ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 16 : ಬೀದಿ ನಾಯಿಗಳಿಗೆ ಬಿರಿಯಾನಿ ತಿನಿಸಲು ಹೊರಟಿರುವ ರಾಜ್ಯ ಸರ್ಕಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಶೂ ವಿತರಿಸದಿರುವುದನ್ನು ವಿರೋಧಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶ್ವಾನಗಳೊಂದಿಗೆ ವಿನೂತನವಾಗಿ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ರಾಜ್ಯದ ಮುಖ್ಯಮಂತ್ರಿ ಬುಧವಾರ ಮನವಿ ಸಲ್ಲಿಸಿದರು.
ಪ್ರವಾಸಿ ಮಂದಿರದಿಂದ ಬರಿಗಾಲಿನಲ್ಲಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಶಿಕ್ಷಣ ಮಂತ್ರಿ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಸರ್ಕಾರಿ ಶಾಲೆಗಳು ಆರಂಭವಾಗಿ ನಾಲ್ಕು ತಿಂಗಳಾಗಿದ್ದರೂ ಇನ್ನು ಮಕ್ಕಳಿಗೆ ಶೂ ವಿತರಿಸಿಲ್ಲ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಪಾದರಕ್ಷೆ ಧರಿಸದೆ ಬರಿಗಾಲಿನಲ್ಲಿ ಓಡಾಡಬೇಕು. ಸರ್ಕಾರಿ ವಾಹನ ಬಳಸಬಾರದು. ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳಿಲ್ಲ. ಡಿ. ಗ್ರೂಪ್ ನೌಕರರಿಲ್ಲ. ಶಿಕ್ಷಕರುಗಳ ಕೊರತೆಯಿರುವುದರಿಂದ ಪೋಷಕರುಗಳು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿರುವುದರಿಂದ ಸರ್ಕಾರದ ಯೋಜನೆಗಳೆಲ್ಲಾ ಹಳ್ಳ ಹಿಡಿಯುತ್ತಿವೆ. ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಬಿ.ಬಿ.ಎಂ.ಪಿ. ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಬಿರಿಯಾನಿ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ಒಂದು ನಾಯಿಗೆ 27 ರೂ.ಗಳನ್ನು ವೆಚ್ಚ ಮಾಡುತ್ತಿರುವುದು ಯಾವ ನ್ಯಾಯ? ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಮಕ್ಕಳಿಗೆ ಶೂ, ಟೈ. ಬೆಲ್ಟ್, ಸಮವಸ್ತ್ರಗಳನ್ನು ನೀಡುವ ಮೂಲಕ ಸರ್ಕಾರಿ ಶಾಲೆಗಳನ್ನು ಹೈಟೆಕ್ ಶಾಲೆಗಳನ್ನು ಪರಿವರ್ತಿಸಬೇಕು. ಇಲ್ಲವಾದಲ್ಲಿ ಸರ್ಕಾರಿ ಶಾಲೆಗಳ ಎದುರು ಪ್ರತಿಭಟನೆ ಮಾಡಲಾಗುವುದೆಂದು ಎಚ್ಚರಿಸಿದರು.
ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ರಾಜ್ಯ ಸಮಿತಿ ಸದಸ್ಯ ನಿಸಾರ್ ಅಹಮದ್, ಉಪಾಧ್ಯಕ್ಷರುಗಳಾದ ರತ್ನಮ್ಮ, ಮುಜಾಹಿದ್, ಜಿಲ್ಲಾ ಸಂಚಾಲಕ ನಾಗೇಶ್, ಅಖಿಲೇಶ್, ಶಶಿ, ಜಗದೀಶ್ ಸಿ. ವಿಜಯ್‍ಬಾಬು, ಹರೀಶ್‍ಕುಮಾರ್ ಪಿ.ಆರ್. ಅವಿನಾಶ್ ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
