ಬೆಂಗಳೂರು: ಎಲ್ಲೆಡೆ ಮಳೆಯಿಂದಾಗಿ ಬೆಳೆ ಹಾನಿಯಾಗಿದೆ. ರೈತ ಕಂಗಲಾಗಿದ್ದಾನೆ. ಅದೆಷ್ಟೋ ಜನ ಮನೆ ಕಳೆದುಕೊಂಡಿದ್ದಾರೆ. ಇಂಥ ಸಮಯದಲ್ಲಿ ಬಿಜೆಪಿ ಸರ್ಕಾರ ಜನ ಸ್ವರಾಜ್ ಅಂತ ನಾಟಕ ಪ್ರದರ್ಶನ ಯಾತ್ರೆ ಹೊರಟಿದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಟೂರಿಂಗ್ ಟಾಕೀಸ್ ಥರ ಜನಸ್ವರಾಜ್ ಯಾತ್ರೆ ಮಾಡಿಕೊಂಡು ಹೊರಟಿದೆ. ಇದು ಜನಸ್ವರಾಜ್ ಯಾತ್ರೆಯಲ್ಲ ಜನಬರ್ಬಾದ್ ಯಾತ್ರೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರೇ ಇದು ನಿಮ್ಮ ಹನಿಮೂನ್ ಕಾಲವಲ್ಲ. ನಿಮ್ಮ ಸಚಿವರ ನಾಟಕ ಪ್ರದರ್ಶನದ ಯಾತ್ರೆ ನಿಲ್ಲಿಸಿ, ನೆರೆಪೀಡಿತ ಪ್ರದೇಶಗಳಿಗೆ ಕಳುಹಿಸಿ ಎಂದಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಳೆ-ನೆರೆಗೆ ಸಿಕ್ಕಿ 20ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ, ಹತ್ತು ಸಾವಿರ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಾಶವಾಗಿದೆ, ಮನೆ ಬಿದ್ದು ಜನ ಬೀದಿಪಾಲಾಗಿದ್ದಾರೆ. ಇವರ ನೆರವಿಗೆ ಧಾವಿಸಬೇಕಾದ ರಾಜ್ಯ ಸರ್ಕಾರ ಜನಸ್ವರಾಜ್ ಎಂಬ ನಾಟಕ ಮಾಡುತ್ತಾ ತಿರುಗಾಡುತ್ತಿದೆ.
ಸಾವಿರಾರು ಎಕರೆ ಭೂಮಿಯಲ್ಲಿ ಭತ್ತ,ರಾಗಿ,ಜೋಳ, ತರಕಾರಿ,ಬಾಳೆ,ತೆಂಗು ಎಲ್ಲವೂ ನಾಶವಾಗಿದೆ. ರೈತರು ಕಣ್ಣೀರಿನಿಂದ ಕೈತೊಳೆದುಕೊಳ್ಳುತ್ತಿದ್ದಾನೆ. ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ. ಜನಬೀದಿಪಾಲಾಗಿದ್ದಾರೆ. ಇಲ್ಲೊಂದು ಸರ್ಕಾರ ಇದೆಯಾ..?
ಮೊದಲು ಅಧಿಕಾರಿಗಳ ತಂಡ ಕಟ್ಟಿಕೊಂಡು ಮಳೆಪೀಡಿತ ಪ್ರದೇಶಗಳಿಗೆ ಸಚಿವರು ಹೋಗಿ ಮಳೆ ನಷ್ಟದ ಅಂದಾಜು ನಡೆಸಿ ತಾತ್ಕಾಲಿಕ ಪರಿಹಾರ ನೀಡಲು ಸೂಚನೆ ನೀಡಿ. ಗಂಜಿಕೇಂದ್ರಗಳನ್ನು ತೆರೆಯಲು ಹೇಳಿ. ನಷ್ಟದ ಸಮೀಕ್ಷೆ ನಡೆಸಿ ಹೆಚ್ಚಿನ ಪರಿಹಾರ ನೀಡಲು ಕೇಂದ್ರಕ್ಕೆ ಮನವಿ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ.