ಕಲೆಕ್ಷನ್ ‘ ಕೈ ‘ ಚಳಕ ಜೋರಾಗಿದೆ, ಪಂಚರಾಜ್ಯಗಳ ಪಾಲಿಗೆ ಕರ್ನಾಟಕ ಸಮೃದ್ಧ ಎಟಿಎಮ್ : ಐಟಿ ರೇಡ್ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

2 Min Read

 

ಬೆಂಗಳೂರು: ಇಂದು ಐಟಿ ರೇಡ್ ವೇಳೆ ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ಹಣ ಸಿಕ್ಕಿದೆ. ಈ ಬಗ್ಗೆ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಪಂಚರಾಜ್ಯ ಚುನಾವಣೆ ಘೋಷಣೆ ಆಗಿದ್ದೇ ತಡ, ರಾಜ್ಯದಲ್ಲಿ ಕುರುಡು ಕಾಂಚಾಣ ಕಂತೆ ಕಂತೆಯಾಗಿ ಬಾಕ್ಸ್ ಗಳಲ್ಲಿ ಕುಣಿಯುತ್ತಿದೆ! ಅದೂ ಮಂಚದ ಕೆಳಗೆ ಎಂದಿದ್ದಾರೆ.

ಐಟಿದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಯಾರ ಹೆಣದ ಮೇಲೆ ಸಂಗ್ರಹಿಸಿದ ಪಾಪದ ಹಣವಿದು? ಈ ಪ್ರಶ್ನೆಗಳಿಗೆ ಉತ್ತರ ಬೇಕಿದೆ. ಆಯ್ದ ಗುತ್ತಿಗೆದಾರರಿಗೆ ಬಿಬಿಎಂಪಿಯಿಂದ 650 ಕೋಟಿ ರೂ. ಬಿಡುಗಡೆಯಾದ ಬೆನ್ನಲ್ಲೇ ಈ 42 ಕೋಟಿ ರೂ. ಐಟಿ ಅಧಿಕಾರಿಗಳಿಗೆ ಸಿಕ್ಕಿಬೀಳುತ್ತದೆ. ಅಲ್ಲಿಗೆ ಕಲೆಕ್ಷನ್ ನಿಜ ಎಂದಾಯಿತು. ಅದು ಎಷ್ಟು ಪರ್ಸಂಟೇಜ್ ? ಅದರ ಹಿಂದೆ ಅಡಗಿ ಕೂತಿರುವ ಆದಿಪುರುಷರು ಯಾರು ?

23 ಬಾಕ್ಸ್ ಗಳಲ್ಲಿ ತುಂಬಿಡಲಾಗಿದ್ದ ಈ ಇಡುಗಂಟು ಪಕ್ಕದ ತೆಲಂಗಾಣಕ್ಕೆ ಹೊರಟು ನಿಂತಿತ್ತು ಎನ್ನುವುದು ಮಾಹಿತಿ. ಅಲ್ಲಿಗೆ ಚುನಾವಣೆಗಾಗಿ ಈ ಹಣವನ್ನು ಸಂಗ್ರಹ ಮಾಡಲಾಗಿತ್ತು ಎನ್ನುವುದು ಸತ್ಯ. ಈ ಕನಕ ಮಹಾಲಕ್ಷ್ಮಿಯ ಕಲೆಕ್ಷನ್ ಗೆ ‘ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ’ಯ ಕೈ ಕರಾಮತ್ತು ಅಂತ ಇನ್ನೊಂದು ಮಾಹಿತಿ. ಅಷ್ಟರಲ್ಲಿ ಐಟಿ ಇಲಾಖೆ ಮುಗಿಬಿದ್ದ ಪರಿಣಾಮ, ಗುಟ್ಟು ರಟ್ಟಾಗಿದೆ. ಅಲ್ಲಿಗೆ @INCKarnataka ಸರಕಾರದಲ್ಲಿ ಪರ್ಸಂಟೇಜ್ ಪಾರಮ್ಯ ಅವ್ಯಾಹತ ಎಂದಾಯಿತು?

ಈಗ ಹೇಳಿ ಸನ್ಮಾನ್ಯ @siddaramaiah ನವರೇ.. 42 ಕೋಟಿ ರೂ. ಬಗ್ಗೆ ಯಾವ ತನಿಖೆ ಮಾಡಿಸುತ್ತೀರಿ? ಸಿಬಿಐ, ಈಡಿ, ಹಾಲಿ ನ್ಯಾಯಾಧೀಶರು, ನಿವೃತ್ತ ನ್ಯಾಯಾಧೀಶರು..? ದಯಮಾಡಿ ಹೇಳಿ. ರೈತರು ಬರ, ವಿದ್ಯುತ್ ಬಿಕ್ಕಟ್ಟಿನಿಂದ ಕಂಗೆಟ್ಟಿದ್ದಾರೆ. ಗುತ್ತಿಗೆದಾರರು ಅಯೋಮಯ ಸ್ಥಿತಿಯಲ್ಲಿದ್ದಾರೆ. ಆದರೂ ಕಲೆಕ್ಷನ್ ‘ ಕೈ ‘ ಚಳಕ ಜೋರಾಗಿದೆ. ಪಂಚರಾಜ್ಯಗಳ ಪಾಲಿಗೆ ಕರ್ನಾಟಕ ಸಮೃದ್ಧ ಎಟಿಎಮ್. ಕಾವೇರಿ ನೀರು  ತಮಿಳುನಾಡಿಗೆ ನಿರಂತರ ಹರಿಯುತ್ತಿದ್ದರೆ, ಕನ್ನಡಿಗರ ತೆರಿಗೆಲಕ್ಷ್ಮೀ ಎಲೆಕ್ಷನ್ ರಾಜ್ಯಗಳ ಪಾಲಾಗುತ್ತಿದ್ದಾಳೆ.

ಆದಿಯಿಂದಲೂ ಇದೇ ಕಥೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಗೆ ಹಬ್ಬ. ಈಗಲೂ ಅದೇ ಆಗುತ್ತಿದೆ. ಪಂಚರಾಜ್ಯಗಳ ಚುನಾವಣೆಗಾಗಿ ಕರ್ನಾಟಕಕ್ಕೆ ಕನ್ನ ಹೊಡೆಯಲಾಗಿದೆ. ವೋಟು ಕೊಟ್ಟ ತಪ್ಪಿಗೆ ಕಾಂಗ್ರೆಸ್ ಉಂಡು ಹೋಗುತ್ತಿದೆ, ಕೊಂಡು ಹೋಗುತ್ತಿದೆ. ಇದು ಕನ್ನಡಿಗರ ಕರ್ಮ ಎಂದು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *