ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.28 : ರಾಜ್ಯದಲ್ಲಿ ಮಳೆ ಇಲ್ಲದೆ ಇದ್ದರು ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ನೂರಾರು ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿವೆ. ನಾಳೆ(ಸೆಪ್ಟೆಂಬರ್ 29) ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ.
ಚಿತ್ರದುರ್ಗದಲ್ಲಿ ಸಾರ್ವಜನಿಕರ ದೈನಂದಿನ ತೊಂದರೆಯಾಗದಂತೆ ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಅವರು ತಿಳಿಸಿದ್ದಾರೆ.
ಮಾರುಕಟ್ಟೆಗಳು, ಅಂಗಡಿಗಳು, ಶೋರೂಮ್‌ಗಳನ್ನು, ಶಾಲೆಗಳು, ಕಾಲೇಜುಗಳು ಅಥವಾ ಕಚೇರಿಗಳನ್ನು
ಬಲವಂತವಾಗಿ ಮುಚ್ಚಿಸುವಂತಿಲ್ಲ. ಸಾರ್ವಜನಿಕ ಸಾರಿಗೆ ಮತ್ತು ವಾಹನಗಳ (ಸರ್ಕಾರಿ ಅಥವಾ ಖಾಸಗಿ) ಸಂಚಾರಕ್ಕೆ ಯಾವುದೇ ರೀತಿಯ ಅಡ್ಡಿಪಡಿಸುವಂತಿಲ್ಲ.
ಗೌರವಾನ್ವಿತ ಸುಪ್ರೀಂ ಕೋರ್ಟ್/ಹೈಕೋರ್ಟ್ ನಿರ್ದೇಶನಗಳನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಲಾಗುತ್ತದೆ. ಜಿಲ್ಲೆಯಾದ್ಯಂತ ಸೂಕ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು, ರಾಜ್ಯ ಸರ್ಕಾರಿ ಸಂಸ್ಥೆಗಳು ಮತ್ತು ಇತರ ಸಾರ್ವಜನಿಕ ಆಸ್ತಿಗಳ ರಕ್ಷಣೆಗೆ ಸಾಕಷ್ಟು ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಅಧಿಕಾರಿಗಳು ಮೊಬೈಲ್ ಗಸ್ತು ತಿರುಗುತ್ತಿದ್ದಾರೆ.
ಕಾವೇರಿ ನೀರಿಗಾಗಿ ಮಂಗಳವಾರ ಬೆಂಗಳೂರು ಬಂದ್ ಯಶಸ್ವಿಯಾಗಿತ್ತು. ಇದರ ಬೆನ್ನಲ್ಲೇ ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ತಮಿಳುನಾಡಿಗೆ ನೀರು ಬಿಡುತ್ತಿರುವುದರಿಂದ ಕಾವೇರಿ ಕೊಳ್ಳದಲ್ಲಿ ದಿನೇ ದಿನೇ ನೀರು ಖಾಲಿಯಾಗುತ್ತಿದೆ. ಇದು ರೈತರ ಆಕ್ರೋಶ ಮತ್ತು ಆತಂಕಕ್ಕೆ ಕಾರಣವಾಗಿದೆ.