇತರರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *