ಸುದ್ದಿಒನ್, ಚಿತ್ರದುರ್ಗ, ನವೆಂಬರ್ 19: ನಗರದ ಪ್ರತಿಷ್ಠಿತ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ನಂದಿಕ ಎಸ್.ಎನ್. ಅವರು ಇಸ್ರೋ ಸಂಸ್ಥೆ ಆಯೋಜಿಸಿದ್ದ ಕಿಶೋರ ಕಮ್ಮಟ ವೈಜ್ಞಾನಿಕ ವಿಷಯ ಪ್ರಸ್ತುತಿ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸುವ ಮೂಲಕ ಜಿಲ್ಲೆಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ.
ಕಳೆದ ನವೆಂಬರ್ 14ರಂದು ಬೆಂಗಳೂರಿನಲ್ಲಿ ಇಸ್ರೋ ವತಿಯಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯ ಮೊದಲ ಸುತ್ತಿನಲ್ಲಿ ಒಟ್ಟು 150 ಶಾಲೆಗಳು ಭಾಗವಹಿಸಿದ್ದು, ಆ ಪೈಕಿ ಕೇವಲ 35 ಶಾಲೆಗಳು ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದವು. ಎರಡನೇ ಸುತ್ತಿನಲ್ಲಿ 35 ಶಾಲೆಗಳ ಪೈಕಿ 18 ಶಾಲೆಗಳು ಅಂತಿಮ ಸುತ್ತಿಗೆ ಅರ್ಹತೆ ಪಡೆದವು.
ಅಂತಿಮ ಸುತ್ತಿನಲ್ಲಿ ಆಯ್ಕೆಯಾದ 18 ಶಾಲೆಗಳ ವಿದ್ಯಾರ್ಥಿಗಳು ಗಣ್ಯ ಇಸ್ರೋ ವಿಜ್ಞಾನಿಗಳ ಸಮ್ಮುಖದಲ್ಲಿ ತಮ್ಮ ವೈಜ್ಞಾನಿಕ ಯೋಜನೆಗಳನ್ನು ಪ್ರಸ್ತುತಪಡಿಸಿದರು. ಇದರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ನಂದಿಕ ಎಸ್.ಎನ್. ತೃತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.
ವಿದ್ಯಾರ್ಥಿನಿಯ ಈ ಅಸಾಧಾರಣ ಸಾಧನೆಗೆ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ವಿದ್ಯಾ ಹಾಗೂ ಶ್ರೀಮತಿ ಚಿನ್ನಾಂಬೆ ಅವರು ಮಾರ್ಗದರ್ಶನ ನೀಡಿದ್ದರು.
ಪ್ರತಿಭೆ, ಆತ್ಮವಿಶ್ವಾಸ ಹಾಗೂ ಕಠಿಣ ಪರಿಶ್ರಮದಿಂದ ಶಾಲೆಗೆ ಹೆಮ್ಮೆ ತಂದಿರುವ ನಂದಿಕ ಎಸ್.ಎನ್. ಅವರಿಗೆ ಸಂಸ್ಥೆಯ ಕಾರ್ಯದರ್ಶಿ ಬಿ. ವಿಜಯ ಕುಮಾರ್, ವ್ಯವಸ್ಥಾಪಕ ನಿರ್ದೇಶಕ ಎಸ್.ಎಂ. ಪೃಥ್ವೀಶ, ಆಡಳಿತ ಮಂಡಳಿಯ ಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯ ಎನ್.ಜಿ. ತಿಪ್ಪೇಸ್ವಾಮಿ ಸೇರಿದಂತೆ ಶಾಲೆಯ ಎಲ್ಲಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿ, ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.











