Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾಸ ಸಾಹಿತ್ಯದ ಮೂಲಕ ಜನಸಾಮಾನ್ಯರನ್ನು ತಲುಪಿದ ಕನಕದಾಸರು : ಸಚಿವ ಟಿ.ರಘುಮೂರ್ತಿ

---Advertisement---

ಚಿತ್ರದುರ್ಗ. ನ.27: 12ನೇ ಶತಮಾನದಲ್ಲಿ ವಚನ ಸಾಹಿತ್ಯ ಚಳವಳಿ ನಡೆದಂತೆಯೇ, 16ನೇ ಶತಮಾನದಲ್ಲಿ ಕನಕದಾಸರು ತಮ್ಮ ದಾಸ ಸಾಹಿತ್ಯ ಮತ್ತು ಕೀರ್ತನೆಗಳ ಮೂಲಕ ಸಮಾಜದ ಎಲ್ಲ ವರ್ಗದ ಜನಸಾಮಾನ್ಯರನ್ನು ತಲುಪುವ ಮಹತ್ತರ ಕಾರ್ಯ ಮಾಡಿದ್ದಾರೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಬಣ್ಣಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಸಂತಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ರಾಜರಾಗಿದ್ದ ಕನಕದಾಸರು ನಂತರ ದಾಸರಾಗಿ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಉಡುಪಿಯ ಕನಕನ ಕಿಂಡಿಯಂತಹ ಐತಿಹಾಸಿಕ ಘಟನೆಗಳ ಮೂಲಕ ಅವರು ತಮ್ಮ ಭಕ್ತಿಯ ಶ್ರೇಷ್ಠತೆಯನ್ನು ಜಗತ್ತಿಗೆ ಸಾರಿದ್ದಾರೆ. ಅವರ ವಚನಗಳು ಮತ್ತು ಕೃತಿಗಳ ಆಶಯಗಳನ್ನು ನಮ್ಮ ಆಡಳಿತ ವ್ಯವಸ್ಥೆಯಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದರು.

ಹಿಂದುಳಿದ ಸಮಾಜದಿಂದ ಬಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಸುದೀರ್ಘ ಅವಧಿಗೆ ಆಡಳಿತ ನಡೆಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ದಿವಂಗತ ದೇವರಾಜ ಅರಸು ಅವರ ನಂತರ, ಬಸವಣ್ಣ ಹಾಗೂ ಕನಕದಾಸರ ತತ್ವಗಳನ್ನು ಆಡಳಿತದಲ್ಲಿ ಅಳವಡಿಸಿಕೊಂಡು ಅನೇಕ ಜನಪರ ಯೋಜನೆಗಳನ್ನು ನೀಡಿದ್ದಾರೆ. ಹಿಂದುಳಿದ ಸಮಾಜದವರಾಗಿ 17 ಬಾರಿ ರಾಜ್ಯ ಬಜೆಟ್ ಮಂಡಿಸಿರುವುದು ಹೆಮ್ಮೆಯ ಸಂಗತಿ ಎಂದು ಶ್ಲಾಘಿಸಿದರು.

ಚಿತ್ರದುರ್ಗ ನಗರದಲ್ಲಿ ಕನಕ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಮಾಜದ ಮುಖಂಡರು ಬೇಡಿಕೆಗಳಿಗೆ ಸ್ಪಂದಿಸಿದ ಸಚಿವರು, ಕನಕ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಮುಖ್ಯಮಂತ್ರಿಗಳು ಮತ್ತು ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ ಬಿಡುಗಡೆ ಮಾಡಿಸಲಾಗುವುದು. ಜಿಲ್ಲಾಡಳಿತದ ಮೂಲಕ ಸಮಾಜಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.

ಜಿಲ್ಲಾಧಿಕಾರಿ ಎಸ್.ರಮ್ಯಾ ಮಾತನಾಡಿ, ಕನಕದಾಸರು ಇಂದಿನ ಆಡಳಿತ ವ್ಯವಸ್ಥೆಗೆ ಹೇಗೆ ಪ್ರಸ್ತುತ ಎಂಬುದನ್ನು ನಾವು ಅರಿಯಬೇಕಿದೆ. ಅವರು ರಚಿಸಿರುವ ಕೀರ್ತನೆಗಳು ಕೇವಲ ಸಾಹಿತ್ಯವಲ್ಲ, ಅವು ನಮ್ಮ ದೈನಂದಿನ ಬದುಕು ಮತ್ತು ವೃತ್ತಿಜೀವನಕ್ಕೆ ಮಾರ್ಗದರ್ಶಿ ಸೂತ್ರಗಳಾಗಿವೆ ಎಂದು ಅಭಿಪ್ರಾಯಪಟ್ಟರು.

ಕನಕದಾಸರ ಕೀರ್ತನೆಗಳ ಸಾಲುಗಳನ್ನು ಉಲ್ಲೇಖಿಸಿದ ಜಿಲ್ಲಾಧಿಕಾರಿ ಎಸ್.ರಮ್ಯಾ, ‘ಕುಳಿತ ಸಭೆಯೊಳಗೆ ಕುಟಿಲ ನಡೆಸಲು ಬೇಡ’ ಎಂದು ದಾಸರು ಅಂದೇ ಹೇಳಿದ್ದಾರೆ. ನಮ್ಮ ಕಚೇರಿಗಳಲ್ಲಿ ಸಹೋದ್ಯೋಗಿಗಳ ವಿರುದ್ಧ ಪಿತೂರಿ ನಡೆಸುವುದು, ಎತ್ತಿಕಟ್ಟುವುದು ಸಲ್ಲದು. ಹಾಗೆಯೇ, “ಒಳ್ಳೆಯವನು ನಾನೆಂಬ ಬಲು ಹೆಮ್ಮೆಯಲಿ ಇರಬೇಡ” ಎಂಬಂತೆ, ನಾವು ತುಂಬಾ ಪ್ರಾಮಾಣಿಕರು, ದಕ್ಷರು ಎಂಬ ಅಹಂಕಾರವೂ ಅಧಿಕಾರಿಗಳಿಗೆ ಇರಬಾರದು’ ಎಂದರು.

ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ, ಮನುಷ್ಯ ತನ್ನೊಳಗಿನ ‘ನಾನು’ ಎಂಬ ಅಹಂಕಾರ ತೊರೆದಾಗ ಮಾತ್ರ ಸಮಾಜದಲ್ಲಿ ಉತ್ತಮ ಸ್ಥಾನ ಹಾಗೂ ಸಾರ್ಥಕ ಬದುಕು ಕಂಡುಕೊಳ್ಳಲು ಸಾಧ್ಯ. ಕನಕದಾಸರು ಇಡೀ ಮನುಕುಲಕ್ಕೆ ನೀಡಿದ ಈ ಸಂದೇಶ ಸಾರ್ವಕಾಲಿಕ ಎಂದು ಅಭಿಪ್ರಾಯಪಟ್ಟರು.
ಅಧಿಕಾರ, ಐಶ್ವರ್ಯ, ಶಕ್ತಿ, ಕುಲದ ಬಗೆಗಿನ ಅಹಂಕಾರ ಮನುಷ್ಯನನ್ನು ದಾರಿ ತಪ್ಪಿಸುತ್ತದೆ. ಕನಕದಾಸರು ತಮ್ಮ ಕೀರ್ತನೆಗಳು ಮತ್ತು ಬದುಕಿನ ಮೂಲಕ ಅಹಂಕಾರವನ್ನು ತ್ಯಜಿಸುವ ಪಾಠ ಕಲಿಸಿದ್ದಾರೆ ಎಂದು ತಿಳಿಸಿದ ಅವರು, ಸರ್ಕಾರದ ಸೌಲಭ್ಯಗಳ ಜೊತೆಗೆ, ಸಮಾಜದ ಸ್ಥಿತಿವಂತರು ಸೇರಿ ಕನಕದಾಸರ ಹೆಸರಿನಲ್ಲಿ ‘ರಿವಾಲ್ವಿಂಗ್ ಫಂಡ್’ ಸ್ಥಾಪಿಸುವ ಮೂಲಕ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಈ ನಿಧಿಯನ್ನು ಬಳಸುವಂತಾಗಲಿ ಎಂದು ಆಶಯ ವ್ಯಕ್ತಪಡಿಸಿದರು.

ಜಿಲ್ಲಾ ಕುರುಬರ ಸಂಘದ ಕಾರ್ಯದರ್ಶಿ ಬಿ.ಟಿ.ಜಗದೀಶ್ ಮಾತನಾಡಿ, ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ, ಈ ಬಾರಿ ಸಂತಶ್ರೇಷ್ಠ ಭಕ್ತ ಕನಕದಾಸರ ಜಯಂತಿಯನ್ನು ಅತ್ಯಂತ ಸರಳ ಆಚರಣೆಗೆ ಸೀಮಿತಗೊಳಿಸಲಾಗಿದೆ ಎಂದರು.

ಜಿಲ್ಲಾ ಕೇಂದ್ರ ಚಿತ್ರದುರ್ಗ ನಗರದಲ್ಲಿ ಕನಕ ಸಮುದಾಯ ಭವನ ನಿರ್ಮಿಸಲು ಒಂದು ಎಕರೆ ಭೂಮಿ ಮಂಜೂರು ಮಾಡುವಂತೆ ಹಿಂದಿನಿಂದಲೂ ಮನವಿ ಮಾಡಲಾಗಿತ್ತು. ಅದರಂತೆ ಸರ್ಕಾರ ಭೂಮಿ ಮಂಜೂರು ಮಾಡಿ, ರೂ.1.93 ಕೋಟಿ ಮಾರುಕಟ್ಟೆ ದರ ನಿಗದಿಪಡಿಸಿದೆ. ಆದರೆ, ಹಿಂದುಳಿದ ನಮ್ಮ ಸಮುದಾಯಕ್ಕೆ ಇಷ್ಟು ದೊಡ್ಡ ಮೊತ್ತ ಭರಿಸಲು ಆರ್ಥಿಕ ಶಕ್ತಿ ಇಲ್ಲ. ಆದ್ದರಿಂದ, ಶೇ. 10ರಷ್ಟು ರಿಯಾಯಿತಿ ದರದಲ್ಲಿ ಭೂಮಿ ಮಂಜೂರು ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ಸಚಿವ ಟಿ.ರಘುಮೂರ್ತಿ ಅವರಿಗೆ ಮನವಿ ಮಾಡಿದರು.

ಸರ್ಕಾರ ಈಗಾಗಲೇ ಸಮುದಾಯದ ವಿದ್ಯಾರ್ಥಿ ನಿಲಯದ ಕಟ್ಟಡ ನಿರ್ಮಾಣಕ್ಕೆ ರೂ.3 ಕೋಟಿ ಹಾಗೂ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ರೂ.50 ಲಕ್ಷ ಅನುದಾನ ಬಿಡುಗಡೆ ಮಾಡಿರುವುದಕ್ಕೆ ಅವರು ಕೃತಜ್ಞತೆ ಸಲ್ಲಿಸಿದ ಅವರು, ನಗರದ ಸಂಗೊಳ್ಳಿ ರಾಯಣ್ಣ ವೃತ್ತವು ಕಿರಿದಾಗಿದ್ದು, ಸಾಧ್ಯವಾದಷ್ಟು ವೃತ್ತವನ್ನು ಅಗಲೀಕರಣಗೊಳಿಸಿ, ಪ್ರತಿಮೆಗೆ ಸೂಕ್ತ ಭದ್ರತೆ ಒದಗಿಸಬೇಕು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಸಮುದಾಯದ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಹಾಸ್ಟೆಲ್ ಸೌಲಭ್ಯ ಕಲ್ಪಿಸಬೇಕು ಹಾಗೂ ಸಾರಥಿ ಯೋಜನೆಯಡಿ ಹೆಚ್ಚಿನ ವಾಹನಗಳು ಮತ್ತು ನೇರ ಸಾಲ ಸೌಲಭ್ಯ ಒದಗಿಸಬೇಕು ಎಂದು ಮನವಿ ಮಾಡಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯ ಕನ್ನಡ ವಿಷಯ ಪರಿವೀಕ್ಷಕ ಸಿ.ರಂಗನಾಯಕ್ ಉಪನ್ಯಾಸ ನೀಡಿ, ದಾಸಶ್ರೇಷ್ಠ ಕನಕದಾಸರು ಸಮಾಜದ ಅಂಕುಡೊಂಕುಗಳನ್ನು ತಿದ್ದಿದ ಮಹಾ ಮಾನವತಾವಾದಿ ಹಾಗೂ ವೈಚಾರಿಕ ಚಿಂತಕರು ಎಂದು ಹೇಳಿದರು.

ಮೋಹನ ತರಂಗಿಣಿ, ಹರಿಭಕ್ತಿಸಾರ, ನಳಚರಿತ್ರೆ ಹಾಗೂ ರಾಮಧಾನ್ಯ ಚರಿತೆಯಂತಹ ಮಹೋನ್ನತ ಕೃತಿಗಳ ಜೊತೆಗೆ ಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳನ್ನು ರಚಿಸಿ ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ. ಸತ್ಯವಂತರ ಸಂಗವಿರಲು ತೀರ್ಥವೇಕೆ ಎಂಬ ಕನಕದಾಸರ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಂಡು, ಜಾತಿ-ಮತ ಮೀರಿದ ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಎಸ್.ಆಕಾಶ್,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಸ್.ಶ್ರೀರಾಮ್, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಕೆ.ಓಂಕಾರಪ್ಪ ಸೇರಿದಂತೆ ಮತ್ತಿತರರು ಇದ್ದರು. ಗಂಗಾಧರ್ ಮತ್ತು ತಂಡದವರು ಗೀತಗಾಯನ ನಡೆಸಿಕೊಟ್ಟರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now