ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

suddionenews
2 Min Read

ಚಿತ್ರದುರ್ಗ,(ಜುಲೈ.30) : ಕೋವಿಡ್-19ರ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಭಾರತ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲಾಗಿತ್ತು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ವರ್ಷದಲ್ಲಿ ಆಚರಿಸುತ್ತಿರುವ ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಹಾಗೂ ವಿಜೃಂಭಣಿಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಭಾರತ ಸ್ವಾತಂತ್ರೋತ್ಸವ-2022ರ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭಾರತ ಸ್ವಾತಂತ್ರ್ಯ ದಿನಾಚರಣೆಯು ದೇಶಪ್ರೇಮ, ದೇಶಭಕ್ತಿಯ ಪ್ರತೀಕವಾಗಿರುತ್ತದೆ. ಆಜಾದಿ ಕಾ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ಜಿಲ್ಲಾಮಟ್ಟದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಹಳೆಯ ಧ್ವಜಗಳ ಬದಲಿಗೆ ಹೊಸ ಧ್ವಜ ಖರೀದಿಸಿ ಧ್ವಜ ಸಂಹಿತೆ ಪ್ರಕಾರ ಧ್ವಜಾರೋಹಣ ನೆರವೇರಿಸಬೇಕು. ಎಲ್ಲ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಹಾಜರಿದ್ದು, ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಗಸ್ಟ್ 13 ರಿಂದ 15ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಸ್ಮರಣೆಯ ಈ ಅವಧಿಯಲ್ಲಿ ಹಗಲು-ರಾತ್ರಿ ಎನ್ನದೆ ಮೂರು ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರೆಯಬೇಕು. ಸಾರ್ವಜನಿಕರು ಅವರವರ ಮನೆಗಳ ಮೇಲೆ ಧ್ವಜ ಹಾರಿಸಿ, ರಾಷ್ಟ್ರಪ್ರೇಮ ಮೆರೆಯಬೇಕು ಎಂದು ಹೇಳಿದರು.

ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದ ಮುರುಘ ರಾಜೇಂದ್ರ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು. ಡಿಎಆರ್, ಸಿವಿಲ್, ಹೋಂಗಾರ್ಡ್, ಅರಣ್ಯ, ಅಗ್ನಿಶಾಮಕ, ಎನ್‍ಸಿಸಿ, ಎನ್‍ಸಿಸಿ ಹಾಗೂ ಶಿಕ್ಷಣ ಇಲಾಖೆ ಹಾಗೂ ವಸತಿ ಶಾಲೆಗಳ ವಿದ್ಯಾರ್ಥಿಗಳು ಮತ್ತು ಇತರೆ ತಂಡಗಳು ಪಥಸಂಚಲನ ಪಾಲ್ಗೊಳ್ಳಲಿವೆ ಎಂದರು.

75ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ವಿನೂತನ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತಿಳಿಸಲಾಯಿತು. ಸರ್ಕಾರಿ ಶಾಲೆ ಮತ್ತು ಖಾಸಗಿ ಶಾಲೆಯ ಮಕ್ಕಳಿಂದ ದೇಶಭಕ್ತಿಯನ್ನು ಬಿಂಬಿಸುವ ಉತ್ತಮ ಕಾರ್ಯಕ್ರಮಗಳ ವ್ಯವಸ್ಥೆ ಮಾಡಬೇಕು. ಮನೋರಂಜನಾ ಕಾರ್ಯಕ್ರಮದ ಜೊತೆಯಲ್ಲಿ ಸಮಾಜಮುಖಿ ಹಾಗೂ ನೀತಿ ಪಾಠಯನ್ನೂ ಒಳಗೊಂಡಿರಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸುವ ಬಗ್ಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು. ಸನ್ಮಾನಿತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ, ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶವಾಗದಂತೆ ವೇದಿಕೆಯ ಮೇಲೆ ಅನಾವಶ್ಯಕ ಹೆಚ್ಚಿನ ಜನಸಂದಣಿ ತಪ್ಪಿಸಲು ಮತ್ತು ಕಾರ್ಯಕ್ರಮ ವ್ಯವಸ್ಥಿತವಾಗಿ ನಡೆಸಸಲು ಉಪವಿಭಾಗಾಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಕಾರ್ಯಕ್ರಮಕ್ಕೆ ಉತ್ತಮ ಮಟ್ಟದ ಧ್ವನಿವರ್ಧಕಗಳು, ಮೈಕ್‍ಗಳ ಅಳವಡಿಕೆ, ಪೀಠೋಪಕರಣ, ಬಣ್ಣದ ದೀಪಾಲಂಕಾರ ವ್ಯವಸ್ಥೆ, ಸಮಾರಂಭಕ್ಕೆ ಆಗಮಿಸುವ ಜನಪ್ರತಿನಿಧಿಗಳು, ಗಣ್ಯರು, ನಾಗರೀಕರು, ಸ್ವಾತಂತ್ರ್ಯ ಹೋರಾಟಗಾರರು, ನಗರಸಭೆ ಸದಸ್ಯರು, ಪತ್ರಕರ್ತರು ಹಾಗೂ ಅಧಿಕಾರಿಗಳಿಗೆ ಸಾಕಷ್ಟು ಕುರ್ಚಿಗಳನ್ನು, ಉತ್ತಮ ಶಾಮಿಯಾನ ಏರ್ಪಾಡು ಮಾಡಿ ನಾಮಫಲಕ ಹಾಕಬೇಕು. ಸಂಜೆಯ ಕಾರ್ಯಕ್ರಮಕ್ಕೆ ನಗರದ ತರಾಸು ರಂಗಮಂದಿರವನ್ನು ವ್ಯವಸ್ಥಿತವಾಗಿ ಸಿದ್ಧಗೊಳಿಸಲು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಹಾಗೂ ನಗರಸಭೆ ಪೌರಾಯುಕ್ತರಿಗೆ ಸೂಚಿಸಿದರು. ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಆಗಸ್ಟ್ 14ರಂದೇ ದೀಪಾಲಂಕಾರದ ವ್ಯವಸ್ಥೆಯನ್ನು ತಪ್ಪದೇ ಮಾಡಿಕೊಳ್ಳಬೇಕೆಂದು ಎಲ್ಲಾ ಇಲಾಖಾ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ಫೋಟೋ ವಿವರ: ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿದರು.

Share This Article
Leave a Comment

Leave a Reply

Your email address will not be published. Required fields are marked *