ಬೆಂಗಳೂರು: ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಇಂದು ರಾಜ್ಯಾದ್ಯಂತ ಜನತಾ ದರ್ಶನ ನಡೆಯಲಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಏಕಕಾಲದಲ್ಲಿಯೇ ಜನತಾ ದರ್ಶನ ನಡೆಯುತ್ತಿದೆ. ಈ ಕಾರ್ಯಕ್ರಮದ ಹೊಣೆಗಾರಿಕೆಯನ್ನು ಜಿಲ್ಲಾಧಿಕಾರಿಗಳಯ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೇಲಿದೆ.
ಜಿಲ್ಲಾ ಉಸ್ತುವಾರಿಗಳ ಸಮ್ಮುಖದಲ್ಲಿಯೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳುವ ಕಾಳಜಿ ಈ ಜನತಾ ದರ್ಶನದ್ದಾಗಿದೆ. ಆಡಳಿತಕ್ಕೆ ಚುರುಕು ಮುಟ್ಟಿಸುವ ಕೆಲಸ ಇದರಿಂದಾಗಲಿದೆ.
ಅಧಿಕಾರಿಗಳ ಸಭೆಯಲ್ಲಿ ಸಿದ್ದರಾಮಯ್ಯ ಅವರು ಹತ್ತು ದಿನಗಳ ಹಿಂದೆ ಸೂಚನೆ ನೀಡಿದ್ದರು. ಜಾತಿ ಪ್ರಮಾಣ ಪತ್ರ, ಖಾತೆ ಬದಲಾವಣೆ, ಟ್ರಾನ್ಸ್ ಫಾರ್ಮರ್ ರಿಪೇರಿ, ವಿದ್ಯತ್ ಕಂಬ ನಿಲುಗಡೆ ಸೇರಿದಂತೆ ಸಣ್ಣಪುಟ್ಟ ಕೆಲಸಗಳಿಗೂ ಜನ ನನ್ನ ಬಳಿ ಬರುತ್ತಿದ್ದಾರೆ. ನಾನು ಜಿಲ್ಲೆಗಳಿಗೆ ಹೋದಾಗ ಈ ರೀತಿಯಾದಂತ ಸಣ್ಣ ಪುಟ್ಟ ಕೆಲಸಗಳಿಗೂ ನನ್ನ ಬಳಿ ಬಂದರೆ ನೀವಿದ್ದೂ ಏನು ಪ್ರಯೋಜನ. ಪ್ರತಿ ಜಿಲ್ಲೆಯಲ್ಲೂ ಜನತಾ ದರ್ಶನ ನಡೆಸಿ, ಅವರ ಸಮಸ್ಯೆಗಳಿಗೆ ಪರಿಹಾರ ಹುಡುಕಿ ಕೊಡಬೇಕು ಎಂದು ಸೂಚನೆ ನೀಡಿದ್ದಾರೆ.
ಜನತಾ ದರ್ಶನದಲ್ಲಿ ಸಲ್ಲಿಕೆಯಾಗುವ ಸಾರ್ವಜನಿಕರ ಅಹವಾಲುಗಳು ಈಗಾಗಲೇ ಚಾಲ್ತಿಯಲ್ಲಿರುವ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (ಐಪಿಜಿಆರ್‌ಎಸ್-ಇಂಟೆಗ್ರೇಟೆಡ್ ಪಬ್ಲಿಕ್ ಗ್ರಿವಿಯೆನ್ಸ್ ರಿಡ್ರೆಸಲ್ ಸಿಸ್ಟಂ) ತಂತ್ರಾಂಶದಲ್ಲಿ ದಾಖಲಾಗುತ್ತದೆ ಮತ್ತು ಇಲ್ಲಿಂದಲೇ ಸಂಬಂಧಪಟ್ಟ ಇಲಾಖೆಯ ಟೇಬಲ್ಲಿಗೆ ಅರ್ಜಿಗಳ ವಿಲೇವಾರಿಯೂ ನಡೆಯುತ್ತದೆ. ಬಳಿಕ ಕಾಳಜಿ ವಹಿಸಿ ಕಾಲಮಿತಿಯಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎನ್ನುವ ಸೂಚನೆ ಈಗಾಗಲೇ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ರವಾನೆಯಾಗಲಿದೆ.